ಜಿಲ್ಲಾ ಸುದ್ದಿ

ವಿಷ್ಣು ಸ್ಮಾರಕಕ್ಕೆ ಭೂಮಿ ನೀಡಲ್ಲ: ಅರಣ್ಯ ಇಲಾಖೆ ಸ್ಪಷ್ಟನೆ

ವಿಷ್ಣು ಸ್ಮಾರಕಕ್ಕೆ ಭೂಮಿ ನೀಡಲ್ಲ: ಅರಣ್ಯ ಇಲಾಖೆ ಸ್ಪಷ್ಟನೆ
Published On :

ಬೆಂಗಳೂರು: ದಿ.ನಟ ಸಾಹಸ ಸಿಂಹ ವಿಷ್ಣು ವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಅರಣ್ಯ ಭೂಮಿ ಬಳಕೆ ಮಾಡದಂತೆ ಅರಣ್ಯ ಇಲಾಖೆ ಸರ್ಕಾರಕ್ಕೆ ಪತ್ರ ಬರೆದಿದೆ.

ಸಾಹಸ ಸಿಂಹ ವಿಷ್ಟುವರ್ಧನ್ ಅವರು ವಿಧಿವಶರಾಗಿ ನಾಲ್ಕು ವರ್ಷಗಳೇ ಕಳೆದರೂ ಅವರ ಸ್ಮಾರಕ ನಿರ್ಮಾಣ ವಿಚಾರ ಮಾತ್ರ ಇಂದಿಗೂ ವಿವಾದಾತ್ಮಕವಾಗಿಯೇ ಇದೆ. ಈ ಹಿಂದೆ ಸ್ಮಾರಕ ನಿರ್ಮಾಣಕ್ಕಾಗಿ ಬೆಂಗಳೂರು ಹೊರವಲಯದ ಬೈಲಸಂದ್ರದ ಸರ್ವೇ ನಂಬರ್ 22ರಲ್ಲಿ ಸುಮಾರು 2 ಎಕರೆ ಜಾಗವನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅರಣ್ಯ ಇಲಾಖೆ ಸರ್ಕಾರ ಸ್ಮಾರಕ ನಿರ್ಮಾಣಕ್ಕೆ ನೀಡಿರುವ ಜಾಗ ತನ್ನ ಅರಣ್ಯ ಇಲಾಖೆ ವ್ಯಾಪ್ತಿಗೆ ಸೇರಿದ್ದಾಗಿದ್ದು, ಆ ಜಾಗದಲ್ಲಿ ಸ್ಮಾರಕ ನಿರ್ಮಾಣ ಮಾಡದಂತೆ ಅರಣ್ಯ ಇಲಾಖೆ ಪತ್ರ ಬರೆದಿದೆ.

ಸರ್ಕಾರ ನಿಗದಿ ಮಾಡಿರುವ ಜಾಗ ಅರಣ್ಯ ಇಲಾಖೆಯ ಕಣ್ಗಾವಲು ವಲಯದ ಅಧೀನದಲ್ಲಿ ಬರುತ್ತದೆ. ಹೀಗಾಗಿ ಸರ್ಕಾರ ಸ್ಮಾರಕವನ್ನು ಬೇರೆಡೆಗೆ ಸ್ಥಳಾಂತರ ಮಾಡಬೇಕು. ಒಂದು ವೇಳೆ ನಮ್ಮ ಸೂಚನೆಯನ್ನು ಮೀರಿ ಸ್ಮಾರಕ ನಿರ್ಮಾಣಕ್ಕೆ ಮುಂದಾದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ಅರಣ್ಯ ಇಲಾಖೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಜೈಕುಮಾರ್ ಹಿರೇಮಠ್ ಎಂಬ ಸಾಮಾಜಿಕ ಕಾರ್ಯಕರ್ತರೊಬ್ಬರು ಕೂಡ ಸರ್ಕಾರಕ್ಕೆ ಪತ್ರ ಬರೆದು ಸ್ಮಾರಕ ನಿರ್ಮಾಣಕ್ಕೆ ಅರಣ್ಯ ಭೂಮಿ ಬೇಡ, ಸ್ಮಾರಕವನ್ನು ಸ್ಥಳಾಂತರಿಸುವಂತೆ ಮನವಿ ಮಾಡಿದ್ದರು. ಆದರೆ ಅರಣ್ಯ ಇಲಾಖೆಯ ಸೂಚನೆ ಮತ್ತು ಜೈಕುಮಾರ್ ಹಿರೇಮಠ್ ಅವರ ಮನವಿಯನ್ನು ತಿರಸ್ಕರಿಸಿದ ರಾಜ್ಯ ಸರ್ಕಾರ ಅದೇ ವಿವಾದಿತ ಭೂಮಿಯನ್ನು ಸ್ಮಾರಕ ನಿರ್ಮಾಣಕ್ಕೆ ನೀಡಿ ರಾಜ್ಯಪತ್ರವನ್ನು ಕೂಡ ಹೊರಡಿಸಿದೆ.

ಸರ್ಕಾರದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ಪಾಲಯ್ಯ ಅವರು, ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, 'ಸ್ಮಾರಕವನ್ನು ಸ್ಥಳಾಂತರಿಸಿ. ಇಲ್ಲವಾದರೆ ನ್ಯಾಯಾಲಯದ ನೋಟಿಸ್ಗೆ ಉತ್ತರ ನೀಡಿ' ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಆದರೆ ಇವಾವುದಕ್ಕೂ ಕಿವಿಗೊಡದ ರಾಜ್ಯ ಸರ್ಕಾರ ನವೆಂಬರ್ ತಿಂಗಳಿನಿಂದಲೇ ವಿವಾದಿತ ಜಾಗದಲ್ಲಿ ಸ್ಮಾರಕ ನಿರ್ಮಾಣಕ್ಕೆ ಸಿದ್ಧತೆ ನಡೆಸಿಕೊಂಡಿದೆ.

ಈ ಬಗ್ಗೆ ಮಾತನಾಡಿರುವ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಅವರು, 'ಸ್ಮಾರಕ ನಿರ್ಮಾಣವಾಗುತ್ತಿರುವ ಜಾಗ ರಾಜ್ಯ ಸರ್ಕಾರಕ್ಕೆ ಸೇರಿದ್ದು. ಅರಣ್ಯ ಇಲಾಖೆಯ ಪತ್ರದ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸಲಾಗಿದೆ. ಅವರು ಕೂಡ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಒಟ್ಟಾರೆ ವಿಷ್ಟು ಸ್ಮಾರಕ ವಿಚಾರ ರಾಜ್ಯ ಸರ್ಕಾರದ ಎರಡು ಇಲಾಖೆಗಳ ನಡುವಿನ ಜಗಳಕ್ಕೆ ಕಾರಣವಾಗಿದ್ದು, ವಿವಾದಿತ ಜಾಗವನ್ನು ಸ್ಮಾರಕ ನಿರ್ಮಾಣಕ್ಕೆ ನೀಡುವ ಮೂಲಕ ಕನ್ನಡದ ಮಹಾನ್ ನಟನಿಗೆ ರಾಜ್ಯ ಸರ್ಕಾರ ಯಾವ ರೀತಿಯ ಗೌರವ ನೀಡುತ್ತಿದೆ ಎಂದು ಅಭಿಮಾನಿಗಳು ಪ್ರಶ್ನಿಸುವಂತಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.