

ಬೆಂಗಳೂರು:ರಾಜ್ಯದ ಬಂದೀಖಾನೆಗಳಲ್ಲಿರುವ ವಿಚಾರಣಾಧೀನ ಹಾಗೂ ಶಿಕ್ಷೆಗೆ ಗುರಿಯಾದ ಮಹಿಳಾ ಕೈದಿಗಳಿಗೆ ಸೂಕ್ತ ಸೌಲಭ್ಯ ಕಲ್ಪಿಸುವ ವಿಚಾರದಲ್ಲಿ ಸುಪ್ರೀಂಕೋರ್ಟು ರಚನೆ ಮಾಡಿದ ಮಾರ್ಗಸೂಚಿಗಳ ಅನುಷ್ಠಾನ ಮಾಡುವ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.
ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ದಾಖಲಿಸಿದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾ. ಎಸ್.ಕೆ.ಮುಖರ್ಜಿ ಮತ್ತು ನ್ಯಾ. ರಾಮಮೋಹನ ರೆಡ್ಡಿ ಅವರಿದ್ದ ವಿಭಾಗೀಯ ಪೀಠ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ನಗರ ಪೊಲೀಸ್ ಆಯುಕ್ತರು, ಬಂದೀಖಾನೆ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಿಗೂ ನೋಟಿಸ್ ಜಾರಿ ಮಾಡಿದೆ.
ರಾಜ್ಯದಲ್ಲಿರುವ ಬಂದೀಖಾನೆಗಳ ವಾಸ್ತವ ಸ್ಥಿತಿಗತಿಗಳ ಮಾಹಿತಿಯನ್ನು ಮುಂದಿನ ವಿಚಾರಣೆ ವೇಳೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.
ರಾಜ್ಯದ ಜೈಲುಗಳಲ್ಲಿರುವ ವಿಚಾರಣಾಧೀನ ಅಥವಾ ಶಿಕ್ಷೆಗೆ ಗುರಿಯಾದ ಮಹಿಳಾ ಕೈದಿಗಳು, ಅವರ ಮಕ್ಕಳು ಮತ್ತು ಗರ್ಭಿಣಿಯರಿಗೆ ಒದಗಿಸಬೇಕಾದ ಮೂಲ ಸೌಕರ್ಯ, ವೈದ್ಯಕೀಯ ಸೌಲಭ್ಯಗಳ ವಿಚಾರವಾಗಿ ಮಾರ್ಗಸೂಚಿಗಳನ್ನು ರೂಪಿಸಿ, ಸುಪ್ರೀಂಕೋರ್ಟ್ 2014ರ ನವೆಂಬರ್ 13ರಂದು ಆದೇಶಿಸಿದೆ. ಆ ಮಾರ್ಗಸೂಚಿ ಜಾರಿಗೊಳಿಸುವುದು ಆಯಾ ರಾಜ್ಯಗಳ ಜವಾಬ್ದಾರಿಯಾಗಿರುವುದಾಗಿ ಸುಪ್ರೀಂಕೋರ್ಟ್ ಆದೇಶಿಸಿತ್ತು. ಈ ಸಂಬಂಧ ಕರ್ನಾಟಕ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.