ಪ.ಪೂ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರ ಶೀಘ್ರ ನೇಮಕ: ಶಾಸಕ
ಹೊಸಕೋಟೆ : ವಿದ್ಯಾರ್ಥಿಗಳು ಪ್ರೌಢಶಾಲಾ ವಿದ್ಯಾಭ್ಯಾಸದ ನಂತರ ಪದವಿ ಪೂರ್ವ ಕಾಲೇಜಿನಲ್ಲಿಯೂ ಕ್ರೀಡಾಭ್ಯಾಸವನ್ನು ಮುಂದುವರೆಸಲು ಅನುವಾಗುವಂತೆ ದೈಹಿಕ ಶಿಕ್ಷಕರನ್ನು ನೇಮಿಸುವಂತೆ ಸಂಬಂಧಪಟ್ಟ ಇಲಾಖಾ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎನ್.ನಾಗರಾಜ್ ಹೇಳಿದರು.
ಸಮೀಪದ ಅಲ್ ಅಮೀನ್ ವಸತಿ ಶಾಲೆ ಆವರಣದಲ್ಲಿ ಏರ್ಪಡಿಸಿದ್ದ ಪ.ಪೂ ಕಾಲೇಜುಗಳ ರಾಜ್ಯ ಮಟ್ಟದ ಟೆನಿಕಾಯ್ಟ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು. ಜೀವನ ಶೈಲಿ, ಆಹಾರ ಪದ್ಧತಿಯಲ್ಲಿ ಬದಲಾವಣೆಯಾಗುತ್ತಿರುವ ಕಾರಣದಿಂದಾಗಿ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕ್ರೀಡೆ, ವ್ಯಾಯಾಮದಿಂದ ದೈಹಿಕ, ಮಾನಸಿಕ ಸಮತೋಲನ ಕಾಪಾಡಿಕೊಂಡು ಉತ್ತಮ ಆರೋಗ್ಯ ಹೊಂದಲು ಸಾಧ್ಯವಾಗಲಿದೆ ಎಂದರು.
ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವ ಹೊಂದಿರಬೇಕು. ಸೋಲು ಗೆಲವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಪ್ರಸ್ತುತ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಂಶುಪಾಲರಿಗೆ ಪ್ರತ್ಯೇಕ ವೇತನ ಶ್ರೇಣೆ ನಿಗದಿಪಡಿಸಲು ಇಲಾಖಾ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ತಿಳಿಸಿದರು.
ಸ್ವತಂತ್ರ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಸ್.ಕೆ. ಶಕೀಲಾ ಅಹಮ್ಮದ್ ಮಾತನಾಡಿ, 2 ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿಯಲ್ಲಿ ರಾಜ್ಯದ 21 ಬಾಲಕಿಯರ, 18 ಬಾಲಕರ ತಂಡಗಳು ಭಾಗವಹಿಸುತ್ತಿವೆ ಎಂದು ತಿಳಿಸಿದರು.
ಖಾಸಗಿ ಕಾಲೇಜುಗಳ ಆಡಳಿತ ಮಂಡಳಿ, ದಾನಿಗಳ ಸಹಕಾರದಿಂದ ಪಂದ್ಯಾವಳಿ ಆಯೋಜಿಸಲಾಗಿದೆ. ಸರಕಾರಿ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರ ನೇಮಕಾತಿಯಾಗದ ಕಾರಣ ಅಭ್ಯಸದ ಕೊರತೆಯಿಂದಾಗಿ
ವಿದ್ಯಾರ್ಥಿಗಳು ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಸರಕಾರ ಕ್ರೀಡಾ ಉಪಕರಣಗಳನ್ನು ಖರೀದಿಸಲು ಅನುದಾನ, ವೆಚ್ಚಕ್ಕೆ ನಿಗದಿಪಡಿಸಿರುವ ಹಣವನ್ನು ಹೆಚ್ಚಳ ಮಾಡಬೇಕು ಎಂದರು. ಅಲ್ ಅಮೀನ್ ವಸತಿ ಶಾಲೆ ಟ್ರಸ್ಟ್ನ ಅಧ್ಯಕ್ಷ ಜಮೀರ್ ಅಹಮ್ಮದ್ ಪಾಷಾ, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಮುನಿಶಾಮಣ್ಣ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

