ಬೆಂಗಳೂರು ಗ್ರಾಮಾಂತರ

ಬಾಲ್ಯದಲ್ಲೇ ಮೌಲ್ಯ ತುಂಬುವ ಶಿಕ್ಷಣ ನೀಡಿ: ಎಚ್‌ಡಿಕೆ ಸಲಹೆ

Published On :

ಕ.ಪ್ರ.ವಾರ್ತೆ ,  ರಾಮನಗರ ,  ಡಿ.20
ಕಲ್ಮಶವಿಲ್ಲದ ಮಕ್ಕಳ ಮನಸ್ಸಿನಲ್ಲಿ ಉತ್ತಮ ಮೌಲ್ಯಗಳನ್ನು ತುಂಬಿ, ಸಮಾಜದ ಉತ್ತಮ ಪ್ರಜೆಗಳಾಗಿ ರೂಪಿಸಬೇಕಾದುದು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷ ನಾಯಕ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.  ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಗುರುಭವನದಲ್ಲಿ ಶುಕ್ರವಾರ ನಡೆದ 2013-14ನೇ ಸಾಲಿನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಉತ್ತಮ ಅಡಿಪಾಯ ಹಾಕಬೇಕು ಎಂದರು.
ಇಂದಿನ ಯುವಜನತೆ ಪಾಶ್ಚಿಮಾತ್ಯ ಶೈಲಿಗೆ ಮಾರುಹೋಗುತ್ತಿದ್ದಾರೆ. ಮಕ್ಕಳಲ್ಲಿ ದೇಸೀ ಕಲೆ ಮತ್ತು ಸಂಸ್ಕೃತಿಯ ಸೊಗಡನ್ನು ಬಿತ್ತಬೇಕು. ಅವರಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ, ಸೂಕ್ತ ಪ್ರೋತ್ಸಾಹ ನೀಡುವ ಮೂಲಕ ಅನಾವರಣಗೊಳಿಸಬೇಕು. ಈ ನಿಟ್ಟಿನಲ್ಲಿ ಶಿಕ್ಷಕ ವಣಂದದ ಪ್ರಯತ್ನ ಶ್ಲಾಘನೀಯ ಎಂದು ಪ್ರಶಂಸಿಸಿದರು.
ಇದೇ ವೇಳೆ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿ ಮೊದಲ ಮೂರು ಸ್ಥಾನ ಗಳಿಸಿದ ವಿದ್ಯಾರ್ಥಿಗಳು ಹಾಗೂ ಶಾಲೆಯ ಶಿಕ್ಷಕರಿಗೆ ರು.25 ಸಾವಿರ ಬಹುಮಾನ ಘೋಷಿಸಿದರು. ಮಕ್ಕಳ ಮನಸ್ಸಿನಲ್ಲಿರುವ ಒಳ್ಳೆಯ ಭಾವನೆಗಳಿಗೆ ಪ್ರೋತ್ಸಾಹ ನೀಡಿ, ನಾಡಿಗೆ, ದೇಶಕ್ಕೆ ಒಳ್ಳೆಯ ವ್ಯಕ್ತಿಯನ್ನಾಗಿ ರೂಪಿಸಬೇಕು ಎಂದು ಕುಮಾರಸ್ವಾಮಿ ಅವರು ಶಿಕ್ಷಕರಿಗೆ ಕರೆ ನೀಡಿದರು.
ಮಕ್ಕಳು ತಮ್ಮದೇ ಆದ ವೈಶಿಷ್ಟ್ಯತೆ ಹೊಂದಿರುತ್ತಾರೆ. ಅವರ ಪ್ರತಿಭೆಯನ್ನು ಗುರುತಿಸಿ ಸಾಮಾಜಿಕ, ಸಾಂಸ್ಕೃತಿಕವಾಗಿ ಮುಂದೆ ಬರಲು ಇಂತಹ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಬಹು ಮುಖ್ಯ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತಿ ಅಧ್ಯಕ್ಷ ಎಚ್.ಸಿ.ರಾಜು ಹೇಳಿದರು.
ಎಚ್.ಡಿ.ಕುಮಾರಸ್ವಾಮಿಯವರ 20 ತಿಂಗಳ ಅಧಿಕಾರವಧಿಯಲ್ಲಿ ಸಾವಿರಾರು ಪ್ರೌಢಶಾಲೆಗಳು, 400 ಸಂಯುಕ್ತ ಪದವಿ ಪೂರ್ವ ಕಾಲೇಜುಗಳು, 10 ಉನ್ನತ ಶಿಕ್ಷಣ ಕಾಲೇಜುಗಳನ್ನು ತೆರೆಯುವ ಮೂಲಕ ಗ್ರಾಮೀಣ ಭಾಗದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ತಂದರು ಎಂದರು.
ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರ ಹಾಕಲು ಪ್ರತಿಭಾ ಕಾರಂಜಿ ವೇದಿಕೆಯಾಗಿದೆ. ಮಕ್ಕಳಿಗೆ ಪೋಷಕರು, ಶಿಕ್ಷಕರು ಅಗತ್ಯ ಪ್ರೋತ್ಸಾಹ ನೀಡಬೇಕು ಎಂದು ತಾ.ಪಂ. ಅಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ತಿಳಿಸಿದರು.
ಜಿಪಂ ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ರಘುಕುಮಾರ್ ಮಾತನಾಡಿ, ಮಕ್ಕಳು ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಯಲ್ಲೂ ಪಾಲ್ಗೊಳ್ಳಬೇಕು. ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೇ ಮಾನವೀಯ ಮೌಲ್ಯಗಳನ್ನು ತಿಳಿಸಿ ಸತ್ಪ್ರಜೆಯಾಗಿಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ. ನಾವು ತಿದ್ದಿದಂತೆ ಮಕ್ಕಳು ರೂಪುಗೊಳ್ಳುವರು ಎಂದರು.
ಜಿ.ಪಂ. ಉಪಾಧ್ಯಕ್ಷೆ ಎಸ್.ಬಿ.ಗೌರಮ್ಮ, ಸದಸ್ಯೆ ಶಾಂತಮ್ಮ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಚ್.ಪಿ.ಜಯರಾಮ್, ಬಿಇಒ ಎಸ್.ಎನ್.ಕೃಷ್ಣೇಗೌಡ ಭಾಗವಹಿಸಿದ್ದರು. ಬಿಡದಿಯ ಜ್ಞಾನ ವಿಕಾಸ ಶಾಲೆಯ ಮಕ್ಕಳು ನಡೆಸಿಕೊಟ್ಟ ಕಂಸಾಳೆ ನೃತ್ಯ ಪ್ರದರ್ಶನ ನೆರೆದಿದ್ದವರ ಗಮನ ಸೆಳೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.