ತಂಬಾಕು ಉತ್ಪಾದನೆ ಸ್ಥಗಿತ: ಪರಿಶೀಲನೆಗೆ ಸೂಚನೆ
ಬೆಂಗಳೂರು: ತಂಬಾಕು ಬೆಳಗಾರರಿಗೆ ನೀಡುತ್ತಿರುವ ಪ್ರೋತ್ಸಾಹಧನ ಹಾಗೂ ಉತ್ಪಾದನೆಯನ್ನು ಕಡಿತಗೊಳಿಸುವ ಅಥವಾ ಸಂಪೂರ್ಣ ಸ್ಥಗಿತಗೊಳಿಸುವ ಕುರಿತು ಪರಿಶೀಲಿಸುವಂತೆ ಹೈಕೋರ್ಟ್ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದೆ.
ತಂಬಾಕು ಬೆಳೆಗೆ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ಹಾಗೂ ತಂಬಾಕು ಬೆಳೆ ಸ್ಥಗಿತಗೊಳಿಸುವಂತೆ ಕ್ಯಾನ್ಸರ್ ಪೀಡಿತರ ಸಂಘಟನೆ ಹೈಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿತ್ತು. ವಿಚಾರಣೆ ನಡೆಸಿದ ಹಂಗಾಮಿ ಮುಖ್ಯನ್ಯಾಯಮೂರ್ತಿಎಸ್.ಕೆ. ಮುಖರ್ಜಿ ಮತ್ತು ನ್ಯಾ.ರಾಮಮೋಹನ ರೆಡ್ಡಿ ಅವರಿದ್ದ ನ್ಯಾಯಪೀಠ, ತಂಬಾಕು ಬೆಳೆಗಾರರಿಗೆ ಪರ್ಯಾಯ ಬೆಳೆ ಬೆಳೆಯುವ ಮಾರ್ಗ ಕುರಿತು ಪರಿಶೀಲಿಸಬೇಕು.
ತಂಬಾಕು ಅವಲಂಬಿತ ಬೀಡಿ ಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸುವುದಕ್ಕೆ ಕ್ರಮ ಕೈಗೊಳ್ಳವಂತೆ ಸೂಚಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಸೂಚಿಸಿದೆ.ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲೆ ಜೈನಾ ಕೊಠಾರಿ ವಾದ ಮಂಡಿಸಿ, ತಂಬಾಕು ಬೆಳೆಗಾರರಿಗೆ ತಂಬಾಕು ಮಂಡಳಿ ನೀಡುತ್ತಿರುವ ಪ್ರೋತ್ಸಾಹಧನ ಸ್ಥಗಿತಗೊಳಿಸುವಂತೆ ತಂಬಾಕು ಮಂಡಳಿಗೆ ನಿರ್ದೇಶಿಸಬೇಕೆಂದು ನ್ಯಾಯಪೀಠವನ್ನು ಕೋರಿದರು. ಅದಕ್ಕೆ ಪ್ರತಿಕ್ರಿಯಿಸಿದ ವಿಭಾಗೀಯ ಪೀಠ, ರೈತರ ಹಿತಾಸಕ್ತಿ ವಿರುದ್ಧವಾಗಿ ಯಾವ ಕಾರ್ಯ ಮಾಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿತು.
ದೇಶದಲ್ಲಿ ತಂಬಾಕು ನಿಷೇಧಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಪ್ಪಂದಕ್ಕೆ ಸಹಿ ಹಾಕಿದೆ. ಆದರೂ ತಂಬಾಕು ಬೆಳೆಯುವ ರೈತರಿಗೆ ಪ್ರೋತ್ಸಾಹ ಹಾಗೂ ಸಹಾಯಧನ ನೀಡುತ್ತಿದೆ. ಕ್ಯಾನ್ಸರ್ ರೋಗಕ್ಕೆ ತುತ್ತಾಗುವುದಕ್ಕೆ ತಂಬಾಕು ಸೇವನೆಯೇ ಮುಖ್ಯಕಾರಣವಾಗಿದ್ದು ಅದನ್ನು ಸಂಪೂರ್ಣ ಸ್ಥಗಿತಗೊಳಿಸಬೇಕು. ಮಾತ್ರವಲ್ಲದೇ ತಂಬಾಕು ಮಂಡಳಿ ರೈತರಿಗೆ ನೀಡುತ್ತಿರುವ ಸಹಾಯಧನವನ್ನು ಕಡಿತಗೊಳಿಸಬೇಕೆಂದು ಅರ್ಜಿಯಲ್ಲಿ
ಕೋರಲಾಗಿತ್ತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ