

ಬೆಂಗಳೂರು: ಅಂಚೆ ಮತ್ತು ತೆರಪಿನ ಶಿಕ್ಷಣ ಸಂಸ್ಥೆಗಳ ಮೂಲಕ 10ನೇ ತರಗತಿ ಉತ್ತೀರ್ಣರಾಗಿ ಕೈಗಾರಿಕಾ ತರಬೇತಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದ ಕ್ರಮಕ್ಕೆ ಹೈಕೋರ್ಟ್ ತಾತ್ಕಾಲಿಕ ಬ್ರೇಕ್ ನೀಡಿದೆ. ಮುಕ್ತ ಶಿಕ್ಷಣ ಪದ್ಧತಿಯಲ್ಲಿ 10ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ನಿರ್ದೇಶನಾಲಯ ಪ್ರಥಮ ವರ್ಷದ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಿರಲಿಲ್ಲ. ಇದನ್ನು ಪ್ರಶ್ನಿಸಿ ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಗುರುವಾರ ವಿಚಾರಣೆ ನಡೆಸಿದ ನ್ಯಾ.ಬಿ.ವಿ.ನಾಗರತ್ನ ಅವರಿದ್ದ ಏಕಸದಸ್ಯ ಪೀಠ, ಪ್ರಕರಣದ ವಿಚಾರಣೆ ನಡೆಸಿ ಅಂತಿಮ ಆದೇಶಕ್ಕೆ ಬದ್ಧವಾಗಿರುವಂತೆ ಸೂಚಿಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುಮತಿ ನೀಡಿದೆ.