ಪರಿಷತ್ ಚುನಾವಣೆಗೆ ಬಿರುಸು

ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್‍ನ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ ಬಿರುಸಿನ ತಯಾರಿ ನಡೆಸಿದೆ. ಈಗಾಗಲೇ ಎರಡು ಸುತ್ತಿನಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಮುಗಿಸಿರುವ ಪಕ್ಷವು ಅಭ್ಯರ್ಥಿಗಳ ಹೆಸರನ್ನು ಶೀಘ್ರವೇ ದೆಹಲಿಯಲ್ಲಿ ಪ್ರಕಟಿಸುವುದಾಗಿ ತಿಳಿಸಿದೆ...
(ಸಾಂದರ್ಭಿಕ  ಚಿತ್ರ)
(ಸಾಂದರ್ಭಿಕ ಚಿತ್ರ)

ಬೆಂಗಳೂರು: ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್‍ನ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ ಬಿರುಸಿನ ತಯಾರಿ ನಡೆಸಿದೆ. ಈಗಾಗಲೇ ಎರಡು ಸುತ್ತಿನಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಮುಗಿಸಿರುವ ಪಕ್ಷವು ಅಭ್ಯರ್ಥಿಗಳ ಹೆಸರನ್ನು ಶೀಘ್ರವೇ ದೆಹಲಿಯಲ್ಲಿ ಪ್ರಕಟಿಸುವುದಾಗಿ ತಿಳಿಸಿದೆ.

ಎರಡು ಕೋರ್ ಕಮಿಟಿ ಸಭೆಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ವಿಸ್ತøತ ಚರ್ಚೆ ನಡೆದಿತ್ತು. ಕಳೆದ ಬಾರಿಯ ಚುನಾವಣೆ ಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳ ಪೈಕಿ ಒಂದಿಬ್ಬರನ್ನು ಹೊರತುಪಡಿಸಿದರೆ ಉಳಿದೆಲ್ಲರೂ ಟಿಕೆಟ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪಕ್ಷದ ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣೆ ತಯಾರಿ ಕುರಿತು ಕನ್ನಡಪ್ರಭಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ, ನಾವು ಈಗಾಗಲೇ 13 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದೇವೆ. ಇನ್ನು ಕೆಲವು ಕಡೆಗಳಲ್ಲಿ ಪ್ರಬಲ ಅಭ್ಯರ್ಥಿಗಳನ್ನು ಹಾಕುವ ಉದ್ದೇಶದಿಂದ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ ಎಂದು ತಿಳಿಸಿದರು.

ಇಷ್ಟರಲ್ಲೇ ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳಲಿದ್ದು, ಪಕ್ಷದ ರಾಷ್ಟ್ರೀಯ ನಾಯಕರು ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಲಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ ಇಬ್ಬರಿಗಿಂತ
ಹೆಚ್ಚಿನ ಆಕಾಂಕ್ಷಿಗಳಿದ್ದಾರೆ. ಅಂತಹ ಕ್ಷೇತ್ರಗಳಲ್ಲಿ ಯಾರಿಗೆ ಟಿಕೆಟ್ ನೀಡಬೇಕೆಂಬ ಬಗ್ಗೆ ಸ್ಥಳೀಯ ನಾಯಕರೊಂದಿಗೆ ಚರ್ಚಿಸುತ್ತಿದ್ದೇವೆ ಎಂದು ವಿವರಿಸಿದರು. ಅಭ್ಯರ್ಥಿಗಳ ಆಯ್ಕೆ ಒಂದು ಕಡೆಯಾದರೆ, ಇನ್ನೊಂದು ಕಡೆ ಚುನಾವಣೆಗೆ ತಯಾರಿಯೂ ನಡೆದಿದೆ. ಈಗಾಗಲೇ ಅಭ್ಯರ್ಥಿಗಳು ಅಂತಿಮ ಗೊಳಿಸಿರುವ ಕಡೆಗಳಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಸಂಪರ್ಕದಲ್ಲಿರಲು ಸೂಚಿಸಲಾಗಿದೆ ಎಂದು ಹೇಳಿದರಲ್ಲದೇ, ಚುನಾವಣೆ ವಿಚಾರವಾಗಿಯೇ ಆಯಾ ಕ್ಷೇತ್ರದಲ್ಲಿ ಪ್ರಮುಖ ಕಾರ್ಯಕರ್ತರ ಸಭೆ ನಡೆಸಲಾಗಿದೆ ಎಂದರು.

ವಿಶೇಷವಾಗಿ ಬೆಂಗಳೂರಿನಲ್ಲಿ ಅಭ್ಯರ್ಥಿ ಆಯ್ಕೆ ಮತ್ತು ಗೆಲ್ಲಿಸಿಕೊಂಡು ಬರುವ ವಿಚಾರವಾಗಿ ಸಚಿವ ಸದಾನಂದ ಗೌಡ, ಆರ್.ಅಶೋಕ್ ಅವರಿಗೆ ಜವಾಬ್ದಾರಿ ವಹಿಸಲಾಗಿದೆ. ಅವರು ಅಧ್ಯಯನ ನಡೆಸಿ ವರದಿ ನೀಡಲಿದ್ದಾರೆ. ಅದರ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಿದರು. ಕಳೆದ ಬಾರಿಯ ಚುನಾವಣೆಯಲ್ಲಿ 12 ಸ್ಥಾನ ಗೆದ್ದಿದ್ದೆವು. ಶಾಸಕರು, ಸಂಸದರಾಗಿದ್ದು ಸೇರಿದಂತೆ ವಿವಿಧ ಕಾರಣಗಳಿಂದ ಸದ್ಯ 7 ಸದಸ್ಯರು ಇದ್ದಾರೆ. ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನ ಗೆಲ್ಲುವ ಗುರಿಯೊಂದಿಗೆ ಕಾರ್ಯತಂತ್ರ ರೂಪಿಸಿದ್ದೇವೆ. ಗೆಲ್ಲುವ ವಿಚಾರದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಂತ್ರ ರೂಪಿಸಿದ್ದೇವೆ, ಚುನಾವಣೆಯನ್ನು ಗಂಬಿsೀರವಾಗಿ ಪರಿಗಣಿಸಿದ್ದೇವೆ ಎಂದು ಹೇಳಿದ ಅವರು, ಈ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಪ್ರಸ್ತಾಪವಿಲ್ಲ. ಅಲ್ಲದೇ, ಪಕ್ಷದ ರಾಷ್ಟ್ರೀಯ ನಾಯಕರು ಈ ವಿಚಾರದಲ್ಲಿ ಸ್ಪಷ್ಟ ಸಂದೇಶ ನೀಡಿದ್ದು, ಯಾವುದೇ ಕಾರಣಕ್ಕೂ ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಳ್ಳಬಾರದೆಂದು ಸೂಚಿಸಿದ್ದಾರೆ. ಪಕ್ಷವನ್ನು ಗಟ್ಟಿಯಾಗಿ ಕಟ್ಟಿ ಬೆಳೆಸಿ, ಹೊಂದಾಣಿಕೆ ಮಾಡಿಕೊಳ್ಳುವ ಪ್ರಸ್ತಾಪ ಬೇಡ ಎಂದೇ ಹೇಳಿದ್ದಾರೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com