ಎಚ್ಡಿಕೆ ಮನೆ ಮುಂದೆ ತಮಟೆ ಚಳವಳಿ: ದಲಿತರ ಎಚ್ಚರಿಕೆ
ಕ.ಪ್ರ.ವಾರ್ತೆ ರಾಮನಗರ ಡಿ.24
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕನಕಪುರದ ತಹಸೀಲ್ದಾರ್ ದಾಕ್ಷಾಯಿಣಿ ಅವರನ್ನು ಪದೇ ಪದೇ ವೈಯಕ್ತಿಕವಾಗಿ ನಿಂದಿಸುತ್ತಿದ್ದಾರೆ. ಕೂಡಲೇ ಇದನ್ನು ನಿಲ್ಲಿಸದಿದ್ದರೆ ರಾಮನಗರ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದಿಂದ ಬೆಂಗಳೂರಿನ ಅವರ ಮನೆ ಮುಂದೆ ತಮಟೆ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಅಖಿಲ ಕರ್ನಾಟಕ ದಲಿತ ಹಿಂದುಳಿದವರ ವೇದಿಕೆ ಅಧ್ಯಕ್ಷ ರಾಂಪುರ ನಾಗೇಶ್ ತಿಳಿಸಿದರು.
ಕನಕಪುರದಲ್ಲಿ ಜೆಡಿಎಸ್ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿರುವುದರಿಂದ ಹತಾಶರಾಗಿರುವ ಕುಮಾರಸ್ವಾಮಿ ಅವರು ದಲಿತ ಮಹಿಳೆ ದಾಕ್ಷಾಯಿಣಿ ವಿರುದ್ಧ ಸಾರ್ವಜನಿಕವಾಗಿ ವೈಯಕ್ತಿಕ ವಿಚಾರವನ್ನು ಪ್ರಸ್ತಾಪಿಸಿ, ನಿಂದಿಸುವ ಮೂಲಕ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ನಗರದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಆರೋಪಿಸಿದರು.
ದಾಕ್ಷಾಯಿಣಿ ಅವರು ಒಬ್ಬ ಅಧಿಕಾರಿಯಾಗಿ ಸರಿಯಾಗಿ ಕಾರ್ಯ ನಿರ್ವಹಿಸದಿದ್ದರೆ ಮೇಲಧಿಕಾರಿಗಳಿಗೆ ದೂರು ನೀಡಿ, ಕಾನೂನಿನ ಪ್ರಕಾರ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಿ. ಅದನ್ನು ಬಿಟ್ಟು ದೂರವಾಣಿ ಕರೆ ಸ್ವೀಕರಿಸಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ನಾಗೇಶ್ ಆಗ್ರಹಿಸಿದರು.
ತಹಸೀಲ್ದಾರ್ ದಾಕ್ಷಾಯಿಣಿ ಅವರನ್ನು ಕುಮಾರಸ್ವಾಮಿ ಅವರು ಸಾರ್ವಜನಿಕವಾಗಿ ಮತ್ತೊಮ್ಮೆ ನಿಂದಿಸುವುದು ಮರುಕಳಿಸಿದರೆ ಅವರ ಮನೆ ಮುಂದೆ ತಮಟೆ ಚಳವಳಿ ಹಮ್ಮಿಕೊಳ್ಳಲಾಗುವುದು ಹಾಗೂ ಅವರನ್ನು ದಲಿತ ವಿರೋಧಿ ಎಂದು ಪರಿಗಣಿಸಿ ರಾಜ್ಯಾದ್ಯಂತ ಆಂದೋಲನ ರೂಪಿಸಲಾಗುವುದು ಎಂದು ಎಚ್ಚರಿಸಿದರು. ಗೋಷ್ಠಿಯಲ್ಲಿ ವೆಂಕಟಸ್ವಾಮಿ, ಶಿವಲಿಂಗಯ್ಯ, ಕುಮಾರ್, ಮರಿಯಪ್ಪ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

