

ಬೆಂಗಳೂರು: ಅತ್ಯಾಚಾರ ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ರಾಘವೇಶ್ವರ ಭಾರತಿ ಸ್ವಾಮೀಜಿಗಳು ಸೋಮವಾರ ವಾಪಸ್ ಪಡೆದಿದ್ದಾರೆ.
ರಾಮಕಥಾ ಗಾಯಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿಗಳ ವಿರುದ್ಧ ಎಫ್‌ಐಆರ್ ದಾಖಲು ಮಾಡಿದ ಸಿಐಡಿ ತನಿಖೆ ಕೈಗೊಂಡಿತ್ತು. ಪ್ರಕರಣ ಸಂಬಂಧ ರಾಘವೇಶ್ವರ ಸ್ವಾಮೀಜಿಗಳಿಗೆ ಷರತ್ತುಬದ್ಧ ಜಾಮೀನು ಸಿಕ್ಕಿತ್ತು.
ಮೇ ತಿಂಗಳಿನಲ್ಲಿ ರಾಘವೇಶ್ವರ ಶ್ರೀಗಳು ತಮ್ಮ ವಿರುದ್ಧದ ಎಫ್‌ಐಆರ್‌ಅನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಕೋರ್ಟ್ ಅರ್ಜಿಯ ವಿಚಾರಣೆಗೆ ಒಪ್ಪಿಗೆ ಸೂಚಿಸಿತ್ತು. ಸೋಮವಾರ ಶ್ರೀಗಳ ಪರ ವಕೀಲರು ಅರ್ಜಿಯನ್ನು ವಾಪಸ್ ಪಡೆದಿದ್ದಾರೆ. ಕೋರ್ಟ್ ಅರ್ಜಿ ವಾಪಸ್ ಪಡೆಯಲು ಒಪ್ಪಿಗೆ ನೀಡಿದೆ.
ರಾಘವೇಶ್ವರ ಶ್ರೀಗಳು ತಮ್ಮ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು.