ಬೆಂಗಳೂರು ಗ್ರಾಮಾಂತರ

ರಸ್ತೆ ಅಪಘಾತ; ವ್ಯಕ್ತಿ ಸಾವು

Published On :

ದೊಡ್ಡಬಳ್ಳಾಪುರ: ಬೆಂಗಳೂರು-ದೊಡ್ಡಬಳ್ಳಾಪುರ ರಾಜ್ಯ ಹೆದ್ದಾರಿಯ ಶ್ರೀರಾಮನಹಳ್ಳಿಯ ಸಮೀಪ ಮಂಗಳವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತರನ್ನು ಇಲ್ಲಿನ ಸಂಜಯನಗರದ ನಿವಾಸಿ ಗುರುಪ್ರಸಾದ್(24) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ದೊಡ್ಡಬಳ್ಳಾಪುರಕ್ಕೆ ಬರುತ್ತಿದ್ದ ಟಾಟಾ ಸುಮೋ ಮರಕ್ಕೆ ಅಪ್ಪಳಿಸಿದ ಪರಿಣಾಮ ಚಾಲಕ ಮೃತಪಟ್ಟಿದ್ದು, ಮುಂದೆ ಹೋಗುತ್ತಿದ್ದ ಬಸ್ ಅನ್ನು ಹಿಂದಿಕ್ಕುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಮೃತ ವ್ಯಕ್ತಿ ಇಲ್ಲಿನ ಖಾಸಗಿ ಎಸ್‌ವಿಎಸ್ ಬಸ್ಸಿನ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದ್ದು, ರಾಜಾನುಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರೇಮ ವೈಫಲ್ಯ; ಯುವಕ ಆತ್ಮಹತ್ಯೆ
ನೆಲಮಂಗಲ: ಯುವಕನೊಬ್ಬ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿ ಸೀಗೆಹಳ್ಳಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.  ಆತ್ಮಹತ್ಯೆ ಮಾಡಿಕೊಂಡವನನ್ನು ಗಂಗಹನುಮಯ್ಯ(17) ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಯುವತಿಯೊಬ್ಬಳನ್ನು ಪ್ರೀತಿಸಿದ್ದಾನೆ. ಆಕೆ ಈತನ ಪ್ರೀತಿಗೆ ಒಪ್ಪದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕೆ ವ್ಯಕ್ತಪಡಿಸಲಾಗಿದೆ. ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
'ಮಾತೃಭಾಷೆ ಜೊತೆಗೆ ಇಂಗ್ಲಿಷ್‌ಗೂ ಮಹತ್ವವಿರಲಿ'
ನೆಲಮಂಗಲ: ಶಿಕ್ಷಣ ಇಂದು ಸ್ಪರ್ಧಾತ್ಮಕವಾಗಿರುವುದರಿಂದ ಮಾತೃಭಾಷೆ ಜೊತೆಗೆ, ವಿದ್ಯಾರ್ಥಿಗಳು ಇಂಗ್ಲಿಷ್‌ಗೂ  ಮಹತ್ವ ನೀಡಬೇಕು ಎಂದು ಟಿ.ಡಿ.ಪವರ್ ಸಿಸ್ಟಮ್ ಲಿಮಿಟೆಡ್ ಕಂಪನಿ ಮುಖ್ಯಸ್ಥ ರಾಮಕೃಷ್ಣ ವರುಣ  ಕಿವಿಮಾತು ಹೇಳಿದರು.
ಸೋಮವಾರ ತಾಲೂಕಿನ ಅಗಳಕುಪ್ಪೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಟಿ.ಡಿ.ಪಿ.ಎಸ್ ಕಂಪನಿ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಉಪಕರಣ ಮತ್ತು ಕ್ರೀಡಾ ಸಾಮಗ್ರಿ ವಿತರಿಸಿ ಅವರು ಮಾತನಾಡಿದರು.   ಸರ್ಕಾರದಿಂದ ಪ್ರಾಥಮಿಕ ಶಾಲೆಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ನೀಡಬೇಕು. ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆ ನೀಡಿದರೆ ಮಕ್ಕಳಿಗೆ ಉತ್ತಮ ದರ್ಜೆಯ ಶಿಕ್ಷಣ ನೀಡಲು ಸಾಧ್ಯವಾಗುತ್ತದೆ. ಸರ್ಕಾರ ನೀಡುವ ಸೌಲಭ್ಯಗಳ ಜೊತೆಗೆ ಶಿಕ್ಷಣಾಭಿಮಾನಿಗಳು ಮಕ್ಕಳಿಗೆ ಹೆಚ್ಚಿನ ಸಹಕಾರ ನೀಡಲು ಮುಂದಾಗಬೇಕು ಎಂದರು.
ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷೆ ಜಯಮ್ಮ ಮಾತನಾಡಿ,  ಬಡ ವಿದ್ಯಾರ್ಥಿಗಳನ್ನು ದತ್ತು ತೆಗೆದುಕೊಂಡು ಸಾಕಷ್ಟು ಸೇವೆ ಮಾಡುತ್ತಿದ್ದೇನೆ. ಮುಂದೆಯೂ ಸಹ ಮಕ್ಕಳಿಗೆ ಅನುಕೂಲ ಕಲ್ಪಿಸುವುದಾಗಿ ತಿಳಿಸಿ ಟಿಡಿಪಿಎಸ್ ಕಂಪನಿ 45 ಸಾವಿರ ಮೌಲ್ಯದ ವಿಜ್ಞಾನ ಪರಿಕರಗಳನ್ನು ನೀಡಿರುವುದು ಶ್ಲಾಘನೀಯ ಎಂದರು.
ಶಿಕ್ಷಣ ಇಲಾಖೆಯ ಅಂಜಿನಪ್ಪ, ಸಿ.ಆರ್.ಪಿ.ಸಿದ್ದರಾಮೇಗೌಡ, ದಾನಿ ವೆಂಕಟೇಶ್, ಮುಖ್ಯ ಶಿಕ್ಷಕ ಮಹದೇವಯ್ಯ, ಅರುವಣ್ಣ, ಶಬಾನ ಮತ್ತು ಸತೀಶ್, ಶಾಲಾ ಶಿಕ್ಷಕರು ಇದ್ದರು.
ವ್ಯಕ್ತಿ ಆತ್ಮಹತ್ಯೆ
ನೆಲಮಂಗಲ: ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದನಹೊಸಹಳ್ಳಿಯಲ್ಲಿ ವ್ಯಕ್ತಿಯೊಬ್ಬ ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ. ಮೃತ ವ್ಯಕ್ತಿಯನ್ನು ಚಿತ್ರದುರ್ಗ ಮೂಲದ ಶಿವಲಿಂಗಪ್ಪ(58) ವರ್ಷ ಎಂದು ಗುರುತಿಸಲಾಗಿದೆ. ಈ ಬಗ್ಗೆ ಮೃತ ವ್ಯಕ್ತಿಯ ಮಗ ಹನುಮಂತಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.