

ಬೆಂಗಳೂರು: ಕರ್ತವ್ಯನಿರತ ಚಿಕ್ಕಪೇಟೆ ಸಂಚಾರ ಸಬ್ ಇನ್ಸ್ ಪೆಕ್ಟರ್ ರಾಮಚಂದ್ರ ಅವರ ಮೇಲೆ ಹಲ್ಲೆ ನಡೆಸಿದ ಟೆಂಪೋ ಚಾಲಕ ಚಂದ್ರಶೇಖರ್ (28) ಎಂಬಾತನನ್ನು ಕಾಟನ್ಪೇಟೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಪೇಟೆಯ ಎ.ಎಸ್. ಚಾರ್ ಸ್ಟ್ರೀಟ್ನಲ್ಲಿ ಎಸ್ಸೈ ರಾಮಚಂದ್ರ ಹಾಗೂ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಸಂಚಾರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಟೆಂಪೊವನ್ನು ಎಸ್ ಸೈ ತಡೆದು ನಿಲ್ಲಿಸಿದ್ದರು. ಈ ವೇಳೆ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದ ಟೆಂಪೊ ಚಾಲಕ ಚಂದ್ರಶೇಖರ್, ರಾಮಚಂದ್ರ ಅವರ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಈ ಹಿನ್ನೆಲೆಯಲ್ಲಿ ರಾಮಚಂದ್ರ ಅವರು ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕೇಸ್ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.