ಕೃಷಿ ಸಚಿವರ ರಾಜಿನಾಮೆಗೆ ಒತ್ತಾಯ

: ರಾಜ್ಯದಲ್ಲಿ ನಡೆಯುತ್ತಿರುವ ರೈತರ ಸರಣಿ ಆತ್ಮಹತ್ಯೆ ಬಗ್ಗೆ ಕೇವಲವಾಗಿ ಮಾತನಾಡಿರುವ ಕೃಷಿ ಸಚಿವ ಕೃಷ್ಣ ಬೈರೇಗೌಡ ನೈತಿಕ ಹೊಣೆ...
ಕೃಷ್ಣ ಬೈರೇಗೌಡ
ಕೃಷ್ಣ ಬೈರೇಗೌಡ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ರೈತರ ಸರಣಿ ಆತ್ಮಹತ್ಯೆ ಬಗ್ಗೆ ಕೇವಲವಾಗಿ ಮಾತನಾಡಿರುವ ಕೃಷಿ ಸಚಿವ ಕೃಷ್ಣ ಬೈರೇಗೌಡ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ಕೂಡಲೇ ರಾಜಿನಾಮೆ ನೀಡಬೇಕು ಎಂದು ವಿವಿಧ ಸಂಘಟನೆಗಳು ಆಗ್ರಹಿಸಿವೆ. ಗುರುವಾರ ಆನಂದ್‍ರಾವ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕ್ರಾಂತಿ ಯುವಶಕ್ತಿ ಸಂಘ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಸಂಘದ ಸದಸ್ಯರು ಸಚಿವರ ರಾಜೀನಾಮೆಗೆ ಆಗ್ರಹಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಕ್ರಾಂತಿ ಯುವಶಕ್ತಿ ಸಂಘನೆಯ ರಾಜ್ಯಾಧ್ಯಕ್ಷ ಟಿ.ಆರ್. ತುಳಸಿರಾಮ್ ಮಾತನಾಡಿ, ರಾಜ್ಯದಲ್ಲಿ ನಡೆಯುತ್ತಿರುವ ರೈತರ ಸರಣಿ ಆತ್ಮಹತ್ಯೆ ತಡೆಯುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿಫಲವಾಗಿವೆ. ನಿಲ್ಲದ ರೈತರ ಆತ್ಮಹತ್ಯೆ ತಪ್ಪಿಸಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಕಬ್ಬು ಬೆಳೆಗಾರರಿಗೆ ಬಾಕಿ ಹಣ ನೀಡದ ಕಾರ್ಖಾನೆಗಳನ್ನು ಜಪ್ತಿ ಮಾಡಿ ಕಾನೂನು ಕ್ರಮ ಕೈಗೊಂಡು, ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

 ಕೃಷಿ ಸಚಿವರಾದವರೇ ಈ ರೀತಿ ಬೇಜವಾಬ್ದಾರಿ ಹೇಳಿಕೆ ನೀಡಿರುವುದು ಸರಿಯಲ್ಲ. ಅಂತಹ ಹೇಳಿಕೆ ನೀಡುವುದನ್ನು ನಿಲ್ಲಿಸಿ, ರೈತರ ಪರ ಅಗತ್ಯ ಕ್ರಮ ಕೈಗೊಂಡು, ಆತ್ಮಹತ್ಯೆ ಪ್ರಕರಣ ತಡೆಗಟ್ಟಬೇಕು ಎಂದರು. ಕ್ರಾಂತಿ ಯುವಶಕ್ತಿ ಮಹಿಳಾ ಘಟಕದ ಉಪಾಧ್ಯಕ್ಷ ಉಷಾ ನವೀನ್, ಆನೇಕಲ್ ತಾಲೂಕು ಅಧ್ಯಕ್ಷ ವೀರಭದ್ರಪ್ಪ ಸೇರಿದಂತೆ ಕ್ರಾಂತಿ ಯುವಶಕ್ತಿ ಸಂಘಟನೆಯ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ವೈಜ್ಞಾನಿಕ ಬೆಲೆ ನೀಡಿ: ರೈತರು ಬೆಳೆಯುವ ಕೃಷಿ ಉತ್ಪನ್ನಗಳಿಗೆ ಸೂಕ್ತ ವೈಜ್ಞಾನಿಕ ಬೆಲೆ ಸಿಗದ ಕಾರಣ ಅವರ ಆತ್ಮಹತ್ಯೆ ಸಂಖ್ಯೆ ಹೆಚ್ಚುತ್ತಿದೆ. ಹಾಗಾಗಿ ರೈತರ ಬೆಳೆಗೆ ಉತ್ತಮ ಬೆಲೆ ನೀಡುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಆಗ್ರಹಿಸಿದೆ. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಾಗೂ ರೈತರ ಬಗ್ಗೆ ಕೆಲ ಸಚಿವರು ಕೇವಲವಾಗಿ ಮಾತನಾಡುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಸಂಘಟನೆಯ ನೂರಾರು ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com