ಕುಡಿವ ನೀರು, ಮೇವಿಗಾಗಿ 40 ಕೋಟಿಗೆ ಪ್ರಸ್ತಾವನೆ
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಹಾಗೂ ಜಾನುವಾರುಗಳಿಗೆ ಮೇವು ಒದಗಿಸುವ ಸಲುವಾಗಿ ರು. 40 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ ಅಧ್ಯಕ್ಷ ತಿರುವರಂಗ ವಿ. ನಾರಾಯಣಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯ ನಾಲ್ಕು ತಾಲೂಕುಗಳನ್ನು ಈಗಾಗಲೇ ಬರ ಪೀಡಿತ ಪ್ರದೇಶವೆಂದು ಗುರುತಿಸಲಾಗಿದ್ದು, ಪರಿಸ್ಥಿತಿ ನಿಭಾಯಿಸಲು ಸೂಕ್ತ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಈಗಾಗಲೇ ನ್ಯೂಜಿಲ್ಯಾಂಡ್ನಿಂದ ಆಗಮಿಸಿರುವ ತಂತ್ರಜ್ಞರು, ಪರಿಸ್ಥಿತಿಯ ಅಧ್ಯಯನ ನಡೆಸಿದ್ದು, ಮೇವು ಬೆಳೆಯಲ್ಲಿ ತಂತ್ರಜ್ಞಾನ ಬಳಕೆ ಸಂಬಂಧ ಮುಂದಿನ ಏಳು ದಿನಗಳಲ್ಲಿ ಪ್ರಾತ್ಯಕ್ಷಿಕೆ ನೀಡಲಿದ್ದಾರೆ ಎಂದರು.
ಇದಕ್ಕೂ ಮುನ್ನ ಸದಸ್ಯ ಎಂ.ಎನ್. ರಾಂ ಅವರು ನೆಲಮಂಗಲ ತಾಲೂಕಿನಲ್ಲಿನ ತೀವ್ರ ನೀರಿನ ಕೊರತೆಯ ಕುರಿತು ಪ್ರಾತ್ಯಕ್ಷಿಕೆ ಪ್ರದರ್ಶಿಸಿದರು. ಅಲ್ಲದೆ, ಎದುರಾಗಿರುವ ತೀವ್ರ ನೀರಿನ ಕೊರತೆ ನೀಗಿಸಲು ತಕ್ಷಣ ಗೋಶಾಲೆ ನಿರ್ಮಿಸಬೇಕು. ಮೇವು ಸರಬರಾಜು ಹಾಗೂ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲು ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಅನುಪಯುಕ್ತ ಬೋರ್ವೆಲ್ಗಳು: ಗ್ರಾಮಾಂತರ ಜಿಲ್ಲೆಗಳಲ್ಲಿ ಕುಡಿಯುವ ನೀರು ಪೂರೈಕೆಗಾಗಿ ಬೋರ್ವೆಲ್ಗಳನ್ನು ಕೊರೆಸಲಾಗಿದೆಯಾದರೂ, ಅವುಗಳಲ್ಲಿ ಪಂಪ್ ಮೋಟಾರ್ ಅಳವಡಿಕೆ ಕುರಿತು ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ಇದರಿಂದ ಬೋರ್ವೆಲ್ಗಳು ಸಾಕಾಗುವಷ್ಟಿದ್ದರೂ ನೀರಿನ ಕೊರತೆ ಕಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ನಾರಾಯಣಸ್ವಾಮಿ, ಫೆಬ್ರವರಿ ಕೊನೆಯೊಳಗೆ ಬೋರ್ವೆಲ್ಗಳು, ಪಂಪ್ ಮೋಟಾರ್ ಅಳವಡಿಕೆ ಹಾಗೂ ಬೋರ್ವೆಲ್ಗಳ ಪುನಶ್ಚೇತನ ಸೇರಿದಂತೆ ಇತರ ಯೋಜನೆಗಳನ್ನು ಪೂರ್ಣಗೊಳಿಸಿ ವರದಿ ನೀಡಬೇಕು ಎಂದು ಆದೇಶಿಸಿದೆ.
ಪೂರ್ಣಗೊಳ್ಳದ ಕಾಮಗಾರಿ: ಈ ಸಂದರ್ಭದಲ್ಲಿ ಮಾತನಾಡಿದ ಸದಸ್ಯ ಬೀರಪ್ಪ, ನಾಲ್ಕು ತಾಲೂಕುಗಳ ವಿವಿಧ ಗ್ರಾಮಗಳಲ್ಲಿನ ಅಂಗನವಾಡಿಗಳ ಕಾಮಗಾರಿ ಪೂರ್ಣಗೊಳ್ಳುವ ಮುನ್ನ ಗುತ್ತಿಗೆದಾರರಿಗೆ ಹಣ ಪಾವತಿ ಮಾಡಲಾಗಿದೆ ಎಂದು ಆಕ್ಷೇಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಕ್ಕಳ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪನಿರ್ದೇಶಕರು, ಇದು ತಾಲೂಕು ಮಟ್ಟದ ಕಾರ್ಯಕ್ರಮವಾಗಿದ್ದು, ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದರು. ಇದಕ್ಕೆ ಸದಸ್ಯರು, ಅಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿದರು.
ಶಾಲೆಗಳ ವಿಲೀನ: ಗ್ರಾಮಾಂತರ ಜಿಲ್ಲೆಯಲ್ಲಿ ಕಾಡುತ್ತಿರುವ ಶಿಕ್ಷಕರ ಕೊರತೆ ನೀಗಿಸುವ ಸಲುವಾಗಿ ಅಲ್ಲಿನ ಕೆಲ ಶಾಲೆಗಳನ್ನು ವಿಲೀನಗೊಳಿಸಬಹುದು ಎಂಬ ಪ್ರಸ್ತಾವನೆಯನ್ನು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮುಂದಿಟ್ಟರು. ನೆಲಮಂಗಲ ತಾಲೂಕಿನ ಶಿವಗಂಗೆ ಗ್ರಾಮ ಪಂಚಾಯ್ತಿಯ 19 ಜನವಸತಿ ಸ್ಥಳಗಳಲ್ಲಿ 14 ಶಾಲೆಗಳಲ್ಲಿ 630 ಮಕ್ಕಳ ವ್ಯಾಸಂಗ ಮಾಡುತ್ತಿದ್ದು, 42 ಶಿಕ್ಷಕರಿದ್ದಾರೆ. ಈ ಶಾಲೆಗಳನ್ನು ವಿಲೀನಗೊಳಿಸಿದಲ್ಲಿ 22 ಶಿಕ್ಷಕರು ಲಭ್ಯರಾಗುತ್ತಾರೆ. ಇವರನ್ನು ಕೊರತೆ ಇರುವ ಶಾಲೆಗಳಿಗೆ ಬಳಸಿಕೊಳ್ಳಬಹುದು ಎಂದರು.
ಮಕ್ಕಳ ಗ್ರಾಮ ಸಭೆಗಳು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಬೇಕಿದೆ. ಹೆಚ್ಚುತ್ತಿರುವ ಮಕ್ಕಳ ದೌರ್ಜನ್ಯ ಹಾಗೂ ಕಳ್ಳ ಸಾಗಾಣಿಕೆಯ ಕುರಿತು ಕೆಲ ಸಂಪನ್ಮೂಲ ವ್ಯಕ್ತಿಗಳ ಮೂಲಕ ಮಕ್ಕಳಿಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಕೃಷ್ಣಪ್ಪ ಮನವಿ ಮಾಡಿದರು.
ಸಭೆಯಲ್ಲಿ ಉಪಾಧ್ಯಕ್ಷ ಹನುಮಂತೇಗೌಡ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

