ಬೆಂಗಳೂರು ಗ್ರಾಮಾಂತರ

ವೃತ್ತಿ ಶಿಕ್ಷಣ ಕಾಯ್ದೆ ಜಾರಿಗೆ ವಿರೋಧ

Published On :

ಕ.ಪ್ರ.ವಾರ್ತೆ ,  ರಾಮನಗರ ,  ಡಿ.20
2006ರ ವೃತ್ತಿ ಶಿಕ್ಷಣ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಲಾಭ ಮಾಡಿಕೊಡಲು ಹೊರಟಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ನಗರದ ಕಂದಾಯಭವನದ ಆವರಣದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ, ಸರ್ಕಾರದ ವಿರುದ್ಧ ಘೋಷಣೆ ಕೂಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಂತರ ಅಪರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
2006ರ ವೃತ್ತಿ ಶಿಕ್ಷಣ ಕಾಯ್ದೆ ಜಾರಿಯಾದರೆ ಎಂಜಿನಿಯರಿಂಗ್, ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳು ಖಾಸಗಿ ವೃತ್ತಿ ಶಿಕ್ಷಣ ಸಂಸ್ಥೆಗಳಲ್ಲಿನ ದುಬಾರಿ ಶುಲ್ಕ ಭರಿಸಿ, ಶಿಕ್ಷಣ ಪಡೆಯುವುದು ಸಾಧ್ಯವಾಗದ ಮಾತು ಎಂದರು.
ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಿಂದಿನ ಸರ್ಕಾರ ಈ ಕಾಯ್ದೆಯನ್ನು ಜಾರಿಗೊಳಿಸದೇ ಕೈಬಿಟ್ಟಿತ್ತು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈಗ ಅದೇ ಕಾಯ್ದೆಯನ್ನು ಜಾರಿಗೊಳಿಸಲು ಹೊರಟಿರುವುದು ಬಡ ವಿದ್ಯಾರ್ಥಿ ಮೇಲೆ ಸರ್ಕಾರಕ್ಕೆ ಕಾಳಜಿ ಎಷ್ಟಿದೆ ಎಂಬುದನ್ನು ತೋರಿಸುತ್ತದೆ ಎಂದು ಹೇಳಿದರು.
ಸಚಿವರಿಂದಲೇ ಲಾಬಿ: ಸರ್ಕಾರದಲ್ಲಿ ಸಚಿವರಾಗಿರುವ ಎಷ್ಟೋ ಮಂದಿ ಖಾಸಗಿ ಶಿಕ್ಷಣ ಸಂಸ್ಥೆಗಳ ಮಾಲೀಕರಾಗಿದ್ದಾರೆ. ಆದ್ದರಿಂದ ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲಿನ ಹಿಡಿತವನ್ನು ಸಡಿಲಗೊಳಿಸಿದೆ. ಪರೋಕ್ಷವಾಗಿ ಇವರಿಗೆ ಲಾಭ ಮಾಡಿಕೊಡಲು ಹೊರಟಿದೆ. ಸರ್ಕಾರಕ್ಕೆ ನಿಜವಾಗಿಯೂ ಜನಪರ ಕಾಳಜಿ ಇದ್ದಲ್ಲಿ ಈ ಕಾಯ್ದೆ ಜಾರಿಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ಒಂದು ವೇಳೆ ಸರ್ಕಾರ ಈ ಕಾಯ್ದೆಯನ್ನು ಜಾರಿಗೊಳಿಸಿದ್ದೇ ಆದಲ್ಲಿ ಸಂಘಟನೆ ವತಿಯಿಂದ ರಾಜ್ಯಾದ್ಯಂತ ಉಗ್ರ ಹೋರಾಟ ರೂಪಿಸಲಾಗುವುದು. ರಾಜ್ಯದಲ್ಲಿ ಉಂಟಾಗುವ ಯಾವುದೇ ಅಹಿತಕರ ಘಟನೆಗೆ ಸರ್ಕಾರವೇ ನೇರ ಹೊಣೆಯಾಗಲಿದೆ ಎಂದು ಸರ್ಕಾರವನ್ನು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕ ಅನಿಲ್‌ಬಾಬು, ಶ್ರೇಯಸ್, ವಿಘ್ನೇಶ್, ಪೃಥ್ವಿ, ವೀರೇಶ್, ಸುಮನ್ ಮತ್ತಿತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.