ಅತ್ಯಾಚಾರ ಪ್ರಕರಣ ಗವರ್ನರ್ ಗೆ ವರದಿ

ರಾಮಚಂದ್ರಪುರ ಮಠದ ರಾಘವೇಶ್ವರ ಸ್ವಾಮೀಜಿ ಮೇಲಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಾಜ್ಯಪಾಲ...
ರಾಘವೇಶ್ವರ ಭಾರತಿ
ರಾಘವೇಶ್ವರ ಭಾರತಿ
ಬೆಂಗಳೂರು: ರಾಮಚಂದ್ರಪುರ ಮಠದ ರಾಘವೇಶ್ವರ ಸ್ವಾಮೀಜಿ ಮೇಲಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಾಜ್ಯಪಾಲ ವಿ.ಆರ್.ವಾಲ ಅವರಿಗೆ ಕೂಲಂಕುಷ ವರದಿ ಸಲ್ಲಿಸಿದೆ. ಸ್ವಾಮೀಜಿ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಸರ್ಕಾರ ಎಲ್ಲಿಯೂ ಹಸ್ತಕ್ಷೇಪ ಮಾಡಿಲ್ಲ. ಸ್ವತಂತ್ರವಾಗಿ ತನಿಖೆ ನಡೆಸಿ ದೂರುದಾರರಿಗೆ ನ್ಯಾಯ ದೊರಕಿಸುವ ಪ್ರಯತ್ನ ನಡೆಸಿದೆ ಎಂದು ವರದಿಯಲ್ಲಿ ಹೇಳಿದೆ. 
ರಾಮಕಥಾ ಗಾಯಕಿ ಪ್ರೇಮಲತಾ ದಿವಾಕರ್ ಶಾಸ್ತ್ರಿ ಮತ್ತು ಮತ್ತೊಬ್ಬ ಮಹಿಳೆ ಮೇಲೆ ರಾಘವೇಶ್ವರ ಸ್ವಾಮಿ ಅತ್ಯಾಚಾರ ಮಾಡಿರುವ ಪ್ರಕರಣದ ಬಗ್ಗೆ ಸಿಐಡಿ ತನಿಖೆ ನಡೆಸಿದ್ದು, ಸಿಐಡಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ. ಆದರೆ ಈ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಲಲಿತಾ ಕುಮಾರ ಮಂಗಳಂ ಕೂಡ ರಾಜ್ಯಕ್ಕೆ ಭೇಟಿ ನೀಡಿದ್ದರು. 
ಅಷ್ಟೇ ಅಲ್ಲ, ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ರಾಜ್ಯಪಾಲ ವಿ.ಆರ್.ವಾಲ ಅವರನ್ನೂ ಭೇಟಿ ಮಾಡಿ ಚರ್ಚಿಸಿದ್ದರು. ಆನಂತರ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆದು ಈ ಪ್ರಕರಣದಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಪ್ರಕರಣದ ತನಿಖೆ ವಿಳಂಬವಾಗುತ್ತಿರುವ ಬಗ್ಗೆಯೂ ಆಕ್ಷೇಪಿಸಿದ್ದರು. 
ಕೂಡಲೇ ವರದಿ ಸಲ್ಲಿಸುವಂತೆಯೂ ವಿ.ಆರ್.ವಾಲ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕಚೇರಿಯಿಂದ ನೀಡಿರುವ ಮಾರ್ಗದರ್ಶನದಂತೆ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಎರಡು ದಿನಗಳ ಹಿಂದೆಯೇ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಈ ಪ್ರಕರಣದಲ್ಲಿ ಸರ್ಕಾರ ಸ್ವತಂತ್ರವಾಗಿ ತನಿಖೆ ನಡೆಸಿ ಅಗತ್ಯ ದಾಖಲೆ ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಇದರಲ್ಲಿ ಯಾರಿಂದಲೂ ಹಸ್ತಕ್ಷೇಪ ಆಗುವುದಕ್ಕೆ ಸರ್ಕಾರ ಅವಕಾಶ ನೀಡಿಲ್ಲ ಎಂದು ವರದಿಯಲ್ಲಿ ಸ್ಪಷ್ಟಪಡಿಸಲಾಗಿದೆ. 
ಅಷ್ಟೇ ಅಲ್ಲ. ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ತಡೆಗೆ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಮುಖ್ಯವಾಗಿ ತ್ವರಿತ ನ್ಯಾಯಾಲಯನಗಳನ್ನು ಸ್ಥಾಪಿಸಿ ಶೀಘ್ರ ನ್ಯಾಯ ದಾನಕ್ಕೆ ಅವಕಾಶ ನೀಡಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಅವರು ವರದಿಯಲ್ಲಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com