ದೊಡ್ಡಬಳ್ಳಾಪುರದಲ್ಲಿ ಸಂಭ್ರಮದ ಕಡಲೇಕಾಯಿ ಪರಿಷೆ
ದೊಡ್ಡಬಳ್ಳಾಪುರ: ಕಾರ್ತೀಕ ಮಾಸದ ಕಡೆಯ ಸೋಮವಾರದ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವೂ ಇಲ್ಲಿನ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಬಯಲು ಬಸವಣ್ಣ ದೇವಾಲಯದಲ್ಲಿ ಕಡಲೇಕಾಯಿ ಪರಿಷೆ ಸಂಭ್ರಮದಿಂದ ನಡೆಯಿತು.
ಪರಿಷೆ ಅಂಗವಾಗಿ ದೇವಾಲಯಕ್ಕೆ ಸಾವಿರಾರು ಭಕ್ತಾದಿಗಳು ತಂಡೋಪತಂಡವಾಗಿ ಆಗಮಿಸಿ ಶ್ರೀಸ್ವಾಮಿಯ ದರ್ಶನ ಪಡೆದರು.
ಶ್ರೀಬಯಲು ಬಸವಣ್ಣ ದೇವಸ್ಥಾನದ ಸೇವಾ ಟ್ರಸ್ಟ್ ಮತ್ತು ಕರ್ನಾಟಕ ಕನ್ನಡ ಅಭಿಮಾನಿಗಳ ಸಂಘದ ನೇತೃತ್ವದಲ್ಲಿ 17ನೇ ವರ್ಷದ ಕಡಲೇಕಾಯಿ ಪರಿಷೆ, ಕರ್ನಾಟಕ ರಾಜ್ಯೋತ್ಸವ ಮತ್ತು ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೆಳಗ್ಗೆ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಶ್ರೀಸ್ವಾಮಿಯ ಉತ್ಸವ ಮೂರ್ತಿಯ ರಾಜಬೀದಿ ಉತ್ಸವ ನಡೆಯಿತು. ಉತ್ಸವ ಮೂರ್ತಿಯ ಸಮ್ಮುಖದಲ್ಲಿ ರಾಶಿ ರಾಶಿ ಕಡಲೇಕಾಯಿ ಸುರಿದು ಸಂಭ್ರಮಿಸಲಾಯಿತು. ದೇವಾಲಯಕ್ಕೆ ಆಗಮಿಸಿದ್ದ ಎಲ್ಲ ಭಕ್ತಾದಿಗಳಿಗೂ ಉಚಿತವಾಗಿ ಕಡಲೇಕಾಯಿ ವಿತರಣೆ ಮಾಡಲಾಯಿತು. ಸುಮಾರು 30 ಕ್ವಿಂಟಾಲ್ ಕಡಲೇಕಾಯಿಯನ್ನು ಉಚಿತವಾಗಿ ವಿತರಿಸಲಾಗಿದೆ ಎಂದು ಟ್ರಸ್ಟ್ ಪದಾಧಿಕಾರಿಗಳು ವಿವರಿಸಿದರು.
ಕಡಲೇಕಾಯಿ ಪರಿಷೆ ಬಯಲುಸೀಮೆ ಭಾಗದ ಜನ ಕಾರ್ತೀಕ ಮಾಸದಲ್ಲಿ ವಿಶಿಷ್ಟವಾಗಿ ಆಚರಿಸುವ ಹಬ್ಬವಾಗಿದೆ. ಅದರಲ್ಲೂ ಮುಖ್ಯವಾಗಿ ಬಸವಣ್ಣನ ದೇವಾಲಯಗಳು ಆಶ್ರಯದಲ್ಲಿ ಈ ಪರಿಷೆಗಳು ನಡೆಯುತ್ತವೆ. ಬೆಂಗಳೂರಿನಲ್ಲಿ ಬಸವನಗುಡಿಯ ಕಡಲೇಕಾಯಿ ಪರಿಷೆಯಂತೆ ದೊಡ್ಡಬಳ್ಳಾಪುರದಲ್ಲೂ ಪರಂಪರಾಗತವಾಗಿ ಈ ಆಚರಣೆ ನಡೆದುಕೊಂಡು ಬರುತ್ತಿದೆ. ಕಾರ್ಯಕ್ರಮದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು.
ಟ್ರಸ್ಟ್ನ ಅಧ್ಯಕ್ಷ ಕೆ.ವಿ.ರವಿಕುಮಾರ್, ಗೌ.ಅಧ್ಯಕ್ಷ ಎನ್.ನರಸಿಂಹಮೂರ್ತಿ, ಪ್ರ.ಕಾರ್ಯದರ್ಶಿ ಮಂಜುನಾಥ್, ಕಾರ್ಯದರ್ಶಿ ವಿ.ನಾಗರಾಜ್, ಉಪಾಧ್ಯಕ್ಷ ಕೃಷ್ಣಮೂರ್ತಿ, ಖಜಾಂಚಿ ಹನುಮಂತು ಮತ್ತಿತರರು ಪರಿಷೆಯ ನೇತೃತ್ವ ವಹಿಸಿದ್ದರು.
ರಾಜ್ಯೋತ್ಸವ: ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆಯನ್ನೂ ಮಾಡಲಾಯಿತು. ಕಾರ್ಯಕ್ರಮದಲ್ಲಿ ರಾಜಕೀಯ ಪಕ್ಷಗಳ ಮುಖಂಡರು, ಸ್ಥಳೀಯ ಸಂಸ್ಥೆಗಳ ಸದಸ್ಯರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಜರಿದ್ದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಪರಿಷೆ ಅಂಗವಾಗಿ ಸಂಜೆ ನಿಸರ್ಗ ಯೋಗಾ ಕೇಂದ್ರದಿಂದ ಸಾಂಸ್ಕೃತಿಕ ಹಾಗೂ ಯೋಗ ಪ್ರದರ್ಶನ ನಡೆಯಿತು. ಬಯಲು ಬಸವಣ್ಣ ದೇವಾಲಯದಲ್ಲಿ ವಿಶೇಷ ಅಲಂಕಾರ ಏರ್ಪಡಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

