ಒಡೆಯರ್ ಪಟ್ಟಾಭಿಷೇಕಕ್ಕೆ ಸಕಲ ಸಿದ್ಧತೆ: ರಾಣಿ ಪ್ರಮೋದಾ ದೇವಿ

ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ನಿಧನದಿಂದಾಗಿ ತೆರವಾಗಿರುವ ಮೈಸೂರು ಯದುವಂಶದ ಉತ್ತರಾಧಿಕಾರಿಯಾಗಿ ನೇಮಕಗೊಂಡಿರುವ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟಾಭಿಷೇಕ...
ರಾಣಿ ಪ್ರಮೋದಾ ದೇವಿ ಮತ್ತು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್
ರಾಣಿ ಪ್ರಮೋದಾ ದೇವಿ ಮತ್ತು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

ಮೈಸೂರು: ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ನಿಧನದಿಂದಾಗಿ ತೆರವಾಗಿರುವ ಮೈಸೂರು ಯದುವಂಶದ ಉತ್ತರಾಧಿಕಾರಿಯಾಗಿ ನೇಮಕಗೊಂಡಿರುವ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟಾಭಿಷೇಕ ಕಾರ್ಯಕ್ರಮಕ್ಕಾಗಿ ಸಕಲ ಸಿದ್ಧತೆ ಆರಂಭಗೊಂಡಿದೆ.

ಮೈಸೂರು ಅರಮನೆಯ ಕಲ್ಯಾಣ ಮಂಟಪದಲ್ಲಿ ಮೇ 27 ಮತ್ತು 28 ಎರಡು ದಿನ ಕಾಲ ಪಟ್ಟಾಭಿಷೇಕ ಕಾರ್ಯಕ್ರಮ ನಡೆಯಲಿದೆ ಎಂದು ರಾಣಿ ಪ್ರಮೋದಾದೇವಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಮನೆಯ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ಜರುಗಲಿದೆ. ಇಲ್ಲಿ ಸ್ಥಳಾವಕಾಶದ ಕೊರತೆ ಇರುವುದರಿಂದ ಗಣ್ಯರು ಮತ್ತು ರಾಜ್ಯದ ರಾಜವಂಶದ ಸ್ನೇಹಿತರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಇದಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡರು.

ಸುದ್ದಿಗೋಷ್ಠಿಯ ಆರಂಭದಿಂದಲೂ ದಿ.ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರನ್ನು ನೆನೆಯುತ್ತ ರಾಣಿ ಪ್ರಮೋದಾದೇವಿ ಅವರು ಗದ್ಗದಿತರಾಗಿದ್ದರು. ಉಮ್ಮಳಿಸಿ ಬರುತ್ತಿದ್ದ ದುಃಖದಿಂದಲೇ ಸುದ್ದಿಗೋಷ್ಠಿ ನಡೆಸಿದ ಪ್ರಮೋದಾ ದೇವಿ ಅವರು, ಪಟ್ಟಾಭಿಷೇಕ ಕಾರ್ಯಕ್ರಮಗಳ ಕುರಿತ ಮಾಹಿತಿಯನ್ನು ಮಾಧ್ಯಮಗಳಿಗೆ ನೀಡಿದರು. ಅಲ್ಲದೆ ಪಟ್ಟಾಭಿಷೇಕದ ಬಳಿಕ ಯದುವೀರ್ ದೇವಾಲಯಕ್ಕೆ ಭೇಟಿ ನೀಡಿ ಅರಮನೆ ಪ್ರವೇಶ ಮಾಡಲಿದ್ದಾರೆ ಎಂದು ತಿಳಿಸಿದರು.

ಮೇ 27ರಂದು ದೇವರು ತರುವ ಕಾರ್ಯ, ಗುರು ಪೂಜೆ ನಡೆಯಲಿದೆ. ಮೇ 28 ರಂದು ಪಟ್ಟಾಭಿಷೇಕ ನಡೆಯಲಿದೆ. ಬೆಳಗ್ಗೆ 9.30 ರಿಂದ 10.30 ರ ನಡುವಿನ ಮುಹೂರ್ತದಲ್ಲಿ ಪಟ್ಟಾಭಿಷೇಕ ನಡೆಯಲಿದೆ. ಅಂದು ಸಂಜೆ ಆರು ಗಂಟೆ ನಂತರ ದರ್ಬಾರ್ ಹಾಲ್‌ನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಲಾಗಿದೆ ಎಂದು ಪ್ರಮೋದಾದೇವಿ ತಿಳಿಸಿದರು.

ಮೇ 26ರಿಂದಲೇ ಮೈಸೂರು ಅರಮನೆಗೆ ಪ್ರವೇಶ ನಿರ್ಬಂಧ
ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪಟ್ಟಾಭಿಷೇಕ ಮಹೋತ್ಸವದ ಹಿನ್ನೆಲೆಯಲ್ಲಿ ಇದೇ ಮೇ 26ರಿಂದ ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಮೇ 26ರಿಂದ 28ರವರೆಗೆ ಪ್ರವಾಸಿಗರು ಅರಮನೆಗೆ ಭೇಟಿ ನೀಡುವಂತಿಲ್ಲ. ಯದುವಂಶದ ಉತ್ತರಾಧಿಕಾರಿಯಾಗಿ ನೇಮಕಗೊಂಡಿರುವ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟಾಭಿಷೇಕ ಮಹೋತ್ಸವ ಮೇ.28ರಂದು ಅಂಬಾವಿಲಾಸ ಅರಮನೆಯಲ್ಲಿ ನಡೆಯಲಿದೆ. ಆದ್ದರಿಂದ ಜಿಲ್ಲಾಡಳಿತ ಸಾರ್ವಜನಿಕರ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com