ಶಿಕ್ಷಣ ಮಾಧ್ಯಮ ಸರ್ಕಾರ ವಿರುದ್ಧ ಅಸಮಾಧಾನ
ಬೆಂಗಳೂರು: ಒಂದರಿಂದ ಐದನೇ ತರಗತಿವರೆಗೆ ಇಂಗ್ಲಿಷ್ ಮಾಧ್ಯಮ ಶಾಲೆಯ ಆರಂಭಕ್ಕೆ ಅನುಮತಿ ನೀಡದಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಹೈಕೋರ್ಟ್ ಗುರುವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಹೊಸದಾಗಿ ಆರಂಭವಾಗುವ ಶಾಲೆಗಳಲ್ಲಿ ಒಂದರಿಂದ ಐದನೇ ತರಗತಿವರೆಗೆ ಕನ್ನಡದಲ್ಲೇ ಶಿಕ್ಷಣ ನೀಡಿದ್ದೇ ಆದಲ್ಲಿ ಮಕ್ಕಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಅಡ್ಡಿಯಾಗಬಹುದು. ಆದ್ದರಿಂದ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಕನ್ನಡವನ್ನು ಒಂದು ವಿಷಯವನ್ನಾಗಿ ಬೋಧಿಸುವುದು ಕಡ್ಡಾಯ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮೌಖಿಕವಾಗಿ ಸೂಚಿಸಿದೆ.
ಅಲ್ಲದೆ, ಪ್ರಾಥಮಿಕ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲೇ ನೀಡಬೇಕು ಎಂದು ಪ್ರತಿಪಾದಿಸುವ ಸರ್ಕಾರ ಸಿಬಿಎಸ್‍ಇ ಮತ್ತು ಐಸಿಎಸ್‍ಇ ಶಾಲೆಗಳಲ್ಲಿ ಇಂಗ್ಲಿಷ್‍ಗೆ ಅನುಮತಿ ನೀಡುತ್ತದೆ. ಆದರೆ ಖಾಸಗಿ ಶಾಲೆಗಳಿಗೆ ಇಂಗ್ಲಿಷ್ ಮಾಧ್ಯಮ ಶಿಕ್ಷಣ ನೀಡಲು ಏಕೆ ಅನುಮತಿ ನೀಡುವುದಿಲ್ಲ ಎಂದು ವಿಚಾರಣೆ ನಡೆಸಿದ ನ್ಯಾ.ಬಿ.ವಿ. ನಾಗರತ್ನ ಅವರ ಪೀಠ ಸರ್ಕಾರವನ್ನು ಪ್ರಶ್ನಿಸಿತು. ಹೊಸದಾಗಿ ಆರಂಭವಾಗುವ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಐದರವರೆಗೂ ಕಡ್ಡಾಯವಾಗಿ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ನೀಡಬೇಕೆಂದು ಸರ್ಕಾರ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸುವಂತೆ ಕೋರಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆ ನಿರ್ವಹಣಾ ಸಂಸ್ಥೆ ಸಲ್ಲಿಸಿದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಮಾನ್ಯ ಮಾಡಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ