149 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು; ಒಂದೇ ಪಂದ್ಯದಲ್ಲಿ ಶತಕ, 7 ವಿಕೆಟ್, ಅಪರೂಪದ ದಾಖಲೆ ಬರೆದ ದಕ್ಷಿಣ ಆಫ್ರಿಕಾ ಆಟಗಾರ!

ಢಾಕಾ: ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ವಿಯಾನ್ ಮಲ್ಡರ್ ಅಮೋಘ ಪ್ರದರ್ಶನ ನೀಡುವ ಮೂಲಕ ಕ್ರಿಕೆಟ್ ಇತಿಹಾಸದಲ್ಲಿ ಅಪರೂಪದ ದಾಖಲೆ ನಿರ್ಮಿಸಿದ್ದಾರೆ.
ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್‌ನಲ್ಲಿ ಶತಕ ಸಿಡಿಸಿದ ವಿಯಾನ್ ಮಲ್ಡರ್, ಬಳಿಕ ಬೌಲಿಂಗ್‌ನಲ್ಲಿ ಕೇವಲ 31 ರನ್ ನೀಡಿ ಏಳು ವಿಕೆಟ್ ಕಬಳಿಸಿ ತಂಡದ ಭರ್ಜರಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಸೆಂಚುರಿಯನ್‌ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಇನಿಂಗ್ಸ್ ಹಾಗೂ 219 ರನ್‌ಗಳ ಭರ್ಜರಿ ಜಯ ದಾಖಲಿಸಿತು.
ಇದರೊಂದಿಗೆ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಕ್ಲೀನ್‌ಸ್ವೀಪ್ ಮಾಡಿತು. ಮೊದಲ ಇನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ 7 ವಿಕೆಟ್‌ಗೆ 494 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ಇದಕ್ಕೆ ಉತ್ತರವಾಗಿ ಬಾಂಗ್ಲಾದೇಶ ಮೊದಲ ಇನಿಂಗ್ಸ್‌ನಲ್ಲಿ 184 ರನ್‌ಗಳಿಗೆ ಆಲೌಟ್ ಆಯಿತು.
ಬಾಂಗ್ಲಾದೇಶದ ಪರ ಆರಂಭಿಕರಾದ ಮಹ್ಫಿಜುಲ್ ಇಸ್ಲಾಂ ಮತ್ತು ತಂಜಿದ್ ಹಸನ್ ಮೊದಲ ವಿಕೆಟ್‌ಗೆ ಅರ್ಧಶತಕದ ಜೊತೆಯಾಟವಾಡಿದರು. ಆದರೆ, ತಂಜಿದ್ (29) ಹಾಗೂ ಮೊಮಿನುಲ್ ಹಕ್ ಅವರನ್ನು ಔಟ್ ಮಾಡುವ ಮೂಲಕ ಮಲ್ಡರ್ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟರು.
ಮಾರ್ಕೊ ಯಾನ್ಸನ್ ಅವರು ಮಹ್ಫಿಜುಲ್ (38) ಅವರನ್ನು ಪೆವಿಲಿಯನ್‌ಗೆ ಕಳುಹಿಸಿದರು. ಬಳಿಕ ತೌಹಿದ್ ಹೃದಯ್ 33 ಎಸೆತಗಳಲ್ಲಿ 41 ರನ್ ಗಳಿಸಿ ಪ್ರತಿರೋಧ ತೋರಿದರೂ, ಕಗಿಸೊ ರಬಾಡ ಅವರಿಗೆ ವಿಕೆಟ್ ಒಪ್ಪಿಸಿದರು.
ಇತ್ತ ಮಲ್ಡರ್ ತಮ್ಮ ಮಾರಕ ಬೌಲಿಂಗ್ ಮುಂದುವರಿಸಿ ಲಿಟನ್ ದಾಸ್, ಜಾಕರ್ ಅಲಿ, ಶೊರಿಫುಲ್ ಇಸ್ಲಾಂ, ನಾಯಕ ನಜ್ಮುಲ್ ಹೊಸೇನ್ ಶಾಂಟೊ ಹಾಗೂ ತಸ್ಕಿನ್ ಅಹ್ಮದ್ ಅವರನ್ನು ಔಟ್ ಮಾಡಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಐದು ವಿಕೆಟ್ ಗೊಂಚಲು ಪಡೆದ ಅವರು, ಏಳು ವಿಕೆಟ್‌ಗಳೊಂದಿಗೆ ಇನ್ನಿಂಗ್ಸ್ ಮುಗಿಸಿದರು.
ಕೊನೆಯ ವಿಕೆಟ್ ಅನ್ನು ಯಾನ್ಸನ್ ಪಡೆದರೆ, ಮಲ್ಡರ್ ಕ್ಯಾಚ್ ಹಿಡಿದು ಬಾಂಗ್ಲಾದೇಶದ ಇನಿಂಗ್ಸ್‌ಗೆ ತೆರೆ ಎಳೆದರು. ಈ ಗೆಲುವಿನಿಂದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2025-27ರ ಅಂಕಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ ತನ್ನ ಅಗ್ರಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ. ಬಾಂಗ್ಲಾದೇಶ ಒಂದು ಸ್ಥಾನ ಕೆಳಕ್ಕೆ ಕುಸಿದಿದೆ.
149 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು
ಟೆಸ್ಟ್ ಕ್ರಿಕೆಟ್‌ನ 149 ವರ್ಷಗಳ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ತ್ರಿಶತಕ ಸಿಡಿಸಿ, ಏಳು ವಿಕೆಟ್‌ಗಳ ಗೊಂಚಲು ಪಡೆದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಮಲ್ಡರ್ ಪಾತ್ರರಾಗಿದ್ದಾರೆ.
2025ರ ಜುಲೈನಲ್ಲಿ ಜಿಂಬಾಬ್ವೆ ವಿರುದ್ಧ ಬುಲವಾಯೊದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಅವರು ಅಜೇಯ 367 ರನ್ ಗಳಿಸಿದ್ದರು.
ಇದೀಗ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 178 ಎಸೆತಗಳಲ್ಲಿ 100 ರನ್ ಗಳಿಸಿದ ಮಲ್ಡರ್, ಎರಡನೇ ಇನಿಂಗ್ಸ್‌ನಲ್ಲಿ 11 ಓವರ್‌ಗಳಲ್ಲಿ 31 ರನ್ ನೀಡಿ ಏಳು ವಿಕೆಟ್ ಪಡೆದರು.
ಈ ಮೂಲಕ ಒಂದೇ ಟೆಸ್ಟ್ ಪಂದ್ಯದಲ್ಲಿ ಶತಕ ಹಾಗೂ ಏಳು ವಿಕೆಟ್ ಪಡೆದ ಐದನೇ ಆಟಗಾರ ಎನಿಸಿಕೊಂಡಿದ್ದಾರೆ. 1980ರಲ್ಲಿ ಇಂಗ್ಲೆಂಡ್‌ನ ಇಯಾನ್ ಬೋಥಮ್ ಬಳಿಕ ಈ ಸಾಧನೆ ಮಾಡಿದ ಮೊದಲ ವೇಗದ ಬೌಲರ್ ಎಂಬ ಕೀರ್ತಿಯೂ ಅವರಿಗೆ ಸಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



