
ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲೇ ಅವ್ಯವಹಾರ ನಡೆಯುತ್ತಿದೆ ಎಂದು ಕೇಳಿಬಂದಿರುವ ಆರೋಪದ ಬಗ್ಗೆ ಲೋಕಾಯುಕ್ತರು ಸ್ಪಷ್ಟನೆ ನೀಡಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾ ರೆಡ್ಡಿ ಆಗ್ರಹಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆ ಸಂಪೂರ್ಣವಾಗಿ ನಿಷ್ಕ್ರಿಯವಾಗಿದ್ದು, ಗಂಜಿ ಕೇಂದ್ರವಾಗಿದೆ. ಪ್ರಾಮಾಣಿಕ ಅಧಿಕಾರಿಗಳಿಗೆ ಬೆಲೆ ಇಲ್ಲದಂತಾಗಿದೆ. ಲೋಕಾಯುಕ್ತ ವೈ.ಭಾಸ್ಕರ್ ರಾವ್ ಅವರು ರಬ್ಬರ್ ಸ್ಟಾಂಪ್ ನಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಭ್ರಷ್ಟಾಚಾರವನ್ನು ಹತ್ತಿಕ್ಕುವ ಲೋಕಾಯುಕ್ತ ಸಂಸ್ಥೆಯ ಮೇಲೆ ಸಾರ್ವಜನಿಕರು ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳೇ ಈ ಸಂಸ್ಥೆಯನ್ನು ನಿಷ್ಕ್ರಿಯಗೊಳಿಸಲು ಮುಂದಾಗಿದ್ದಾರೆ. ಈಗಿರಬೇಕಾದರೆ, ಲೋಕಾಯುಕ್ತ ಭಾಸ್ಕರ್ ರಾವ್ ಮಾತ್ರ ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿಲ್ಲ ಎಂದು ಅವರು ಹೇಳಿದ್ದಾರೆ.
ಲೋಕಾಯುಕ್ತ ಸಂಸ್ಥೆಯಲ್ಲಿ ಲೋಕಾಯುಕ್ತರ ಕುಟುಂಬ ಸದಸ್ಯರೇ ಶಾಮೀಲಾಗಿ ಅವ್ಯವಹಾರ ನಡೆಸುತ್ತಿದ್ದಾರೆ ಎಂಬ ವದಂತಿಗಳು ಹರಡಿವೆ. ಇತ್ತೀಚೆಗೆ ಕಾರ್ಯಕಾರಿ ಎಂಜಿನಿಯರ್ ಒಬ್ಬರಿಗೆ ಕರೆ ಮಾಡಿ ಒಂದು ಕೋಟಿ ರೂ. ಕೇಳಿರುವ ವಿಷಯ ಮಾಧ್ಯಮಗಳಲ್ಲಿ ಬಹಿರಂಗ ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ ಅವರು ಕ್ರಮಕೈಗೊಳ್ಳಬೇಕೆಂದು ಪತ್ರ ಬರೆದು ಒಂದು ತಿಂಗಳಾದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದ ಅವರು, ಕಾರ್ಯಕಾರಿ ಇಂಜಿನಿಯರ್ ಅವರಿಗೆ ಕರೆ ಮಾಡಿದ ಕೃಷ್ಣರಾವ್ ಯಾರು? ಅವರಿಗೂ ಲೋಕಾಯುಕ್ತರಿಗೆ ಸಂಬಂಧ ಏನು? ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಂಡು ಲೋಕಾಯುಕ್ತ ಸಂಸ್ಥೆಯನ್ನು ಸ್ವಚ್ಛಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಭಾಸ್ಕರ್ ರಾವ್ ಯಾವ ಕೆಲಸವನ್ನೂ ಮಾಡುತ್ತಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಈವರೆಗೆ ಯಾವುದೇ ಗಂಭೀರ ಪ್ರಕರಣ ಕೂಡ ಇವರ ಅವಧಿಯಲ್ಲಿ ದಾಖಲಾಗಿಲ್ಲ. ಹಾಗಾಗಿ, ಈಗ ಲೋಕಾಯುಕ್ತ ಸಂಸ್ಥೆ ಮೇಲೆ ಕೇಳಿಬಂದಿರುವ ಆರೋಪದ ಬಗ್ಗೆ ಸ್ಪಷ್ಟನೇ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
Advertisement