ಬೆಂಗಳೂರು ಗ್ರಾಮಾಂತರ

ವಿದ್ಯಾರ್ಥಿ ನಾಯಕರಿಗೆ ಕೈಕೋಳ: ಆಕ್ರೋಶ

Published On :

ರಾಮನಗರ: ಬಳ್ಳಾರಿಯಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿ ನಾಯಕರಿಗೆ ಕೈಕೋಳ ತೊಡಿಸಿ ಅವಮಾನಿಸಿರುವ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿ(ಎಬಿವಿಪಿ)ನ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ನಗರದ ಐಜೂರು ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಮಾನವ ಸರಪಳಿ ರಚಿಸಿ, ಅರ್ಧ ತಾಸು ವಾಹನ ಸಂಚಾರಕ್ಕೆ ಅಡ್ಡಿಪಡಿಸಿದರು. ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿ, ಗೃಹ ಸಚಿವ ಆರ್. ಅಶೋಕ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಮೆರವಣಿಗೆಯಲ್ಲಿ ಮಿನಿ ವಿಧಾನಸೌಧಕ್ಕೆ ತೆರಳಿ  ತಹಸೀಲ್ದಾರ್ ಹನುಮಂತರಾಯಪ್ಪ ಅವರಿಗೆ ಮನವಿ ಸಲ್ಲಿಸಿದರು.  
ಪ್ರಭಾವಿಗಳ ಒತ್ತಡಕ್ಕೆ ಮಣಿದಿರುವ ಪೊಲೀಸರು ವಿದ್ಯಾರ್ಥಿಗಳಿಗೆ ಕೈಕೋಳ ತೊಡಿಸಿ, ಭಯೋತ್ಪಾದಕರಿಗಿಂತಲೂ ಕೀಳಾಗಿ ನಡೆಸಿಕೊಂಡು ಅವಮಾನಸಿದ್ದಾರೆ. ನಕ್ಸಲರು, ಲೈವ್ಬ್ಯಾಂಡ್ಗಳಲ್ಲಿ ಅಕ್ರಮ ದಂದೆನಡೆಸುವವರನ್ನು ಬಂಧಿಸಿದಾಗ ಅವರ ಮುಖಕ್ಕೆ ಮಾಸ್ಕ್ ಹಾಕಿ ಕರೆದೊಯ್ಯುತ್ತಾರೆ. ಆದರೆ, ವಿದ್ಯಾರ್ಥಿಗಳಿಗೆ ಕೈಕೋಳ ತೊಡಿಸಿದ್ದು ಅಪರಾಧವೆಂದು ಆರೋಪಿಸಿದರು.
ಗೂಂಡಾಗಿರಿ:  ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮೊರೆ ಹೋದ ವಿದ್ಯಾರ್ಥಿಗಳ ಸಾವಿಗೆ ಕಾರಣ ಹುಡುಕಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕಿದ್ದ ಪೊಲೀಸರು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ, ಗೂಂಡಾಗಿರಿ ಮಾಡಿದ್ದಾರೆ.
ಈ ಘಟನೆಯನ್ನು ಗಮನಿಸಿದರೆ, ರಾಜ್ಯದಲ್ಲಿ ಪ್ರಜಾಪ್ರಭುತ್ವ ಸರ್ಕಾರವಿದೆಯೇ ಎನ್ನುವ ಅನುಮಾನ ಮೂಡುತ್ತದೆ. ಈ ಸರ್ವಾಧಿಕಾರಿ ಧೋರಣೆಯನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
ರಾಜ್ಯದ ಗೃಹ ಸಚಿವ ಆರ್. ಅಶೋಕ್ ಕೂಡಲೇ ಮಧ್ಯ ಪ್ರವೇಶಿಸಿ, ವಿದ್ಯಾರ್ಥಿಗಳಿಗೆ ಕೋಳ ತೊಡಿಸಿರುವ ಡಿವೈಎಸ್ಪಿ ಮುರುಗನ್, ಸರ್ಕಲ್ ಇನ್ಸ್ಪೆಕ್ಟರ್ ಮತ್ತು ಸಬ್ ಇನ್ಸ್ಪೆಕ್ಟರ್ ಅವರನ್ನು ತಕ್ಷಣವೇ ಅಮಾನತು ಪಡಿಸಬೇಕು. ಬಳ್ಳಾರಿಯಲ್ಲಿ ನಡೆದಿರುವ ವಿದ್ಯಾರ್ಥಿಗಳ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಸಿಒಡಿ ಅಥವಾ ಸಿಬಿಐ ತನಿಖೆಗೆ ಒಳಪಡಿಸಬೇಕು. ತಪ್ಪಿತಸ್ಥ ಕಾಲೇಜು ಆಡಳಿತ ಮಂಡಳಿಯವರನ್ನು ಶಿಕ್ಷೆಗೆ ಗುರಿಪಡಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಕಾರ್ಯದರ್ಶಿ ಸುನಿಲ್ ಕುಮಾರ್, ಜಿಲ್ಲಾ ಪದಾಧಿಕಾರಿಗಳಾದ ರಘುರಾಮ್, ವಿಜಯ್ಕುಮಾರ್, ಅನಿಲ್ಬಾಬು, ಕಾರ್ತಿಕ್, ಬಸವರಾಜು, ಶ್ರೀನಿವಾಸ್, ನಂದಿನಿ, ರಶ್ಮಿತಾ, ಲತಾ, ಪೂಜಾ ಮತ್ತಿತರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.