ರಾಜ್ಯದ 36 ಶಾಲೆಗಳಲ್ಲಿ ಶೌಚಾಲಯವಿಲ್ಲ!

ಬೆಂಗಳೂರು: ಬೆಂಗಳೂರು ದಕ್ಷಿಣ ವಲಯದಲ್ಲಿರುವ ಆರು ಶಾಲೆಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 36 ಶಾಲೆಗಳಲ್ಲಿ ಶೌಚಾಲಯವಿಲ್ಲ.
ಹೌದು, ರಾಜ್ಯದಲ್ಲಿ ಒಟ್ಟು 36 ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಶೌಚಾಲಯಗಳಿಲ್ಲ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ವರದಿ ಹೇಳಿದೆ.
ಆದರೆ, ಈ ಆರೋಪವನ್ನು ತಳ್ಳಿ ಹಾಕಿರುವ ರಾಜ್ಯ ಶಿಕ್ಷಣ ಅಧಿಕಾರಿಗಳು ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯವಿದೆ ಎಂದು ಸಮರ್ಥಿಸಿಕೊಂಡಿದೆ.
ಕೇಂದ್ರ ಸಚಿವಾಲಯ ಅಧಿಕೃತ ವೆಬ್ಸೈಟ್ನಲ್ಲಿ ಕರ್ನಾಟಕ ರಾಜ್ಯದ 36 ಶಾಲೆಗಳಲ್ಲಿ ಶೌಚಾಲಯವಿಲ್ಲ ಎಂದು ಪ್ರಕಟಿಸಿದೆ.
ಕರ್ನಾಟಕದಲ್ಲಿ ಒಟ್ಟು 44,672 ಸರ್ಕಾರಿ ಶಾಲೆಗಳಿದ್ದು, 36 ಶಾಲೆಗಳಲ್ಲಿ ಶೌಚಾಲಯವಿಲ್ಲ. ಬೆಂಗಳೂರು ದಕ್ಷಿಣ ವಲಯದಲ್ಲಿರುವ ರಾಜರಾಜೇಶ್ವರಿನಗರ, ಬ್ಯಾಟರಾಯನಪುರ. ಆರ್ಪಿಸಿ ಲೇಔಟ್, ಚಿನ್ನಯ್ಯನ ಪಾಳ್ಯ, ದೊಡ್ಡಬಸ್ತಿ ಮತ್ತು ಕೆ.ಆರ್ ಪುರಂನ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯವಿಲ್ಲ ಎಂದು ಹೇಳಲಾಗಿದೆ.
ಶಿಕ್ಷಣ ಇಲಾಖೆ ಪ್ರತಿಯೊಂದು ಶಾಲೆಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು ಎಂಬ ಆದೇಶ ಹೊರಡಿಸಿತ್ತು. ಆದರೆ ಈ ಶಾಲೆಗಳಲ್ಲಿ ಸಾಮಾನ್ಯ ಶೌಚಾಲಯ ವ್ಯವಸ್ಥೆ ಇಲ್ಲದಿರುವುದು ವಿಷಾಧನೀಯ ಸಂಗತಿ.
962 ಸರ್ಕಾರಿ ಶಾಲೆ, 370 ಅನುದಾನಿತ ಶಾಲೆಗಳು ಹಾಗೂ 2,612 ಖಾಸಗಿ ಶಾಲೆಗೆಳು ಸೇರಿದಂತೆ ಒಟ್ಟು 3,944 ಶಾಲೆಗಳನ್ನು ಒಳಗೊಂಡಿರುವ ಬೆಂಗಳೂರು ದಕ್ಷಿಣ ವಲಯ, ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಿದೆ ಎಂದು ಹೇಳಲಾಗುತ್ತಿತ್ತು.
ಶಾಲೆಗಳಲ್ಲಿ ಶೌಚಾಲಯ ಇಲ್ಲದಿರುವ ರಾಜ್ಯ ಜಿಲ್ಲಾ ಪಟ್ಟಿಯಲ್ಲಿ ಚಿಕ್ಕಮಗಳೂರು ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಜಿಕ್ಕಮಗಳೂರಿನ 16 ಶಾಲೆಗಳಲ್ಲಿ ಶೌಚಾಲಯಗಳಿಲ್ಲ ಎಂದು ಮೂಲಗಳು ತಿಳಿಸಿವೆ.
ಪ್ರತಿಯೊಂದು ಶಾಲೆಗಳಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕು ಎಂದು ಆದೇಶಿಸಿ, ರಾಜ್ಯ ಹೈಕೋರ್ಟ್ ಮಾರ್ಚ್ 2013 ಗಡುವು ನೀಡಿತ್ತು. ಹೈಕೋರ್ಟ್ ಗಡುವು ಮುಗಿದಿದ್ದರೂ, ಇನ್ನೂ ಕೆಲವು ಶಾಲೆಗಳಲ್ಲಿ ಶೌಚಾಲಯ ಇಲ್ಲದಿರುವುದು ದುರದೃಷ್ಟಕರ ಸಂಗತಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


