

ಯಾದಗಿರಿ/ಕಲಬುರ್ಗಿ: ಕೆಲವು ಸರ್ಕಾರಿ ಅಧಿಕಾರಿಗಳು ಬಿಪಿಎಲ್ ಕಾರ್ಡ್ಗಳನ್ನು ಹೊಂದಿರುವುದು ಪತ್ತೆಯಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.
ಎರಡು ತಿಂಗಳ ಹಿಂದೆ ರಾಜ್ಯಾದ್ಯಂತ ನಡೆದ ಬಿಪಿಎಲ್ ಕಾರ್ಡ್ಗಳ ಪರಿಶೀಲನೆ ವೇಳೆ 944 ಸರ್ಕಾರಿ ಉದ್ಯೋಗಿಗಳು ಬಿಪಿಎಲ್ ಕಾರ್ಡ್ ಹೊಂದಿರುವುದು ಪತ್ತೆಯಾಗಿದ್ದು, ಅವರ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ ಮತ್ತು ಅವರಿಂದ ದಂಡ ವಸೂಲಿ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.
ಪರಿಶೀಲನಾ ಸಭೆಯ ಬಳಿಕ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್, ರಸ್ತೆ ಸಾರಿಗೆ ಸಂಸ್ಥೆ, ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಗಳು ಸೇರಿದಂತೆ ಯಾದಗಿರಿ ಜಿಲ್ಲೆ ಒಟ್ಟು 49 ಸರ್ಕಾರಿ ಉದ್ಯೋಗಿಗಳು ಬಿಪಿಎಲ್ ಕಾರ್ಡ್ ಹೊಂದಿದ್ದರು ಎಂದರು. ಅಲ್ಲದೆ ಜಿಲ್ಲೆಯಲ್ಲಿ ಇದುವರೆಗೆ 39,269 ನಕಲಿ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಇನ್ನುಮುಂದೆ ಆಹಾರ ಧಾನ್ಯ ಲಭ್ಯವಿರುವ ಬಗ್ಗೆ ಬಿಪಿಎಲ್ ಮತ್ತು ಎಪಿಎಲ್ ಕಾರ್ಡುದಾರರಿಗೆ ಎಸ್ಎಂಎಸ್ ಮೂಲಕ ಮಾಹಿತಿ ನೀಡಲಾಗುವುದು. ಈ ಸಂಬಂಧ ಇದುವರೆಗೆ 80 ಲಕ್ಷ ಮೊಬೈಲ್ ನಂಬರ್ಗಳನ್ನು ಸಂಗ್ರಹಿಸಲಾಗಿದೆ ಎಂದು ಹೇಳಿದರು.