ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವುದಿಲ್ಲ

ರಾಜ್ಯ ಸರ್ಕಾರ ಜನಸ್ನೇಹಿ, ಜನಪರ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಿದೆ...
ಅರಣ್ಯ ಸಚಿವ ರಮಾನಾಥ ರೈ
ಅರಣ್ಯ ಸಚಿವ ರಮಾನಾಥ ರೈ

ಬೆಳಗಾವಿ: ಡಾ.ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಜನಸ್ನೇಹಿ, ಜನಪರ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಿದೆ ಎಂದು ಅರಣ್ಯ ಸಚಿವ ರಮಾನಾಥ ರೈ ಹೇಳಿದ್ದಾರೆ.

ಬುಧವಾರ ಮೇಲ್ಮನೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಮಹಾಂತೇಶ ಕವಟಗಿಮಠ ಅವರು ಕಸ್ತೂರಿ ರಂಗನ್ ವರದಿ ಬಗ್ಗೆ ಪ್ರಸ್ತಾಪಿಸಿದರು. ಅದಕ್ಕೆ ಉತ್ತರಿಸಿದ ಅರಣ್ಯ ಸಚಿವರು, ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮೈಸೂರು, ಚಾಮರಾಜನಗರ ಸೇರಿದಂತೆ 10 ಜಿಲ್ಲೆಗಳಿವೆ.

ಈ ಪ್ರದೇಶದಲ್ಲಿ ಅದಿರು ಗಣಿಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕಲ್ಲು ಮತ್ತು ಮರಳು ಗಣಿಗಾರಿಕೆ ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಕಸ್ತೂರಿ ರಂಗನ್ ವರದಿ ಅನುಷ್ಠಾನದ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿರುವ ಗ್ರಾಮಗಳನ್ನು ಸಂರಕ್ಷಿತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ಈ ಕುರಿತು ಸಾಧಕ-ಬಾಧಕಗಳ ಕುರಿತು ಚರ್ಚಿಸಲು ಸಚಿವ ಸಂಪುಟದ ಉಪ ಸಮಿತಿ ರಚಿಸಲಾಗಿದೆ.

ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಗ್ರಾಮಸ್ಥರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸುವುದಿಲ್ಲ. ಹಾಗಾಗಿ, ಯಾರೂ ಆತಂಕಗೊಳ್ಳುವ ಅಗತ್ಯ ಇಲ್ಲ. ಅಲ್ಲದೇ ಈ ಕುರಿತು ತಪ್ಪು ಮಾಹಿತಿ ನೀಡಿ ಅರಣ್ಯ ಪ್ರದೇಶದ ವಾಸಿಗಳಲ್ಲಿ ಯಾರೂ ಗೊಂದಲ ಸೃಷ್ಟಿಸಬಾರದು ಎಂದು ಮನವಿ ಮಾಡಿದರು.

ಡಾ. ಕಸ್ತೂರಿ ರಂಗನ್ ವರದಿ ಅನುಷ್ಠಾನಗೊಳಿಸುವ ಸಂಬಂಧ ಕೇಂದ್ರ ಪರಿಸರ ಮತ್ತು ಅರಣ್ಯ ಮಂತ್ರಾಲಯ ಕಳೆದ ಮಾರ್ಚ್ 10 ರಂದು 2ನೇ ಅಧಿಸೂಚನೆ ಹೊರಡಿಸಿದೆ. ಕೇರಳ ರಾಜ್ಯ ಹೊರತುಪಡಿಸಿದರೆ ಬೇರೆ ಯಾವುದೇ ರಾಜ್ಯಗಳು ಕೇಂದ್ರಕ್ಕೆ ತನ್ನ ವರದಿ ನೀಡಿಲ್ಲ.

ರಾಜ್ಯ ಸರ್ಕಾರವು ಶೀಘ್ರವೇ ಜನಪರ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಲಿದೆ. ತಮಿಳುನಾಡು, ಗೋವಾ, ಮಹಾರಾಷ್ಟ್ರ ರಾಜ್ಯಗಳು ಇನ್ನೂ ವರದಿ ನೀಡಿಲ್ಲ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com