ಜಾಫರ್ ಷರೀಫ್ ಸತ್ಯಾಗ್ರಹ ವಾಪಸ್
ಬೆಂಗಳೂರು: ಅಮಾನತ್ ಕೋ-ಆಪರೇಟಿವ್ ಬ್ಯಾಂಕ್ ಅವ್ಯವಹಾರವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹಿರಿಯ ಕಾಂಗ್ರೆಸ್ ಮುಖಂಡ ಸಿ.ಕೆ.ಜಾಫರ್ ಷರೀಫ್ ತಾತ್ಕಾಲಿಕವಾಗಿ ಪ್ರತಿಭಟನೆ ವಾಪಾಸ್ ಪಡೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಾದ ಕೆ.ಜೆ.ಜಾರ್ಜ್ ಡಾ.ಎಚ್.ಎಸ್.ಮಹಾದೇವ ಪ್ರಸಾದ್ ಜತೆ ಭಾನುವಾರ ಜಾಫರ್ ಷರೀಫ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಂಜಾನ್ ಸಂದರ್ಭದಲ್ಲಿ ದರ್ಗಾದಲ್ಲಿ ಹೆಚ್ಚಿನ ಜನ ಸೇರುತ್ತಾರೆ. ಇದರಿಂದ ಕಾನೂನು-ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುತ್ತದೆ ಎಂದು ಮನವಿ ಮಾಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ವಾಪಾಸ್ ಪಡೆಯಲಾಗಿದೆ. ಇದರ ಜತೆಗೆ ಅಮಾನತ್ ಕೋ-ಆಪರೇಟಿವ್ ಬ್ಯಾಂಕ್ನ್ನು ಆರ್ಥಿಕವಾಗಿ ಬಲಪಡಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಆದರೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸದೇ ಇರಲು ನಿರ್ಧರಿಸಿದ್ದಾರೆ. ಇದು ಜಾಫರ್ ಷರೀಫ್ ಅವರಿಗೆ ಸಮಾಧಾನ ತಂದಿಲ್ಲ. ಈ ಹಿನ್ನೆಲೆಯಲ್ಲಿ ರಂಜಾನ್ ಮುಗಿದ ನಂತರ ಮತ್ತೆ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ.
ಕಾನೂನು ಹೋರಾಟ : ನಂತರ ಸುದ್ದಿಗಾರರ ಜತೆ ಮಾತನಾಡಿದ ಷರೀಫ್, ಅಮಾನತ್ ಕೋ-ಆಪರೇಟಿವ್ ಬ್ಯಾಂಕ್ನ್ನು ಆರ್ಥಿಕವಾಗಿ ಬಲಪಡಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಭರವಸೆ ನಮಗೆ ಸಮಾಧಾನ ತಂದಿಲ್ಲ. ಅವ್ಯವಹಾರಕ್ಕೆ ಕಾರಣರಾದ ಪ್ರತಿಯೊಬ್ಬರಿಗೂ ಶೀಕ್ಷೆಯಾಗಬೇಕು ಎಂದರು.
ಉಚಿತ ನೋಟ ್ ಪುಸ್ತಕ ವಿತರಣೆ
ಮಾಗಡಿ: ಚಿಗುರು ಸಂಸ್ಥೆ ವತಿಯಿಂದ ಗೊರೂರು ಮತ್ತು ಎಣ್ಣಿಗೆರೆ ಎಚ್.ಪಿ.ಎಸ್ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಮಾಡಿದ್ದಾಗಿ ಎಸ್.ಡಿ.ಎಂ.ಎಸಿ ವೇದಿಕೆಯ ಜಿಲ್ಲಾಧ್ಯಕ್ಷ ಲಕ್ಷ್ಮೀಪತಿರಾಜು ತಿಳಿಸಿದ್ದಾರೆ. ವೇದಿಕೆಯ ಮೂಲಕ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ ಮಾಡಲಾಗಿದ್ದು, ಕಾರ್ಯದರ್ಶಿ ಪ್ರಕಾಶ್, ಸಹಕಾರ್ಯದರ್ಶಿ ನಾಗರಾಜು ಸಿ.ಆರ್.ಸಿ. ಸುರೇಶ್ ಹಾಗೂ ಮುಖ್ಯ ಶಿಕ್ಷಕ ನರಸಿಂಹಮೂರ್ತಿ ಭಾಗವಹಿಸಿದ್ದರು.
ಇಂದು ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆ
ದೊಡ್ಡಬಳ್ಳಾಪುರ: ಇಲ್ಲಿನ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ತಾಲೂಕು ಆಡಳಿತದ ನೇತೃತ್ವದಲ್ಲಿ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆ ಆ.5ರ ಸೋಮವಾರ ಮಧ್ಯಾಹ್ನ 12 ಗಂಟೆಗೆ ತಾಲೂಕು ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ.
ಶಾಸಕ ಟಿ.ವೆಂಕಟರಮಣಯ್ಯ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದ್ದು, ತಾಲೂಕು ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಪತ್ರಿಕಾ ಪ್ರತಿನಿಧಿಗಳು ಮತ್ತು ನಾಗರಿಕ ಗಣ್ಯರು ಸಭೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ ಎಂದು ತಹಸೀಲ್ದಾರ್ ಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮಾಜಮುಖಿ ವ್ಯಕ್ತಿತ್ವ ಬೆಳೆಸಿಕೊಳ್ಳಲು ಸಲಹೆ
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳು ಸಮಾಜಮುಖಿ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು. ಇಂದಿನ ಕಲುಷಿತ ವಾತಾವರಣದಲ್ಲಿ ವ್ಯಕ್ತಿತ್ವಕ್ಕೆ ಮಾತ್ರ ಪರಿಪೂರ್ಣ ಮಾನ್ಯತೆ ದೊರೆಯುತ್ತದೆ ಎಂದು ಐಎಲ್ಎಫ್ಎಸ್ ನಿರ್ದೇಶಕ ಜೆ.ನಾಗೇಂದ್ರಸ್ವಾಮಿ ಹೇಳಿದರು. ಇಲ್ಲಿನ ಶ್ರೀದೇವರಾಜ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ನಡೆದ ಪರಿಚಯ-2013 ಪ್ರಥಮ ಪದವಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಇಂದು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಸಮಾನ ಅವಕಾಶ ಮತ್ತು ಆದ್ಯತೆ ನೀಡಬೇಕಿದೆ. ವಿದ್ಯಾರ್ಥಿಯ ಸರ್ವಾಂಗೀಣ ಪ್ರಗತಿ ಕೇವಲ ತರಗತಿಯಲ್ಲಿ ನಿರ್ಮಾಣವಾಗದು ಎಂದರು. ಎಸ್ಡಿಯುಇಟಿ ಟ್ರಸ್ಟಿ ಜೆ.ರಾಜೇಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶೈಕ್ಷಣಿಕ ಸಲಹೆಗಾರ ಕೆ.ಎನ್.ಶ್ರೀನಿವಾಸನ್, ಅಂಜಯ್ಯ, ಜೆವಿ ಚಂದ್ರಶೇಖರ್, ವಿಜಯಕುಮಾರ್ ಭಾಗವಹಿಸಿದ್ದರು. ಸಾಂಸ್ಕೃತಿಕ ಕಾರ್ಯಕ್ರಮ: ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ನೃತ್ಯ, ವಿನೋದ ಕ್ರೀಡೆಗಳು, ಗಾಯನ ಕಾರ್ಯಕ್ರಮಗಳು ಗಮನ ಸೆಳೆದವು.
ಶಾಂತಿಯುತ ಗ್ರಾಪಂ ಮತದಾನ
ಮಾಗಡಿ: ತಾಲೂಕಿನ ಗುಡೇಮಾರನಹಳ್ಳಿ ಗ್ರಾಮ ಪಂಚಾಯ್ತಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಶೇ.95.69 ರಷ್ಟು ಮತದಾನ ಶಾಂತಿಯುತವಾಗಿ ನಡೆದಿದೆ ಎಂದು ತಹಶೀಲ್ದಾರ್ ಡಾ.ಬಿ.ಆರ್. ಹರೀಶ್ ನಾಯಕ್ ತಿಳಿಸಿದ್ದಾರೆ.ಗುಡೇಮಾರನಹಳ್ಳಿ ಗ್ರಾಮ ಪಂಚಾಯ್ತಿಯ ಗರ್ಗೇಶ್ಪರ ಮತಗಟ್ಟೆ ಕೇಂದ್ರದಲ್ಲಿ ಮತದಾನ ನಡೆಯಿತು. ಒಟ್ಟು 418 ಮತಗಳಲ್ಲಿ 400 ಮತಗಳು ಚಲಾವಣೆಗೊಂಡಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಇಂದು
ದೊಡ್ಡಬಳ್ಳಾಪುರ: ಇಲ್ಲಿನ ಕುವೆಂಪು ಕನ್ನಡ ಸಂಘದ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ರಮಾನಂದ ಆಶ್ರಮದಲ್ಲಿ ಆ.5ರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಸಂಘದ ಅಧ್ಯಕ್ಷ ಅರುಣ್ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಬೆಂ.ಗ್ರಾ.ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಹನುಮಂತೇಗೌಡ, ಲಾವಣ್ಯ ಕಾಲೇಜು ಪ್ರಾಂಶುಪಾಲ ಬೈರೇಗೌಡ, ಸಂಸ್ಥೆ ಕಾರ್ಯದರ್ಶಿ ಯತೀಂದ್ರ ಬಿಟ್ಟನಕುರಿಕೆ, ಉದ್ಯಮಿ ಲೋಕೇಶ್ರಾಜ್, ಪ್ರಮೋದ್ ಶೆಟ್ಟಿ, ಕಾರ್ತಿಕ್ ಭಾಗವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

