ರಾಸುಗಳ ಮಾಲೀಕರಿಗೆ ಶೀಘ್ರ ಪರಿಹಾರ ವಿತರಿಸಿ
ಕ.ಪ್ರ.ವಾರ್ತೆ ರಾಮನಗರ ಡಿ.12
ಕಾಲುಬಾಯಿ ಜ್ವರದಿಂದ ಮರಣ ಹೊಂದಿದ ರಾಸುಗಳ ಮಾಲೀಕರಿಗೆ ಸರ್ಕಾರದ ಪರಿಹಾರ ಧನ ವಿತರಣೆ ಪ್ರಕ್ರಿಯೆಯನ್ನು ಜರೂರಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಪಶು ಸಂಗೋಪನಾ ಇಲಾಖೆ, ಜಿಲ್ಲಾಡಳಿತಕ್ಕೆ ಜಿ.ಪಂ. ಅಧ್ಯಕ್ಷ ಎಚ್.ಸಿ.ರಾಜು ತಾಕೀತು ಮಾಡಿದ್ದಾರೆ.
ಜಿ.ಪಂ. ಸಭಾಂಗಣದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದಿಂದ ಕೆಲವೇ ಫಲಾನುಭವಿಗಳಿಗೆ ಮಾತ್ರ ಪರಿಹಾರ ವಿತರಣೆಯಾಗಿದೆ. ಉಳಿಕೆ ರೈತರಿಗೂ ಶೀಘ್ರ ಹಣ ಬಿಡುಗಡೆಗೊಳಿಸಿ, ಹಂಚಿಕೆ ಮಾಡಬೇಕು ಎಂದರು.
ಸಸಿ ನೆಡಲು ಸೂಚನೆ: ಜಿಲ್ಲೆಯ 4 ತಾಲೂಕುಗಳ ಪ್ರೌಢಶಾಲಾ ಆವರಣದಲ್ಲಿ ತೋಟಗಾರಿಕೆ ಮತ್ತು ಸಾಮಾಜಿಕ ಅರಣ್ಯ ಇಲಾಖೆಯಿಂದ ಸಸಿಗಳನ್ನು ನೆಡುವ ಕಾರ್ಯಕ್ರಮದಲ್ಲಿ ರಾಮನಗರ ತಾಲೂಕಿನ ಪ್ರಗತಿ ತೃಪ್ತಿದಾಯಕವಾಗಿಲ್ಲ. ಗುರಿ ಸಾಧನೆಗೆ ಮುಂದಾಗಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ರಾಜು ಸೂಚಿಸಿದರು.
ಅಗತ್ಯ ಇರುವೆಡೆ ಭವನ : ರಾಮನಗರ ಜಿಲ್ಲಾದ್ಯಂತ ಅಗತ್ಯವಿರುವೆಡೆ ಅಂಬೇಡ್ಕರ್ ಭವನ ನಿರ್ಮಾಣವಾಗಬೇಕು. ಈ ನಿಟ್ಟಿನಲ್ಲಿ ಗ್ರಾಮವಾರು ಪರಿಶೀಲಿಸಿ, ಸಮಗ್ರ ಮಾಹಿತಿಯೊಂದಿಗೆ ಶಿಫಾರಸು ಮಾಡುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಸ್ವಂತ ನಿವೇಶನವಿಲ್ಲದ ವಿದ್ಯಾರ್ಥಿನಿಲಯಗಳನ್ನು ಗುರುತಿಸಿ, ನಿವೇಶನ ಮಂಜೂರಾತಿಗಾಗಿ ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಬೇಕು ಎಂದು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಮಾಸಾಂತ್ಯಕ್ಕೆ ಪೂರ್ಣಗೊಳಿಸಿ: ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಪಡಿತರ ಚೀಟಿ ವಿತರಣೆ ಪ್ರಕ್ರಿಯೆಯನ್ನು ಡಿಸೆಂಬರ್ ಮಾಸಾಂತ್ಯದೊಳಗೆ ಪೂರ್ಣಗೊಳಿಸಬೇಕು. ಅಮಾನತುಗೊಳಿಸಿರುವ 22 ನ್ಯಾಯಬೆಲೆ ಅಂಗಡಿ ಮಾಲೀಕರ ವಿರುದ್ಧ ಜರುಗಿಸಿರುವ ಕ್ರಮದ ವಿವರ ಒದಗಿಸಬೇಕು ಎಂದು ರಾಜು ಆದೇಶಿಸಿದರು.
ರೈತರಿಗೆ ಸಸಿ ವಿತರಿಸಿ: ಸಾಮಾಜಿಕ ಅರಣ್ಯ ಇಲಾಖೆಯಿಂದ ರೈತರಿಗೆ ಹೆಬ್ಬೇವು ಸಸಿಗಳು, ಕಿರುಬೇವು ಸಸಿಗಳನ್ನು ವಿತರಿಸಬೇಕು. ಹೆಚ್ಚು ಪ್ರಮಾಣದಲ್ಲಿ ಶ್ರಿಗಂಧ ಸಸಿಗಳನ್ನು ವಿಸ್ತರಿಸಿ, ಈ ಬೆಳೆ ಪ್ರಮಾಣ ವಿಸ್ತರಿಸಬೇಕು. ಜಿಲ್ಲಾ ಕೈಗಾರಿಕಾ ಇಲಾಖೆಯು ಸಣ್ಣ ಕೈಗಾರಿಕಾ ಘಟಕಗಳು ಸ್ಥಾಪನೆಗೆ ಒತ್ತು ನೀಡಬೇಕು ಎಂದರು.
ಪ್ರೋತ್ಸಾಹ ಧನ ವಿತರಿಸಿ: ರೇಷ್ಮೆ ಬೆಳೆಗಾರರಿಗೆ ಪ್ರೋತ್ಸಾಹ ಧನವನ್ನು ಮಾ.13ರೊಳಗೆ ಬಿಡುಗಡೆ ಮಾಡಬೇಕು. ಕರ್ನಾಟಕ ರಾಜ್ಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಕಾರ್ಯಕ್ರಮದ ಅಡಿ ಫಲಾನುಭವಿಗಳಿಗೆ ಸಾಲ ನೀಡಲು ವ್ಯವಸ್ಥೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ವೈದ್ಯಾಧಿಕಾರಿಗೆ ಆದೇಶ: ಜಿಲ್ಲೆಯಲ್ಲಿರುವ ನಕಲಿ ವೈದ್ಯರ ವಿರುದ್ಧ ಜರುಗಿಸಲಾದ ಕ್ರಮದ ವಿವರವನ್ನು ಮುಂದಿನ ಸಭೆಯೊಳಗೆ ಮಂಡಿಸಬೇಕು. ಜಿಲ್ಲಾಸ್ಪತ್ರೆಯಲ್ಲಿರುವ ಡಯಾಲಿಸಿಸ್ ಘಟಕ ಮತ್ತು ಆಸ್ಪತ್ರೆ ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ರಾಜು ವೈದ್ಯಾಧಿಕಾರಿಗಳಿಗೆ ಆದೇಶಿಸಿದರು.
ಸಭೆಯಲ್ಲಿ ಜಿ.ಪಂ. ಉಪಾಧ್ಯಕ್ಷೆ ಬಿ.ಎಸ್.ಗೌರಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷರಾದ ವಿಜಯಕುಮಾರ್, ರಘುಕುಮಾರ್, ಉಪ ಕಾರ್ಯದರ್ಶಿ ಆರ್.ಲತಾ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

