ಬೆಂಗಳೂರು ಗ್ರಾಮಾಂತರ

ರಾಜ್ಯದಲ್ಲಿ ಮೋದಿ ಅಲೆ ಇಲ್ಲವೇ ಇಲ್ಲ

Published On :

ಕ.ಪ್ರ.ವಾರ್ತೆ     ರಾಮನಗರ     ಡಿ.29
ರಾಜ್ಯದಲ್ಲಿ ಮೋದಿ ಅಲೆ ಇಲ್ಲವೇ ಇಲ್ಲ. ಇದೆಲ್ಲ ಕೇವಲ ಮಾಧ್ಯಮಗಳ ಸೃಷ್ಟಿಯಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಅತೀ ಹೆಚ್ಚು ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಬಿಜೆಪಿ, ಕೆಜೆಪಿ, ಶ್ರೀರಾಮಲು ಪಕ್ಷಗಳ ವಿಲೀನದಿಂದ ಕಾಂಗ್ರೆಸ್ ಅಭ್ಯರ್ಥಿಗಳ ಗೆಲವಿಗೆ ಯಾವುದೇ ಅಡ್ಡಿಯಾಗುವುದಿಲ್ಲ. ಗೆಲವಿನ ಅಂತರದಲ್ಲಿ ಕೇವಲ ಶೇ.2ರಷ್ಟು ವ್ಯತ್ಯಾಸ ಆಗಬಹುದು ಅಷ್ಟೆ ಎಂದು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಂದಿನಿಂದ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಬಡವರ, ದೀನದಲಿತರ, ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಇದರಿಂದಾಗಿ ಈ ಎಲ್ಲಾ ವರ್ಗದ ಜನರು ಕಾಂಗ್ರೆಸ್ ಪಕ್ಷದ ಕೈ ಹಿಡಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಂಬರುವ ಲೋಕಸಭಾ ಚುನಾವಣೆಗೆ ಎಲ್ಲ ರೀತಿಯಲ್ಲೂ ಸಜ್ಜಾಗುವಂತೆ ಈಗಾಗಲೇ ಜಿಲ್ಲಾ ಸಮಿತಿಗಳಿಗೆ ಸೂಚಿಸಲಾಗಿದೆ. ಜಿಲ್ಲಾಧ್ಯಕ್ಷರು ಜಿಲ್ಲೆಯಾದ್ಯಂತ ಪ್ರವಾಸ ಮಾಡಿ ಬೂತ್ ಮಟ್ಟದಿಂದ ಪಕ್ಷ ಸಂಘಟನೆಗೆ
ಒತ್ತು ನೀಡುವರು. ವಿಧಾನಸಭೆ ಚುನಾವಣೆಗೆ ಅನುಸರಿಸಿದ್ದ ರಣತಂತ್ರಗಳಿಗಿಂತ ಹೆಚ್ಚಿನ ಮಟ್ಟದಲ್ಲಿ ಲೋಕಸಭೆ ಚುನಾವಣೆಗೆ ಒತ್ತು ನೀಡಲಾಗುವುದು ಎಂದರು.
ಹೆಚ್ಚಿನ ಸ್ಥಾನ ನಿರೀಕ್ಷೆ: ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಿಂದ ಹೆಚ್ಚಿನ ಸ್ಥಾನಗಳ ನಿರೀಕ್ಷೆಯಲ್ಲಿದೆ. ಅಭ್ಯರ್ಥಿಗಳ ಆಯ್ಕೆಗಾಗಿ ಇಂದು ಮುಖ್ಯಮಂತ್ರಿಗಳ ಜತೆ ಭಾನುವಾರ ನಡೆಯುವ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಕೆಲವೇ ದಿನಗಳಲ್ಲಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ ಮಾಡುವುದಾಗಿ ಪರಮೇಶ್ವರ್ ತಿಳಿಸಿದರು.
ಶಾಸಕರು ವಿದೇಶ ಪ್ರವಾಸ ಕೈಗೊಂಡಿರುವುದು ಅಧ್ಯಯನಕ್ಕಾಗಿಯೇ ಹೊರತು ಮೋಜು-ಮಸ್ತಿ ನಡೆಸುವುದಕ್ಕಲ್ಲ. ಶಾಸಕರ ವಿದೇಶ ಪ್ರವಾಸ ಮೊದಲಿನಿಂದಲೂ ನಡೆದು ಬಂದಿದ್ದು, ಈಗಲೂ ಅದೇ ನಡೆಯುತ್ತಿದೆ. ವಿದೇಶೀ ಜನಪ್ರತಿನಿಧಿಗಳು ದೇಶದಲ್ಲಿ ಪ್ರವಾಸ ಕೈಗೊಂಡು ನಮ್ಮ ಆಡಳಿತ ವ್ಯವಸ್ಥೆಯ ಅಧ್ಯಯನ ನಡೆಸಿ ಉತ್ತಮವಾದುದನ್ನು ಅಲ್ಲಿ ಅಳವಡಿಸಿಕೊಳ್ಳುತ್ತಾರೆ ಎಂದರು.
ವಿದೇಶಿ ಪ್ರವಾಸ ಸಮರ್ಥನೆ: ಹಾಗೆಯೇ ನಮ್ಮ ಶಾಸಕರೂ ಕೂಡ ವಿದೇಶಗಳಲ್ಲಿರುವ ಆಡಳಿತ ವ್ಯವಸ್ಥೆ ಸೇರಿದಂತೆ ಇನ್ನಿತರೆ ಅಭಿವೃದ್ಧಿ ಕಾರ್ಯಗಳ ಅಧ್ಯಯನ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸುವರು. ಅದರಂತೆ ಅಲ್ಲಿರುವ ಉತ್ತಮ ವ್ಯವಸ್ಥೆಯನ್ನು ನಮ್ಮಲ್ಲೂ ಅಳವಡಿಸಿಕೊಳ್ಳಲಾಗುವುದು. ಈ ಅಧ್ಯಯನ ಪ್ರವಾಸವನ್ನು ಮಾಧ್ಯಮಗಳಲ್ಲಿ ತಪ್ಪಾಗಿ ಅರ್ಥೈಸಲಾಗುತ್ತಿದೆ ಎಂದು ವಿದೇಶ ಪ್ರವಾಸವನ್ನು ಸಮರ್ಥಿಸಿಕೊಂಡರು.
ಪ್ರವಾಸವನ್ನು ಮೊಟಕುಗೊಳಿಸುವಂತೆ ರಾಹುಲ್ ಗಾಂಧಿ ಅವರು ಸೂಚಿಸಿದ್ದಾರೆ. ಅವರಿಗೆ ಪ್ರವಾಸದ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ. ಈಗಾಗಲೇ 2 ತಂಡ ಅಧ್ಯಯನಕ್ಕೆ ವಿದೇಶಗಳಿಗೆ ತೆರಳಿದ್ದು, ಅವರು ಪ್ರವಾಸ ಮೊಟಕುಗೊಳಿಸುವುದಿಲ್ಲ. ಆದರೆ, 98 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇರುವುದರಿಂದ 3ನೇ ತಂಡದ ಪ್ರವಾಸವನ್ನು ಮುಂದೂಡುವಂತೆ ಮುಖ್ಯಮಂತ್ರಿ ಹಾಗೂ ತಾವು ಸೂಚಿಸಿರುವುದಾಗಿ ಅವರು ಹೇಳಿದರು.
ರಾಜ್ಯಪಾಲರ ಅಭಿಪ್ರಾಯ ಪರಿಗಣನೆ: ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಬಿಜೆಪಿ ಅಧಿಕಾರದಲ್ಲಿದ್ದ ವೇಳೆಯೂ ಸರ್ಕಾರದ ವಿರುದ್ಧ ಹರಿಹಾಯುತ್ತಿದ್ದರು. ಈಗಲೂ  ಸರ್ಕಾರದ ನಿಲುವು ಮತ್ತು ಸಚಿವರ ಕಾರ್ಯಕ್ಷಮತೆ ಬಗ್ಗೆ ಪದೇ ಪದೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯದ ಸಂವಿಧಾನದ ಮುಖ್ಯಸ್ಥರಾಗಿರುವ ರಾಜ್ಯಪಾಲರ ಪಕ್ಷಾತೀತವಾಗಿ ನೀಡುತ್ತಿರುವ ಅಭಿಪ್ರಾಯವನ್ನು ಗಂಭೀರವಾಗಿ ಪರಿಗಣಿಸಲಾಗುವುದು. ತಪ್ಪುಗಳನ್ನು ಸರಿಪಡಿಸಿಕೊಂಡು, ಆಡಳಿತದಲ್ಲಿ ಸುಧಾರಣೆ ತರುವ ಮೂಲಕ ರಾಜ್ಯಪಾಲರ ಹುದ್ದೆಗೆ ಗೌರವ ನೀಡುವುದಾಗಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪರಮೇಶ್ವರ್ ಉತ್ತರಿಸಿದರು.  ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಯ್ಯದ್ ಜಿಯಾ ಉಲ್ಲಾ, ನಗರಸಭೆ ಮಾಜಿ ಅಧ್ಯಕ್ಷ ಕೆ.ಶೇಷಾದ್ರಿ, ಮಹಾಬೋಧಿ ಸೊಸೈಟಿಯ ಸ್ವಾಮೀಜಿ ಬುದ್ಧಪ್ರಕಾಶ್ ಬಂತೇಜಿ, ಮುಖಂಡ ಶಿವಕುಮಾರಸ್ವಾಮಿ, ಎಸ್ಸಿ, ಎಸ್ಟಿ ಸಮಾನ ಮನಸ್ಕ ನೌಕರರ ವೇದಿಕೆ ಅಧ್ಯಕ್ಷ ಎಂ.ನಾಗರಾಜು ಹಾಜರಿದ್ದರು.


ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಂದಿನಿಂದ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಬಡವರ, ದೀನದಲಿತರ, ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಇದರಿಂದಾಗಿ ಈ ಎಲ್ಲಾ ವರ್ಗದ ಜನರು ಕಾಂಗ್ರೆಸ್ ಪಕ್ಷದ ಕೈ ಹಿಡಿಯಲಿದ್ದಾರೆ
ಟಿ  ಜಿ.ಪರಮೇಶ್ವರ್


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.