ಹೆಬ್ಬಾಳ ಕ್ಷೇತ್ರ ಕೈ ತಪ್ಪಿದರೆ ನನ್ನ ಭವಿಷ್ಯಕ್ಕೆ ಕುತ್ತು: ಮುಖ್ಯಮಂತ್ರಿ

ಹೆಬ್ಬಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲದಿದ್ದರೆ ನನಗೆ ಭವಿಷ್ಯದಲ್ಲಿ ತೊಂದರೆ ಆಗಲಿದೆ, ಎಲ್ಲರೂ ಒಗ್ಗಟ್ಟಿನಿಂದ ಕೆಲಸ...
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಹೆಬ್ಬಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲದಿದ್ದರೆ ನನಗೆ ಭವಿಷ್ಯದಲ್ಲಿ ತೊಂದರೆ ಆಗಲಿದೆ, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಐವರು ಸಚಿವರಿಗೂ ಸೂಚನೆ ನೀಡಿದ್ದಾರೆ.

ಹಿರಿಯ ಕಾಂಗ್ರೆಸಿಗ ಸಿ.ಕೆ.ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಷರೀಫ್ ಗೆ ಟಿಕೆಟ್ ದೊರೆತ ಬಳಿಕ ಕಾಂಗ್ರೆಸ್ ಒಡೆದ ಮನೆಯಾದಂತೆ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಹಾಗೂ ವಿಧಾನ ಪರಿಷತ್ ಸದಸ್ಯ ಭೈರತಿ ಸುರೇಶ್ ಈ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ದೆಹಲಿ ಪ್ರಭಾವ ಬಳಸಿ ಜಾಫರ್ ಷರೀಫ್ ಟಿಕೆಟ್ ಗಿಟ್ಟಿಸಿದರು. ಇದರ ಪರಿಣಾಮ ಹೆಬ್ಬಾಳ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸುವ ವೇಳೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಹೊರತುಪಡಿಸಿದರೆ ಬೆಂಗಳೂರಿನ ಯಾವೊಬ್ಬ ಸಚಿವ, ಶಾಸಕರು ಹಾಜರಿರಲಿಲ್ಲ. ಈ ಸುದ್ದಿ ದೆಹಲಿ ತಲುಪುತ್ತಿದ್ದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಮುಖ್ಯಮಂತ್ರಿಗೆ ದೂರವಾಣಿ ಮಾಡಿ ಹೆಬ್ಬಾಳ ಚುನಾವಣೆಯಲ್ಲಿ ಪಕ್ಷ ಗೆಲ್ಲುವಂತೆ ನೋಡಿಕೊಳ್ಳಬೇಕೆಂಬ ಸಂದೇಶ ರವಾನಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರು ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಲ್ಲದೆ ಬೆಂಗಳೂರನ್ನು ಪ್ರತಿನಿಧಿಸುವ ಐವರು ಸಚಿವರಾದ ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಕೃಷ್ಣ ಭೈರೇಗೌಡ, ಆರ್. ರೋಷನ್ ಬೇಗ್ ಹಾಗೂ ದಿನೇಶ್ ಗುಂಡೂರಾವ್ ಅವರನ್ನು ಸಂಪರ್ಕಿಸಿ ಹೆಬ್ಬಾಳ ಕ್ಷೇತ್ರವನ್ನು ಗಂಭೀರವಾಗಿ ಪರಿಗಣಿಸಬೇಕು. ಯಾವುದೇ ಕಾರಣಕ್ಕೂ ಪಕ್ಷ ಅಲ್ಲಿ ಸೋಲಬಾರದು. ಒಂದು ವೇಳೆ ಸೋತರೆ ನನ್ನ ಭವಿಷ್ಯಕ್ಕೆ ತೊಂದರೆ ಆಗಲಿದೆ ಎಂಬ ಮಾತುಗಳನ್ನಾಡಿದರು ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com