

ಬೆಂಗಳೂರು: ಆಧಾರ್ ಮಾಜಿ ಅಧ್ಯಕ್ಷ ಹಾಗೂ ಇನ್ ಫೋಸಿಸ್ ಸಹ ಸಂಸ್ಥಾಪಕ ನಂದನ್ ನಿಲೇಕಣಿ ಶೀಘ್ರದಲ್ಲೆ ಕಾಂಗ್ರೆಸ್ ತೊರೆಯಲಿದ್ದಾರೆ ಎನ್ನಲಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ನಿಲೇಕಣಿ ಬಿಜೆಪಿಯ ಅನಂತ್ ಕುಮಾರ್ ವಿರುದ್ಧ ಸೋಲನುಭವಿಸಿದ್ದರು. ಕಾಂಗ್ರೆಸ್ ತೊರೆಯುವ ವಿಷಯ ಸಂಬಂಧ ನಂದನ್ ನಿಲೇಕಣಿ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎನ್ನಲಾಗಿದೆ,
ಪ್ರತಿಯೊಬ್ಬ ಭಾರತೀಯ ಪ್ರಜೆಯು 12 ಅಂಕಿಗಳ ಗುರುತು ಇಟ್ಟುಕೊಳ್ಳಬೇಕೆಂಬ ಉದ್ದೇಶದಿಂದ ನಂದನ್ ನಿಲೇಕಣಿ ಆಧಾರ್ ಸಂಖ್ಯೆ ಕಡ್ಡಾಯ ಮಾಡಿದರು. ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಆಧಾರ್ ಕಡ್ಡಾಯ ನಿಯಮದ ಪ್ರಯೋಜನಗಳ ಬಗ್ಗೆ ನಿಲೇಕಣಿ ಪ್ರಧಾನಿ ನರೇಂದ್ರ ಮೋದಿಗೆ ಮನದಟ್ಟು ಮಾಡಿಕೊಟ್ಟಿದ್ದರು,
ಇನ್ನು ಕಾಂಗ್ರೆಸ್ ಪಕ್ಷ ತೊರೆದು ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಕೊಳ್ಳಲು ನಿಲೇಕಣಿ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಪ್ರಾಥಮಿಕ ಶಾಲೆಯ ಮಕ್ಕಳಿಗೆ ಅಂದರೆ 5 ರಿಂದ 12 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಗಣಿತ ಮತ್ತು ತಂತ್ರಜ್ಞಾನದ ಉಪಯೋಗದ ಬಗ್ಗೆ ಮಾಹಿತಿ ನೀಡಲು ಏಕ್ ಸ್ಟೆಪ್ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.