'ಕುಡಿವ ನೀರಿನ ಸಮಸ್ಯೆ ನಿವಾರಣೆಗೆ ಸೂಕ್ತ ಯೋಜನೆ ರೂಪಿಸಿ'
ರಾಮನಗರ: ಮುಂಬರುವ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸೂಕ್ತ ಯೋಜನೆ ರೂಪಿಸಬೇಕು. ಕುಡಿಯುವ ನೀರಿಗಾಗಿ ಕೊರೆಯುವ ಕೊಳವೆ ಬಾವಿಗಳಿಗೆ ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿ.ಪಂ. ಅಧ್ಯಕ್ಷ ಮುದ್ದುರಾಜ್ ಯಾದವ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಡಿಯುವ ನೀರಿನ ವಿಷಯದಲ್ಲಿ ಅಧಿಕಾರಿಗಳು ಈಗಿನಿಂದಲೇ ಜಾಗೃತರಾಗಬೇಕು. ಕೊಳವೆ ಬಾವಿಗಳನ್ನು ಕೊರೆದು, ತಿಂಗಳುಗಟ್ಟಲೆ ವಿದ್ಯುತ್ ಸಂಪರ್ಕ ಕಲ್ಪಿಸದ ಬಗ್ಗೆ ದೂರು ಬಂದಲ್ಲಿ ಸಂಬಂಧಿಸಿದವರನ್ನೇ ಹೊಣೆಯಾಗಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಕುಡಿಯುವ ನೀರಿನ ಸಮಸ್ಯೆ ಪರಿಹಾರ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಅಧಿಕಾರಿಗಳಷ್ಟೇ ಹೊಣೆಗಾರಿಕೆ ಬೆಸ್ಕಾಂ ಅಧಿಕಾರಿಗಳ ಮೇಲಿದೆ. ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕಕ್ಕೆ ಆದ್ಯತೆ ನೀಡುವ ಜತೆಗೆ ಹದಗೆಡುವ ಟ್ರಾನ್ಸ್ಫಾರ್ಮರ್ಗಳ ಬದಲಾವಣೆಗಳು ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಅವರು ತಾಕೀತು ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಬೆಸ್ಕಾಂ ಅಧಿಕಾರಿಗಳು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವತಿಯಿಂದ ಡಿಸೆಂಬರ್ ಅಂತ್ಯಕ್ಕೆ 95 ಸಂಪರ್ಕಗಳು ಮಾತ್ರವೇ ಬಾಕಿ ಇದ್ದವು. ಅದರಲ್ಲಿ ಈಗಾಗಲೇ 80 ಸಂಪರ್ಕಗಳನ್ನು ನೀಡಲಾಗಿದ್ದು, 15 ಮಾತ್ರ ಬಾಕಿ ಇವೆ. ಅವನ್ನೂ ಆದಷ್ಟು ಜರೂರಾಗಿ ಪೂರ್ಣಗೊಳಿಸುತ್ತೇವೆ ಎಂದು ಭರವಸೆ ನೀಡಿದರು.
ವಿಳಂಬಕ್ಕೆ ಆಕ್ಷೇಪ: ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿಗಳಗೆ ಕೊಳವೆ ಬಾವಿಗಳನ್ನು ಕೊರೆಸುವ ವಿಷಯದಲ್ಲಿ ತೀವ್ರ ವಿಳಂಬವಾಗುತ್ತಿರುವುದಕ್ಕೆ ಆಕ್ಷೇಪಿಸಿದ ಮುದ್ದರಾಜ್, ಸಂಬಂಧಿಸಿದ ಗುತ್ತಿಗೆ ಸಂಸೆಯೊಂದಿಗೆ ವ್ಯವಹರಿಸಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸಮಾಜ ಕಲ್ಯಾಣ ಮತ್ತು ಬಿಸಿಎಂ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಲಿಫ್ಟ್ ಅಳವಡಿಕೆ: ಜಿ.ಪಂ. ಭವನಕ್ಕೆ ಫೆಬ್ರವರಿ ಅಂತ್ಯದೊಳಗೆ ಲಿಫ್ಟ್ ಅಳವಡಿಕೆ ಕಾರ್ಯ ಪೂರ್ಣಗೊಳಿಸಬೇಕು. ಮಾಗಡಿ ತಾಲೂಕಿನ ತಿಪ್ಪಸಂದ್ರ ಗ್ರಾಮದ ಶಿಕ್ಷಕರ ವಸತಿ ಗೃಹ ಕಟ್ಟಡದ ಕಾಮಗಾರಿ ಅನುಷ್ಠಾನದ ಬಗ್ಗೆ ಸಾಕಷ್ಟು ಕೇಳಿ ಬಂದಿರುವ ದೂರುಗಳ ಸಂಬಂಧ ಪರಿಶೀಲಿಸಿ, ಕ್ರಮ ಕೈಗೊಳ್ಳಬೇಕು ಎಂದು ಮುದ್ದುರಾಜ್ ಸೂಚನೆ ನೀಡಿದರು.
ಅರಿವು ಮೂಡಿಸಿ: ವಿಕಲಚೇತನರ ನೆರವು ಯೋಜನೆಯಡಿಯಲ್ಲಿ ಯಾವುದೇ ಅರ್ಜಿ ಬಂದಿಲ್ಲವೆಂದು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿ ತಿಳಿಸಿದಾಗ ಅಸಮಾಧಾನ ವ್ಯಕ್ತಪಡಿಸಿದ ಅಧ್ಯಕ್ಷರು, ಮೊದಲು ಯೋಜನೆಗಳ ಬಗ್ಗೆ ಜನತೆಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಿ. ಜಾಗಣತರಾದಾಗ ಜನರು ತಾವೇ ಅರ್ಜಿ ಹಿಡಿದು ಬರುತ್ತಾರೆ ಎಂದು ತೀಕ್ಷ್ಣವಾಗಿ ಹೇಳಿದರು.
ಚೈತನ್ಯ ಯೋಜನೆಯಡಿಯಲ್ಲಿ ವಾರ್ಷಿಕ ಗುರಿ 90 ಇದ್ದು, 148 ಅರ್ಜಿಗಳು ಬಂದಿವೆ. ಇವುಗಳಲ್ಲಿ 39 ಅರ್ಜಿ ಗಳು ಮಂಜೂರಾಗಿವೆ ಎಂದು ಡಿ.ದೇವ ರಾಜು ಅರಸು ಹಿಂದುಳಿದ ನಿಗಮದ ಅಧಿಕಾರಿಗಳು ತಿಳಿಸಿದರು. ಅಂಗನವಾಡಿ ಕಟ್ಟಡಗಳಿಗೆ ಸೌಲಭ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಇಲಾಖೆಗಳ ಕಾರ್ಯವೈಖರಿ ಬಗ್ಗೆ ಮುದ್ದುರಾಜ್ ಪರಾಮರ್ಶಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

