

ಕ್ರೈಸ್ಟ್‌ಚರ್ಚ್ (ನ್ಯೂಜಿಲೆಂಡ್): ನ್ಯೂಜಿಲೆಂಡ್ ವಿರುದ್ಧ ಶನಿವಾರ ನಡೆದ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಿಲಕ್ ವರ್ಮಾ(ಅಜೇಯ-51) ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ನಾಲ್ಕು ವಿಕೆಟ್ ಗಳ ರೋಚಕ ಗೆಲುವು ಸಾಧಿಸಿದೆ. ಇದರೊಂದಿಗೆ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 2-0 ಮುನ್ನಡೆ ಪಡೆದುಕೊಂಡಿದೆ.
ಇಂದು ನ್ಯೂಜಿಲೆಂಡ್‌ನ ದಕ್ಷಿಣ ದ್ವೀಪದಲ್ಲಿರುವ ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್‌ನಲ್ಲಿ ನಡೆದ ಪಂದ್ಯದಲ್ಲಿ, ಟಾಸ್ ಗೆದ್ದ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್, ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 180 ರನ್‌ಗಳ ಉತ್ತಮ ಮೊತ್ತವನ್ನು ಸೇರಿಸಿತು.
ಗೆಲುವಿಗೆ 181 ರನ್ ಗಳ ಈ ಗುರಿ ಬೆನ್ನಟ್ಟಿದ ಭಾರತ ಕೊನೆಯ ಓವರ್(19.5)ನಲ್ಲಿ ಆರು ವಿಕೆಟ್ ನಷ್ಟಕ್ಕೆ 181 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು.
ಭಾರತದ ಪರ ತಿಲಕ್ ವರ್ಮಾ 26 ಎಸೆತಗಳಲ್ಲಿ 51 ರನ್, ಅಭಿಷೇಕ್ ಶರ್ಮಾ 21 ಎಸೆತಗಳಲ್ಲಿ 27, ನಿತೀಶ್ ಕುಮಾರ್ ರೆಡ್ಡಿ 13 ಎಸೆತಗಳಲ್ಲಿ 26 ರನ್‌ಗಳ ಕೊಡುಗೆ ನೀಡಿದರು. ನಮನ್ ಧೀರ್ 17 ಎಸೆತಗಳಲ್ಲಿ 3 ಸಿಕ್ಸರ್, 1 ಬೌಂಡರಿ ಸಿಡಿಸಿ 31 ರನ್ ಕಲೆ ಹಾಕಿದರು.
ಇನ್ನು ವೇಗದ ಬೌಲರ್ ಭುವನೇಶ್ವರ್ ಕುಮಾರ್ ಅವರು ಮೊದಲ ಪಂದ್ಯದಲ್ಲಿ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ. ಆದರೆ ಎರಡನೇ ಟಿ20 ಪಂದ್ಯದಲ್ಲಿ ವಿಕೆಟ್ಗಳ ಖಾತೆ ತೆರೆಯುವಲ್ಲಿ ಯಶಸ್ವಿಯಾದ ಭುವನೇಶ್ವರ್ ಕುಮಾರ್ ರನ್ಗಳಿಗೆ ಕಡಿವಾಣ ಹಾಕುವಲ್ಲಿ ವಿಫಲರಾದರು. ಈ ವಿಕೆಟ್‌ನೊಂದಿಗೆ ಭುವನೇಶ್ವರ್ ಕುಮಾರ್ ಅವರ ಸುದೀರ್ಘ ಕಾಯುವಿಕೆ ಅಂತ್ಯಗೊಂಡಿತು. ಅವರು ಕೊನೆಯ ಬಾರಿಗೆ ಅಂತರರಾಷ್ಟ್ರೀಯ ವಿಕೆಟ್ ಪಡೆದಿದ್ದು, 2022ರ ನವೆಂಬರ್ 20ರಂದು ಮೌಂಟ್ ಮೌಂಗನುಯಿಯಲ್ಲಿ ನ್ಯೂಜಿಲೆಂಡ್ ವಿರುದ್ಧವೇ ಆಗಿತ್ತು. ಇದೀಗ ಭುವಿ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.