

ಬೆಂಗಳೂರು: ನಿಗಮ-ಮಂಡಳಿ ನೇಮಕ ಪ್ರಕ್ರಿಯೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಹೈದ್ರಾಬಾದ್ ಕರ್ನಾಟಕ ಭಾಗದ ಕಾಂಗ್ರೆಸ್ ಮುಖಂಡರು ಹಾಗೂ ಶಾಸಕರ ಪರ ಲೋಕಸಭೆ ಕಾಂಗ್ರೆಸ್ ಸಂಸದೀಯ ಪಕ್ಷದ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಕಣಕ್ಕೆ ಇಳಿದಿದ್ದಾರೆ.
ಈ ಪ್ರಕ್ರಿಯೆಯಲ್ಲಿ ಮುಖ್ಕಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ ಬೆಂಬಲಿಗರಿಗೆ ಹೆಚ್ಚು ಪ್ರಾತಿನಿಧ್ಯ ಸಿಗುವ ಸಾಧ್ಯತೆ ಇದೆ ಎಂಬ ಹಿನ್ನೆಲೆಯಲ್ಲಿ ಹೈದ್ರಾಬಾದ್ ಕರ್ನಾಟಕ ಭಾಗದ ಮುಖಂಡರು ಈಗ ಖರ್ಗೆ ಅವರ ಮೊರೆ ಹೋಗಿದ್ದಾರೆ.
ಸಿದ್ದರಾಮಯ್ಯ ಹಾಗೂ ಪರಮೇಶ್ವರ ಮಧ್ಯೆ ಎಷ್ಟೇ ಬಿರುಕು ಇದ್ದರೂ ನಿರ್ಣಾಯಕ ಸಂದರ್ಭದಲ್ಲಿ ಇಬ್ಬರೂ ಹೊಂದಾಣಿಕೆ ಮಾಡಿಕೊಂಡು ಬಿಡುತ್ತಾರೆ. ಇವರಿಬ್ಬರೂ ದಕ್ಷಿಣ ಕರ್ನಾಟಕ ಭಾಗಕ್ಕೆ ಸೇರಿದ್ದು, ಸಹಜವಾಗಿಯೇ ಆ ಪ್ರದೇಶದವರಿಗೆ ಹೆಚ್ಚಿನ ಆಧ್ಯತೆ ನೀಡಬಹುದೆಂಬ ಆತಂಕವನ್ನು ಈ ಭಾಗದ ಶಾಸಕರು ಹಾಗೂ ಮುಖಂಡರು ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಸಂಪುಟದಲ್ಲಿ ಇರುವ ಹೈದ್ರಾಬಾದ್ ಕರ್ನಾಟಕ ಭಾಗದ ಸಚಿವರೊಬ್ಬರ ಮೂಲಕ ಖರ್ಗೆ ಮಾಹಿತಿ ತರಿಸಿಕೊಂಡಿದ್ದಾರೆ. ನಿಗಮ-ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳಾಗಿರುವ ಆ ಭಾಗದ ಮುಖಂಡರು ಮತ್ತು ಶಾಸಕರ ಪಟ್ಟಿಯನ್ನು ಈ ಸಚಿವರು ದೆಹಲಿಗೆ ತಲುಪಿಸಿದ್ದಾರೆ.
ಸೆ.20ರಂದು ನಡೆಯುವ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾಗುವ ಸಾಧ್ಯತೆ ಇದ್ದು, ಪ್ರಕ್ರಿಯೆಯಲ್ಲಿ ಖರ್ಗೆ ಮಧ್ಯಪ್ರವೇಶ ಇನ್ನಷ್ಟು ಕುತೂಹಲವನ್ನು ಹುಟ್ಟುಹಾಕಿದೆ.