ದೇವನಹಳ್ಳಿ: ಅತಿವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ದೇವನಹಳ್ಳಿ ಬಳಿ ನಡೆದಿದೆ.
ಬೆಳಿಗ್ಗೆ 9 ಗಂಟೆಗೆ ದೇವನಹಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ಭುವನಹಳ್ಳಿ ಸಮೀಪ ಈ ಅಪಘಾತ ಸಂಭವಿಸಿದೆ. ಬಸ್ ನಲ್ಲಿ ಸುಮಾರು 30 ಮಂದಿ ಪ್ರಯಾಣಿಕರಿದ್ದರು.
ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಎಸ್‌ಎಲ್‌ವಿ ಖಾಸಗಿ ಬಸ್ ವೇಗವಾಗಿ ಬಂದ ಪರಿಣಾಮ ಪಲ್ಟಿ ಹೊಡೆದಿದೆ. ಪಲ್ಟಿ ಹೊಡೆದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರ ಬಗ್ಗೆ ಹೆಚ್ಚು ಮಾಹಿತಿ ತಿಳಿದು ಬಂದಿಲ್ಲ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.