ಬೆಂಗಳೂರು ಗ್ರಾಮಾಂತರ

ಬಿತ್ತನೆ ಭೂಮಿಗೆ ಸಸಿ; ರೈತರ ಪ್ರತಿಭಟನೆ

Published On :

ರಾಮನಗರ: ಬಗರ್ ಹುಕುಂ ಸಾಗುವಳಿದಾರರ ಬಿತ್ತನೆ ಮಾಡುವ ಭೂಮಿಗೆ ಏಕಾಏಕಿ ದಾಳಿ ಮಾಡಿರುವ ಅರಣ್ಯ ಇಲಾಖೆ ಅಧಿಕಾರಿಗಳು ಟ್ರಂಚ್ ಹೊಡೆದು, ಗುಂಡಿ ತೋಡಿ ಸಸಿ ನೆಟ್ಟು ರೈತರನ್ನು ಒಕ್ಕಲೆಬ್ಬಿಸುತ್ತಿದ್ದಾರೆ. ಇದನ್ನು ವಿರೋಧಿಸಿ ರೈತರು ಪ್ರಾಂತ ರೈತ ಸಂಘದೊಂದಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
 ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಪರ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಅವರಿಗೆ ಮನವಿ ಸಲ್ಲಿಸಿದರು.
ಅರಣ್ಯ ಇಲಾಖೆ ಕಿರುಕುಳ: ಕಾನೂನಿನ ಚೌಕಟ್ಟಿನಲ್ಲಿ ಸಾಗುವಳಿ ಚೀಟಿ ಪಡೆದು, ರೈತರ ಹೆಸರಿನಲ್ಲಿ ಪಹಣಿ ಕೂಡ ಇದೆ. ಈ ಭೂಮಿಯಲ್ಲಿ ರೈತರು ಕಳೆದ 40-50 ವರ್ಷದಿಂದಲೂ ಸಾಗುವಳಿ ಮಾಡಿಕೊಂಡು ಬಂದಿದ್ದಾರೆ. ಈಗ ಅರಣ್ಯ ಇಲಾಖೆ ಅಧಿಕಾರಿಗಳು ಸುಳ್ಳು ಮೊಕದ್ದಮೆ ಹೂಡಿ ಇನ್ನಿಲ್ಲದ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಪ್ರಧಾನಿಗೂ ಮನವಿ: ಈ ಸಂಬಂಧ ಪಾದಯಾತ್ರೆ ಮೂಲಕ ವಿಧಾನಸೌಧಕ್ಕೆ ತೆರಳಿ ಮನವಿ ಸಲ್ಲಿಸಲಾಗಿದೆ. ಸಂಸತ್ ಚಲೋ ಮೂಲಕ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಲಾಗಿದೆ. ಕಳೆದ 6-7 ವರ್ಷದಿಂದ ನಿರಂತರ ಹೋರಾಟ ಹಮ್ಮಿಕೊಳ್ಳಲಾಗಿದ್ದರೂ ಶಾಶ್ವತ ಪರಿಹಾರ ನೀಡಲು ಸರ್ಕಾರ ವಿಫಲವಾಗಿದೆ ಎಂದರು.
ಶಾಶ್ವತ ಪರಿಹಾರ ನೀಡಿ: ನ್ಯಾಯ ಕೇಳಿದ ರೈತರ ವಿರುದ್ಧ ಸುಳ್ಳು ಮೊಕದ್ದಮೆಗಳನ್ನು ಹೂಡಿ ಅನಗತ್ಯ ಕಿರುಕುಳ ನೀಡುತ್ತಿರುವ ಅರಣ್ಯಾಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು. ಅರಣ್ಯ ಇಲಾಖೆ ಮತ್ತು ರೈತರ ಮಧ್ಯೆ ಪದೇ ಪದೇ ನಡೆಯುತ್ತಿರುವ ಸಂಘರ್ಷಕ್ಕೆ ಶಾಶ್ವತ ಪರಿಹಾರ ನೀಡಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.
 ಶ್ರೀನಿವಾಸ, ನಾಗೇಶ್, ವನಜ, ರಾಮಚಂದ್ರಪ್ಪ, ಮಹದೇವಯ್ಯ, ಸಂಜೀವಯ್ಯ, ಕೃಷ್ಣಮೂರ್ತಿ, ಮಹೇಂದ್ರ, ಅಂಕಪ್ಪ, ಚನ್ನಪ್ಪಾಜಿ ಸೇರಿದಂತೆ ಮತ್ತಿತರೆ ರೈತ ಮುಖಂಡರು ಪ್ರತಿಭಟನೆ ನೇತೃತ್ವ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.