'ಲೋಕಾ' ವಿರುದ್ಧದ ಹೋರಾಟದಲ್ಲಿ ರಾಜಿಯಿಲ್ಲ: ಪ್ರತಿಭಟನಾಕಾರರು

ಲೋಕಾಯುಕ್ತ ನ್ಯಾ. ವೈ.ಭಾಸ್ಕರ್‍ರಾವ್ ಅವರ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ ಮುಂದುವರೆದಿದ್ದು ವಕೀಲರ ಸಮುದಾಯ ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಲೋಕಾಯುಕ್ತ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು...
ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ (ಸಂಗ್ರಹ ಚಿತ್ರ)
ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ (ಸಂಗ್ರಹ ಚಿತ್ರ)

ಬೆಂಗಳೂರು: ಲೋಕಾಯುಕ್ತ ನ್ಯಾ. ವೈ.ಭಾಸ್ಕರ್‍ರಾವ್ ಅವರ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ ಮುಂದುವರೆದಿದ್ದು ವಕೀಲರ ಸಮುದಾಯ ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಲೋಕಾಯುಕ್ತ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು. ಮತ್ತೊಂದೆಡೆ ಕ್ರೆಸೆಂಟ್ ರಸ್ತೆಯಲ್ಲಿರುವ ಲೋಕಾಯುಕ್ತರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.

ದೊರೆಸ್ವಾಮಿ ನಾಯಕತ್ವ: ಶನಿವಾರ ಬೆಳಗ್ಗೆ ಸ್ವಾತಂತ್ರ್ಯ ಉದ್ಯಾನದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪುತ್ರನ ವಿರುದ್ಧ ಹಾಗೂ ಕಚೇರಿಯೊಳಗಿನ ಸಿಬ್ಬಂದಿಯೇ ಲಂಚ ಹಗರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಗಂಭೀರ ಆರೋಪವಿದ್ದರೂ ನ್ಯಾ. ಭಾಸ್ಕರ್‍ರಾವ್ ರಾಜಿನಾಮೆ ನೀಡದೆ ಕುರ್ಚಿಗೆ ಅಂಟಿಕೊಂಡು ಕುಳಿತಿರುವುದು ದುರದೃಷ್ಟಕರ. ಅವರು ನೈತಿಕ ಹೊಣೆಹೊತ್ತು ರಾಜಿನಾಮೆ ನೀಡಬೇಕು. ಅಲ್ಲದೇ ಈ ಸಂಬಂಧ ತನಿಖೆಗೆ ಸಹಕರಿಸಬೇಕು ಎಂದು ದೊರಸ್ವಾಮಿ ಹೇಳಿದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕಿ ಬಿ.ಟಿ. ಲಲಿತಾ ನಾಯಕ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

ಬಿಎಸ್‍ಪಿ ಆಗ್ರಹ: ಇತ್ತ ಶನಿವಾರ ಬೆಳಗ್ಗೆ ಲೋಕಾಯುಕ್ತ ಕಚೇರಿ ಬಳಿ ಆಗಮಿಸಿದ್ದ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ಲೋಕಾಯುಕ್ತ ಕಚೇರಿ ಎದುರು ನ್ಯಾ.ಭಾಸ್ಕರ್‍ರಾವ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ನ್ಯಾ.ಭಾಸ್ಕರ್‍ರಾವ್ ಅವರು ಕೂಡಲೇ ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿದರು. ಕಚೇರಿಗೆ ಒಳಗೆ ಹೋಗಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದರು.

ನಿವಾಸಕ್ಕೆ ಮುತ್ತಿಗೆ ಯತ್ನ: ಲೋಕಾಯುಕ್ತರ ರಾಜಿನಾಮೆಗೆ ಒತ್ತಾಯಿಸಿ ಆಪ್ ಪಕ್ಷದ ಕಾರ್ಯಕರ್ತರ ಒಂದು ತಂಡ ಕಚೇರಿ ಬಳಿ ಪ್ರತಿಭಟನೆ ನಡೆಸಿದರೆ ಸುಮಾರು 150 ಜನರಿದ್ದ ಮತ್ತೊಂದು ತಂಡ ಕ್ರೆಸೆಂಟ್ ರಸ್ತೆಯಲ್ಲಿರುವ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಆನಂದರಾವ್ ವೃತ್ತದ ಬಳಿ ಇರುವ ಗಾಂಧಿ ಪ್ರತಿಮೆಯಿಂದ ಪ್ರತಿಭಟನಾ ಮೆರವಣಿಗೆ ಹೊರಟಿತ್ತು. ಆದರೆ, ಪೊಲೀಸರು ಅವರನ್ನು ತಡೆದು, ನೂರಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿ, ಮೈಸೂರು ರಸ್ತೆಯಲ್ಲಿರುವ ಸಿಎಆರ್ ಮೈದಾನಕ್ಕೆ ಕರೆದೊಯ್ದು ಕೆಲ ಹೊತ್ತಿನ ಬಳಿಕ ಬಿಡುಗಡೆಗೊಳಿಸಿದರು.

ಈ ವೇಳೆ ಮಾತನಾಡಿದ ಆಪ್ ಮುಖಂಡ ರವಿಕೃಷ್ಣಾರೆಡ್ಡಿ, ನ್ಯಾ. ಭಾಸ್ಕರ್‍ರಾವ್ ರಾಜಿನಾಮೆ ನೀಡುವವರೆಗೂ ಹೋರಾಟ ಮುಂದುವರೆಸುವುದಾಗಿ ಹೇಳಿದರು. ಅಖಿಲ ಭಾರತ ವಕೀಲರ ಸಂಘದ ಕಾರ್ಯಕರ್ತರು ಕೂಡಾ ಲೋಕಾಯುಕ್ತ ಕಚೇರಿ ಬಳಿ ಪ್ರತಿಭಟನೆ ನಡೆಸಿ ನ್ಯಾ. ಭಾಸ್ಕರ್‍ರಾವ್ ರಾಜಿನಾಮೆಗೆ ಒತ್ತಾಯಿಸಿದರು. ಬಿಗಿ ಭದ್ರತೆ: ದಿನದಿಂದ ದಿನಕ್ಕೆ ಪ್ರತಿಭಟನೆಗಳು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನ್ಯಾ.ಭಾಸ್ಕರ್ ರಾವ್ ಅವರ ನಿವಾಸಕ್ಕೆ ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com