

ಬೆಂಗಳೂರು: ನಗರದಲ್ಲಿ ಮತ್ತೆ ಸರಗಳ್ಳತನ ಮುಂದುವರಿದಿದೆ. ಕೆಲವು ದಿನಗಳ ಹಿಂದೆ ಸರಗಳ್ಳರನ್ನು ಹಿಡಿದು ನಾಗರಿಕರು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದ್ದ ಪೊಲೀಸರಿಗೆ ಮತ್ತೆ ತಲೆನೋವು ಶುರುವಾಗಿದೆ. ಗುರುವಾರ ಬೆಳಗ್ಗೆ ರಾಮಮೂರ್ತಿನಗರ ಹಾಗೂ ವಿಜಯನಗರದಲ್ಲಿ ಸರಗಳ್ಳತನ ಪ್ರಕರಣಗಳು ದಾಖಲಾಗಿವೆ.
ಧನುರ್ಮಾಸದ ಪೂಜೆ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ವಿಜಯನಗರದ ಪ್ರಶಾಂತ್ ನಗರದ ನಿವಾಸಿ ಅನಸೂಯಮ್ಮ (80) ಅವರ ಸರ ಕಸಿದು ಕಳ್ಳರು ಪರಾರಿಯಾಗಿದ್ದಾರೆ. ಬೈಕ್‍ನಲ್ಲಿ ಬಂದ ಇಬ್ಬರು ಕಳ್ಳರು ಮನೆಗೆ ನಡೆದುಕೊಂಡು ಹೋಗುತ್ತಿದ್ದ ಅನಸೂಯಮ್ಮ ಅವರ ಬಳಿ ವಿಳಾಸ ಕೇಳಿದ್ದಾರೆ. ಈ ವೇಳೆ 25 ಗ್ರಾಂ ತೂಕದ ಸರ ಕಸಿದು ಪರಾರಿಯಾಗಿದ್ದಾರೆ. ಈ ಸಂಬಂಧ ಪ್ರಕರಣ ವಿಜಯನಗರ ಠಾಣೆಯಲ್ಲಿ ದಾಖಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಮಕ್ಕಳನ್ನು ಶಾಲೆಗೆ ಬಿಟ್ಟು ಮನೆಗೆ ನಡೆದು ಹೋಗುತ್ತಿದ್ದ ಮಹಿಳೆಯಿಂದ ಸರ ಕಸಿದು ಪರಾರಿಯಾಗಿರುವ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಮಮೂರ್ತಿನಗರದ ಹೊಯ್ಸಳ ನಗರದ ನಿವಾಸಿ ಚಂದ್ರಮ್ಮ ಗುರುವಾರ ಬೆಳಗ್ಗೆ 9 ಗಂಟೆ ವೇಳೆಯಲ್ಲಿ ಮನೆಗೆ ಬೀಗ ಹಾಕಿಕೊಂಡು ಮಕ್ಕಳನ್ನು ಹತ್ತಿರದ ಶಾಲೆಗೆ ಬಿಟ್ಟು ನಡೆದುಕೊಂಡು ಬರುತ್ತಿದ್ದರು. ಈ ವೇಳೆ ಹಿಂದಿನಿಂದ ಬೈಕ್‍ನಲ್ಲಿ ಬಂದ ಇಬ್ಬರು ಕಳ್ಳರು 40 ಗ್ರಾಂ ತೂಕದ ಸರ ಕಸಿದುಕೊಂಡು ಪರಾರಿಯಾಗಿದ್ದಾರೆ.