ಕ್ರೀಡೆಯಿಂದ ಮಾನಸಿಕ ನೆಮ್ಮದಿ
ನೆಲಮಂಗಲ: ಕ್ರೀಡಾ ಚಟುವಟಿಕೆಗಳ ಮೂಲಕ ಮಾನಸಿಕ ಹಾಗೂ ಶಾರೀರಿಕ ಬೆಳವಣಿಗೆ ಉತ್ತಮಗೊಂಡು ಪರಿಪೂರ್ಣವಾಗಿ ಕಾರ್ಯ ನಿರ್ವಹಿಸಲು ಸಾಧ್ಯ ಎಂದು ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.
ಅವರು ಗುರುವಾರ ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2012-2013ನೇ ಸಾಲಿನ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಕ್ರೀಡಾಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ವರ್ಷವಿಡೀ ಸರ್ಕಾರಿ ನೌಕರರು ಕೆಲಸದ ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಿರುವಾಗ ಕ್ರೀಡಾ ಮನೋಭಾವದಿಂದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮನಸ್ಸು ಉಲ್ಲಾಸದಿಂದ ಕೂಡುತ್ತದೆ. ದೈಹಿಕವಾಗಿ ಆರೋಗ್ಯದ ಸ್ಥಿತಿ ಉತ್ತಮವಾಗುತ್ತದೆ ಎಂದು ಹೇಳಿದರು.
ಕ್ರೀಡಾರ್ಥಿಗಳ ಬೆಳವಣಿಗೆ: ಸರ್ಕಾರಿ ನೌಕರರು ರಾಷ್ಟ್ರ ಹಾಗೂ ರಾಜ್ಯಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗಳಿಸಿದರೂ ಸಹ ತಮ್ಮ ವೇತನದಲ್ಲಿ ಯಾವುದೇ ಭತ್ಯೆ ನೀಡುವುದಿಲ್ಲ. ಸರ್ಕಾರವು ಈ ಬಗ್ಗೆ ಗಮನಿಸಿ ಪ್ರೋತ್ಸಾಹ ನೀಡಿದರೆ ಕ್ರೀಡಾರ್ಥಿಗಳ ಬೆಳವಣಿಗೆಗೆ ಉತ್ತಮ ಸಹಕಾರಿಯಾಗುತ್ತದೆ ಎಂದು ರಾಷ್ಟ್ರ ಮಟ್ಟದ ಅಥ್ಲೆಟಿಕ್ ಕ್ರೀಡೆಯಲ್ಲಿ ಚಿನ್ನದ ಪದಕವನ್ನು ಗಳಿಸಿರುವಂತಹ ಶಿಕ್ಷಕಿ ಸೌಮ್ಯ ತಿಳಿಸಿದರು. ಕ್ರಿಯಾಶೀಲ ವ್ಯಕ್ತಿಯಾಗಿ ಸಮಾಜದಲ್ಲಿ ಉತ್ತಮವಾಗಿ ಬೆಳೆಯಲು ಕ್ರೀಡೆಗಳು ಸಹಕಾರಿಯಾಗಿವೆ ಎಂದು ಪುರಸಭೆ ಮಾಜಿ ಉಪಾಧ್ಯಕ್ಷ ಎನ್.ಪಿ.ಹೇಮಂತ್ಕುಮಾರ್ ನುಡಿದರು. ಪ್ರತಿಯೊಬ್ಬರು ಕ್ರೀಡಾಭಿಮಾನಿಗಳಿಗೆ ಸ್ಪರ್ಧೆಗಳಲ್ಲಿ ಭಾಗವಹಿಸುವಂತಹ ಇಚ್ಛೆವುಳ್ಳವರಾಗಬೇಕು. ಕ್ರೀಡಾರ್ಥಿಗಳಿಗೆ ಸಿಗಬೇಕಾದಂತಹ ಎಲ್ಲಾ ರೀತಿಯ ಸೌಲಭ್ಯಗಳನ್ನು ಸಂಘದ ವತಿಯಿಂದ ವ್ಯವಸ್ಥೆಗೊಳಿಸಲಾಗುವುದು ಎಂದು ತಾಲೂಕು ನೌಕರರ ಸಂಘದ ಅಧ್ಯಕ್ಷ ವಾಸುದೇವಮೂರ್ತಿ ಹೇಳಿದರು.
ತಾಪಂ ಅಧ್ಯಕ್ಷ ಎನ್.ಶ್ರೀನಿವಾಸಮೂರ್ತಿ, ಪುರಸಭಾ ಸದಸ್ಯರಾದ ಎ.ಪಿಳ್ಳಪ್ಪ, ಶಿವಕುಮಾರ್, ಸಂಘದ ನಿರ್ದೇಶಕರಾದ ಗಿರೀಶ್, ನಾಗೇಶ್, ತಾಲೂಕಿನ ನೂರಾರು ಸರ್ಕಾರಿ ನೌಕರರು ಕ್ರೀಡೆಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

