ಜಿಲ್ಲಾ ಸುದ್ದಿ

ಸ್ವಾತಂತ್ರ್ಯ ದಿನಾಚರಣೆಗೆ ನಗರ ಸಜ್ಜು

ಸ್ವಾತಂತ್ರ್ಯ ದಿನಾಚರಣೆಗೆ ನಗರ ಸಜ್ಜು
Published On :

-56 ಹ್ಯಾಂಡಿಕ್ಯಾಮ್‌ಗಳಲ್ಲಿ ಕಾರ್ಯಕ್ರಮ ಸುತ್ತ ಚಿತ್ರೀಕರಣ

ಬೆಂಗಳೂರು
: ಸ್ವಾತಂತ್ರ ದಿನಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರದಾದ್ಯಂತ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎಂ.ಎನ್ ರೆಡ್ಡಿ ತಿಳಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಭದ್ರತಾ ಕ್ರಮಗಳ ಬಗ್ಗೆ ಅವರು ಮಾಹಿತಿ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸುವ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿವಿಲ್ ಪೊಲೀಸ್, ನಗರ ಸಶಸ್ತ್ರ ಮೀಸಲು ಪೊಲೀಸರು, ಶ್ವಾನದಳ ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳ, ಮಫ್ತಿ ಪೊಲೀಸರು ಸೇರಿದಂತೆ 1,200 ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಈಗಾಗಲೇ ಮೈದಾನವನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದ್ದು ಕಳೆದ ನಾಳ್ಕೈದು ದಿನಗಳಿಂದ ಮೈದಾನದ ಸುತ್ತಮುತ್ತ ತೀವ್ರ ತಪಾಸಣೆ ನಡೆಸಲಾಗುತ್ತಿದೆ.

ನಗರದ ಹೋಟೆಲ್‌ಗಳು, ಲಾಡ್ಜ್‌ಗಳಲ್ಲಿ ಹೋಗುವ-ಬರುವ ವ್ಯಕ್ತಿಗಳ ಮೇಲೆ ನಿಗಾ ಇರಿಸಲಾಗಿದೆ. ಅನುಮಾನಾಸ್ಪದ ವ್ಯಕ್ತಿಗಳ ತಪಾಸಣೆ ನಡೆಸಲಾಗುತ್ತಿದೆ. ಸ್ವಾತಂತ್ರ್ಯ ದಿನಾಚರಣೆಗೆ ಯಾವುದೇ ಬೆದರಿಕೆ ಇಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಎಲ್ಲ ಭದ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಮಾಣಿಕ್ ಷಾ ಪರೇಡ್ ಮೈದಾನಕ್ಕೆ ಬರುವ ಎಲ್ಲರನ್ನು ಡೋರ್ ಮೆಟಲ್ ಡಿಟೆಕ್ಟರ್‌ಗಳಿಂದ ತಪಾಸಣೆ ನಡೆಸಲಾಗುತ್ತದೆ. ಮೈದಾನದ ಹೊರಗೆ ಹಾಗೂ ಒಳಗೆ ಚಲನವಲನಗಳ ಮೇಲೆ ನಿಗಾ ಇರಿಸಲು 40 ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. 56 ಹ್ಯಾಂಡಿಕ್ಯಾಮ್‌ಗಳ ಮೂಲಕ ಸಿಬ್ಬಂದಿ ವಿಡಿಯೋ ಚಿತ್ರೀಕರಣ ಮಾಡಿಕೊಳ್ಳಲಿದ್ದಾರೆ ಎಂದು ರೆಡ್ಡಿ ಮಾಹಿತಿ ನೀಡಿದರು.

11 ಸಾವಿರ ಆಸನ ವ್ಯವಸ್ಥೆ: ಶುಕ್ರವಾರ ಬೆಳಗ್ಗೆ 8.58ಕ್ಕೆ ಮೈದಾನಕ್ಕೆ ಬರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾರತೀಯ ರಕ್ಷಣಾ ಪಡೆಯ ಮೂವರು ಹಿರಿಯ ಅಧಿಕಾರಿಗಳ ಪರಿಚಯ ಮಾಡಿಕೊಂಡು, 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ವೇಳೆ ವಾಯು ಪಡೆ ಹೆಲಿಕಾಫ್ಟ್‌ರ್ ಮೂಲಕ ಪುಷ್ಪವೃಷ್ಟಿ ಮಾಡಲಿದ್ದಾರೆ. ಮೈದಾನದಲ್ಲಿ ಗಣ್ಯರು, ಅಧಿಕಾರಿಗಳು, ಸಾರ್ವಜನಿಕರಿಗೆ 11 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಲಕ್ಷ್ಮೀನಾರಾಯಣ್ ತಿಳಿಸಿದರು.

ತುರ್ತು ಪರಿಸ್ಥಿತಿ ಎದುರಿಸಲು ಸ್ಥಳದಲ್ಲಿ 22 ಆ್ಯಂಬುಲೆನ್ಸ್ ಮತ್ತು 30 ವೈದ್ಯರನ್ನೊಳಗೊಂಡ 120 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಅಲ್ಲದೇ 15 ಆಸ್ಪತ್ರೆಗಳಲ್ಲಿ 100 ಹಾಸಿಗೆ ಹಾಗೂ ವೈದ್ಯರು ಸೇರಿ 250 ಸಿಬ್ಬಂದಿಯನ್ನು ಮೀಸಲಿರಿಸಲಾಗಿದೆ. 3 ಅಗ್ನಿ ಶಾಮಕ ವಾಹನ ಮತ್ತು ಸಿಬ್ಬಂದಿಯನ್ನು ಮೈದಾನದಲ್ಲಿ ನಿಯೋಜಿಸಲಾಗಿದೆ ಎಂದು ಲಕ್ಷ್ಮೀನಾರಾಯಣ್ ತಿಳಿಸಿದರು.

ಯಾರಿಗೆ ಎಲ್ಲಿ ಪ್ರವೇಶ?
ಗೇಟ್ ನಂ.1: ಗಣ್ಯರು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು

ಗೇಟ್ ನಂ.2: ಅತಿಗಣ್ಯರು ಮತ್ತು ಮಿಲಿಟರಿ ಅಧಿಕಾರಿಗಳು

ಗೇಟ್ ನಂ.3 ಸ್ವಾತಂತ್ರ್ಯ ಹೋರಾಟಗಾರರು, ನಿವೃತ್ತ ಮಿಲಿಟರಿ ಅಧಿಕಾರಿಗಳು, ಬಿಎಸ್‌ಎಫ್ ಅಧಿಕಾರಿಗಳು, ಪತ್ರಕರ್ತರು

ಗೇಟ್ ನಂ. 4-5: ಸಾರ್ವಜನಿಕರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.