ಗಣರಾಜ್ಯೋತ್ಸವಕ್ಕೆ ಬೆಂಗಳೂರಿನಲ್ಲಿ ಸಕಲ ಸಿದ್ಧತೆ: ಕುಮಾರ್ ನಾಯಕ್

ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವ ಈ ಬಾರಿಯ ಗಣರಾಜ್ಯೋತ್ಸವ ಸಮಾರಂಭಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಜಿ.ಕುಮಾರ್ ನಾಯಕ್ ತಿಳಿಸಿದ್ದಾರೆ.
ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವದ ಸಿದ್ಧತೆ
ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವದ ಸಿದ್ಧತೆ

ಬೆಂಗಳೂರು: ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವ ಈ ಬಾರಿಯ ಗಣರಾಜ್ಯೋತ್ಸವ ಸಮಾರಂಭಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಆಯುಕ್ತ  ಜಿ.ಕುಮಾರ್ ನಾಯಕ್ ತಿಳಿಸಿದ್ದಾರೆ.

ಗಣರಾಜ್ಯೋತ್ಸವದ ವಿಶೇಷ ಪರೇಡ್ ನಡೆಯುವ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಭಾನುವಾರ ಪೂರ್ವಭಾವಿ ಸಿದ್ಧತಾ ಕಾರ್ಯಗಳನ್ನು ಕುಮಾರ್ ನಾಯಕ್ ಅವರು ವೀಕ್ಷಿಸಿದರು. ಬಳಿಕ  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನವರಿ 26 ಮಂಗಳವಾರ ಬೆಳಗ್ಗೆ 8.58ಕ್ಕೆ ಮೈದಾನಕ್ಕೆ ಆಗಮಿಸುವ ರಾಜ್ಯಪಾಲ ವಜುಭಾಯಿ ವಾಲಾ ಅವರು ಬೆಳಗ್ಗೆ 9 ಗಂಟೆಗೆ  ಧ್ವಜಾರೋಹಣ ನೆರವೇರಿಸುವ ಮೂಲಕ ಗಣರಾಜ್ಯೋತ್ಸವ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈ ವೇಳೆ ಭಾರತೀಯ ರಕ್ಷಣಾ ಸೇವೆಯ ಮೂವರು ಹಿರಿಯ ಅಧಿಕಾರಿಗಳನ್ನು  ರಾಜ್ಯಪಾಲರಿಗೆ ಪರಿಚಯಿಸಲಾಗುತ್ತದೆ. ಬಳಿಕ ರಾಜ್ಯಪಾಲರು ಪರೇಡ್ ವೀಕ್ಷಿಸಿ, ನಾಡಿನ ಜನತೆಗೆ ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ. ಬಳಿಕ ಜವಹರ್ ನವೋದಯ ಶಾಲಾ  ಮಕ್ಕಳು ರಾಷ್ಟ್ರಗೀತೆ ಹಾಡಲಿದ್ದಾರೆ ಎಂದು ಕಾರ್ಯಕ್ರಮದ ಮಾಹಿತಿ ನೀಡಿದರು.

ಇನ್ನು ಗಣರಾಜ್ಯೋತ್ಸವದ ವಿಶೇಷ ಕಾರ್ಯಕ್ರಮಕ್ಕಾಗಿ ಕಳೆದ ಮೂರು ದಿನಗಳಿಂದ ಪಥಸಂಚಲನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಪೂರ್ವಭಾವಿ ತಾಲೀಮು ನಡೆಸಲಾಗುತ್ತಿದೆ. ಪಥ  ಸಂಚಲನದಲ್ಲಿ ಪೊಲೀಸ್, ಸ್ಕೌಟ್ಸ್, ಗೈಡ್ಸ್, ಎನ್‍ಸಿಸಿ, ಸೇವಾದಳ ಹಾಗೂ ವಿವಿಧ ಶಾಲೆಗಳ ಮಕ್ಕಳನ್ನು ಒಳಗೊಂಡಂತೆ ಕವಾಯತು ಮತ್ತು ಬ್ಯಾಂಡ್‍ನ ಒಟ್ಟು 61 ತುಕಡಿಗಳ ಸುಮಾರು  2100 ಮಂದಿ ಭಾಗವಹಿಸಲಿದ್ದಾರೆ. ಶಾಲಾ ಮಕ್ಕಳು ಒಟ್ಟು 4 ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಿದ್ದು, ಒಟ್ಟು 2,550 ಮಕ್ಕಳು ಭಾಗವಹಿಸಲಿದ್ದಾರೆ. ಇದೇ ವೇಳೆ ರಾಜ್ಯಪಾಲರು, ವಿಜೇತರಿಗೆ  ಬಹುಮಾನ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ನಾಯಕ್ ತಿಳಿಸಿದರು.

11 ಸಾವಿರ ಮಂದಿಗೆ ಆಸನ
ಇನ್ನು ಮಾಣಿಕ ಷಾ ಪರೇಡ್ ಮೈದಾನದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಹೆಚ್ಚು ಜನರು ಆಗಮಿಸುವ ನಿರೀಕ್ಷೆ ಇರುವುದರಿಂದ ಈ ಬಾರಿ 11 ಸಾವಿರ ಆಸನ ವ್ಯವಸ್ಥೆ  ಕಲ್ಪಿಸಲಾಗಿದೆ. ಜಿ2 ಪ್ರವೇಶ ದ್ವಾರದಲ್ಲಿ ಅತಿಗಣ್ಯ ವ್ಯಕ್ತಿಗಳಿಗಾಗಿ 2000 ಆಸನಗಳು, ಜಿ1 ಪ್ರವೇಶ ದ್ವಾರದಲ್ಲಿ ಗಣ್ಯ ವ್ಯಕ್ತಿಗಳು, ಸ್ವಾತಂತ್ರ್ಯ ಹೋರಾಟಗಾರರು, ರಕ್ಷಣಾ ಇಲಾಖೆಯ  ಅಧಿಕಾರಿಗಳು ಮತ್ತು ಪತ್ರಿಕಾ ಪ್ರತಿನಿಧಿಗಳಿಗಾಗಿ 2000 ಆಸನಗಳು, ಜಿ3 ಪ್ರವೇಶ ದ್ವಾರದಲ್ಲಿ ಇತರ ಎಲ್ಲಾ ಇಲಾಖೆಯ ಅಧಿಕಾರಿಗಳು, ನಿವೃತ್ತ ಸೇನಾಧಿಕಾರಿಗಳು, ಬಿಎಸ್‍ಎಫ್  ಅಧಿಕಾರಿಗಳಿಗಾಗಿ 3000 ಆಸನಗಳು ಹಾಗೂ ಜಿ4 ಪ್ರವೇಶ ದ್ವಾರದಲ್ಲಿ ಸಾರ್ವಜನಿಕರಿಗೆ 4000 ಆಸನಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕುಮಾರ್ ನಾಯಕ್ ತಿಳಿಸಿದರು.

ಅಂತೆಯೇ ಯಾವುದೇ ಆಕಸ್ಮಿಕ ವಿಪತ್ತು ಸಂಭವಿಸಿದ್ದಲ್ಲಿ ತಕ್ಷಣ ಪ್ರತಿಕ್ರಿಯಸಲು ಅಗತ್ಯವಿರುವಷ್ಟು ಆಂಬುಲೆನ್ಸ್, ವೈದ್ಯಕೀಯ ಮತ್ತು ವೈದ್ಯಕೀಯೇತರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.  ನಗರದ ಹಲವು ಆಸ್ಪತ್ರೆಗಳನ್ನು ಗುರುತಿಸಿ ಅಲ್ಲಿ ಸಾಕಷ್ಟು ಸಿಬ್ಬಂದಿಯನ್ನು ಕೂಡ ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ವಿ.ಶಂಕರ್, ಪೊಲೀಸ್  ಆಯುಕ್ತ ಎನ್.ಎನ್. ಮೇಘರಿಕ್, ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಡಾ.ಎಂ.ಎ.ಸಲೀಂ, ಡಿಸಿಪಿ ಸಂದೀಪ್ ಪಾಟೀಲ್ ಮತ್ತಿತರರು ಹಾಜರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com