ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ
ಕ.ಪ್ರ.ವಾರ್ತೆ ರಾಮನಗರ ಆ.2
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮರು ಚುನಾವಣೆಯಲ್ಲಿ ಕಟ್ಟುನಿಟ್ಟಾಗಿ ನೀತಿ ಸಂಹಿತೆ ಪಾಲಿಸುವಂತೆ ರಾಮನಗರ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ವಿ. ಶ್ರೀರಾಮರೆಡ್ಡಿ ಅವರು ರಾಜಕೀಯ ಪಕ್ಷಗಳಿಗೆ ಸೂಚಿಸಿದರು.
ಕಂದಾಯ ಭವನದಲ್ಲಿ ಶುಕ್ರವಾರ ಕರೆದಿದ್ದ ರಾಜಕೀಯ ಪಕ್ಷಗಳ ಮುಖಂಡರ ಸಭೆಯಲ್ಲಿ ಮತಗಟ್ಟೆ, ಮತದಾರರ ಮಾಹಿತಿ, ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ಸಿದ್ಧತೆ, ನೀತಿ ಸಂಹಿತೆಯ ವಿವರಗಳನ್ನು ನೀಡಿ ಅವರು ಮಾತನಾಡಿದರು.
ಕ್ಷೇತ್ರಕ್ಕೆ ಒಳಪಡುವ ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಜಾರಿಯಲ್ಲಿದೆ. ರಾಜಕೀಯ ಪಕ್ಷಗಳು ನೀತಿ ಸಂಹಿತೆ ಉಲ್ಲಂಘನೆಗೆ ಆಸ್ಪದ ನೀಡದೆ, ಸಹಕರಿಸಬೇಕು ಎಂದು ತಿಳಿಸಿದರು.
ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ಚುನಾವಣಾ ವೆಚ್ಚದ ವಿವರಗಳನ್ನು ಲೆಕ್ಕಪರಿಶೀಲನೆಗಾಗಿ ಚುನಾವಣಾ ದಿನಾಂಕದಿಂದ 30 ದಿನದೊಳಗೆ ಒದಗಿಸಬೇಕು. ಚುನಾವಣೆಗೆ ಬಳಸುವ ವಾಹನಗಳಿಗೆ ಮುಂಚಿತವಾಗಿಯೇ ಜಿಲ್ಲಾಡಳಿತದ ಅನುಮತಿ ಪಡೆದು, ದಾಖಲಾತಿ ಇರಿಸಿಕೊಳ್ಳಬೇಕು ಎಂದರು.
40 ಲಕ್ಷ ರು. ಮಿತಿ: ಅಭ್ಯರ್ಥಿಗಳು ತಾವು ನೇಮಕ ಮಾಡಿಕೊಳ್ಳುವ ಏಜೆಂಟರ ವಿವರಗಳನ್ನು ಕಡ್ಡಾಯವಾಗಿ ಒದಗಿಸಬೇಕು. ಚುನಾವಣೆಗೆ ಅಭ್ಯರ್ಥಿಯ ವೆಚ್ಚ ಮಿತಿಯನ್ನು 40 ಲಕ್ಷ ರು.ಗೆ ನಿಗದಿಪಡಿಸಲಾಗಿದೆ. ವೆಚ್ಚ ಮಿತಿ ಮೀರಿದಂತೆ ನೋಡಿಕೊಳ್ಳಬೇಕು ಎಂದು ಶ್ರೀರಾಮರೆಡ್ಡಿ ಹೇಳಿದರು.
ಕ್ಷೇತ್ರದ ವ್ಯಾಪ್ತಿಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಹೋಬಳಿ ಮಟ್ಟದಲ್ಲಿ ನೀತಿ ಸಂಹಿತೆ ತಂಡಗಳನ್ನು ರಚಿಸಿದ್ದು, ಇವು ಚುನಾವಣಾ ನೀತಿ ಸಂಹಿತೆ ಕುರಿತು ನಿಗಾ ವಹಿಸಲಿವೆ. ಜಿಲ್ಲೆಯ ಗಡಿಯಲ್ಲಿ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ ಎಂದರು.
ಗೋಡೆ ಬರಹ, ಬಂಟಿಂಗ್ಸ್, ಫ್ಲೆಕ್ಸ್ ಬಳಕೆ ನಿಷೇಧಿಸಲಾಗಿದೆ. ಚುನಾವಣಾ ದಿನದ 48 ಗಂಟೆಗಳ ಮುಂಚೆ ಬಹಿರಂಗ ಪ್ರಚಾರ ನಿಲ್ಲಿಸಬೇಕಿದೆ. ಚುನಾವಣೆಯು ಮುಕ್ತ ನ್ಯಾಯಸಮ್ಮತ ಹಾಗೂ ಶಾಂತಿಯುತವಾಗಿ ನಡೆಸಲು ಎಲ್ಲಾ ರಾಜಕೀಯ ಪಕ್ಷಗಳು ಸಹಕರಿಸಬೇಕೆಂದು ಅವರು ಕೋರಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಸಹಾಯಕ ಚುನಾವಣಾಧಿಕಾರಿ ಜಯಮಾಧವ್, ಚುನಾವಣಾ ಶಾಖೆ ತಹಶೀಲ್ದಾರ್ ಹೊನ್ನಸ್ವಾಮಿಗೌಡ, ಎಂಸಿಎಂಸಿ ಸಮಿತಿಯ ನೋಡೆಲ್ ಅಧಿಕಾರಿ ಸಿದ್ದಯ್ಯ, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

