

ಬೆಳಗಾವಿ: ಉತ್ತರ ಕರ್ನಾಟಕ ಜನತೆಯ ಪ್ರಮುಖ ಬೇಡಿಕೆಯಾದ ಮಹದಾಯಿ, ಕಳಸಾ-ಬಂಡೂರಿ ನಾಲಾ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನ. ೧೯ ಮತ್ತು ೨೦ ರಂದು ಬೆಂಗಳೂರಿನಲ್ಲಿ ಈ ಭಾಗದ ಜನಪ್ರತಿನಿಧಿಗಳ ಜೊತೆ ಸಭೆ ನಡೆಸಲಾಗುವುದು ಎಂದು ಸಂಸದ ಸುರೇಶ ಅಂಗಡಿ ಹೇಳಿದರು.
ಶುಕ್ರವಾರ ಇಲ್ಲಿ ನಡೆದ ಕಳಸಾ-ಬಂಡೂರಿ ಹೋರಾಟಗಾರರ ಮತ್ತು ಜನಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದಿನ ಸಭೆಯಲ್ಲಿ ಸಂಸತ್ ಹಾಗೂ ವಿಧಾನಮಂಡಲ ಅಧಿವೇಶನದಲ್ಲಿ ಮಹದಾಯಿ ಬಗ್ಗೆ ಧನಿ ಎತ್ತಲು ಜನಪ್ರತಿನಿಧಿಗಳ ಮೇಲೆ ಒತ್ತಡ ಹೇರಲಾಗುವುದು. ಜೊತೆಗೆ ಹೋರಾಟದ ರೂಪುರೇಷಗಳ ಬಗ್ಗೆ ಚರ್ಚಿಸಲಾಗುವುದು ಎಂದರು. ಮಹದಾಯಿ ಜಾರಿಗೆ ಉತ್ತರ ಕರ್ನಾಟಕದಲ್ಲಿ ರೈತರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂಬರುವ ಅಧಿವೇಶನದ ಒಳಗಾಗಿ ಗೋವಾ ಮತ್ತು ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿಗಳ ಜೊತೆಗೆ ಮಾತುಕತೆ ನಡೆಸಿ ಮನವೊಲಿಸುವ ಯತ್ನ ಮಾಡಬೇಕು. ಈ ಸಂಬಂಧ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದರು. ಮಹಾಂತೇಶ ಕವಟಗಿಮಠ, ಡಾ.ವಿಶ್ವನಾಥ ಪಾಟೀಲ, ಜಗದೀಶ ಮೆಟಗುಡ್ಡ ಮತ್ತಿತರರು ಇದ್ದರು.