ಟ್ಯಾಂಕರ್ ಮೂಲಕ ನೀರು ಪೂರೈಸಿ
ಕ.ಪ್ರ.ವಾರ್ತೆ , ರಾಮನಗರ , ಜು. 1
ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಅವಶ್ಯಕತೆ ಇದ್ದಲ್ಲಿ ಮಾತ್ರ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆ ಕಾರ್ಯದರ್ಶಿ ಬಿ. ಬಸವರಾಜು ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಬೇಕು ಎಂದು ತಿಳಿಸಿದರು.
ರಾಮನಗರ ನಗರಸಭೆ ವ್ಯಾಪ್ತಿಯಲ್ಲಿ ಟ್ಯಾಂಕರ್‌ನಿಂದ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. 10 ಟ್ಯಾಂಕರ್ ನೀರು ಪೂರೈಸಿ, 20 ಟ್ಯಾಂಕರ್ ಎಂದು ಸುಳ್ಳು ಲೆಕ್ಕ ತೋರಿಸಿರುವುದು ಗಮನಕ್ಕೆ ಬಂದಿದೆ. ಇದು ನಿಜವೇ ಆದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ನೀರು ಸರಬರಾಜು ಮಂಡಳಿ ಅಧಿಕಾರಿ ಪಾಷ ಅವರಿಗೆ ಎಚ್ಚರಿಕೆ ನೀಡಿದರು.
8 ಕೋಟಿ ಬಾಕಿ: ಕುಡಿಯುವ ನೀರು ಸರಬರಾಜು ಸಂಬಂಧಿಸಿದಂತೆ ಬೆಸ್ಕಾಂಗೆ ರು.8 ಕೋಟಿ ಬಾಕಿ ಇದೆ. ಈ ಹಣವನ್ನು ಪಾವತಿಸಲು ರಾಜಸ್ವ ಮೂಲಗಳಿಂದ ಮಂಡಳಿಯೇ ಪರಿಹಾರ ಕಂಡುಕೊಳ್ಳಬೇಕು ಎಂದರು.
ಯಾವುದೇ ಕಾರಣಕ್ಕೂ ಬಿತ್ತನೆ ಬೀಜದ ಕೊರತೆ ಉಂಟಾಗದಂತೆ ಎಚ್ಚರವಹಿಸಬೇಕು. ಅಗತ್ಯ ದಾಸ್ತಾನು ಇಟ್ಟಿರಬೇಕು. ಮಳೆಯಾಗುವ ಸಂದರ್ಭಕ್ಕನುಗುಣವಾಗಿ ಪರ್ಯಾಯ ಬೆಳೆ ಬೆಳೆಯಲು ರೈತರಿಗೆ ಸಲಹೆ ನೀಡಬೇಕು ಎಂದು ಬಸವರಾಜು ತಿಳಿಸಿದರು.
ರೈತರು ಬೆಳೆದ ಹಣ್ಣು, ತರಕಾರಿಗಳಿಗೆ ಒಳ್ಳೆಯ ಬೆಲೆ ಸಿಗುವಂತೆ ನೋಡಿಕೊಳ್ಳಬೇಕು. ಕೃಷಿ ಮಾರುಕಟ್ಟೆಗಳಲ್ಲಿ ಮಧ್ಯವರ್ತಿ ಹಾವಳಿಯನ್ನು ತಪ್ಪಿಸಬೇಕು. ಜಿಲ್ಲೆಯ ಹವಾಮಾನಕ್ಕನುಗುಣವಾಗಿ ತೋಟಗಾರಿಕಾ ಬೆಳೆಗಳನ್ನು ಬೆಳೆಯುವಂತೆ ರೈತರಿಗೆ ಸಲಹೆ ನೀಡಬೇಕು ಎಂದು ತಿಳಿಸಿದರು.
ಅಧಿಕೃತವಾಗಿ 94 ಡೆಂಘೀ ಪ್ರಕರಣ: ಇದುವರೆಗೂ ಜಿಲ್ಲೆಯಲ್ಲಿ ಅಧಿಕೃತವಾಗಿ 94 ಡೆಂಘೀ ಪ್ರಕರಣ ದಾಖಲಾಗಿವೆ. ಆದರೆ ವಾಸ್ತವ್ಯದಲ್ಲಿ ಇದರ ಮೂರು ಪಟ್ಟು ಹೆಚ್ಚಿರಬಹುದು ಎಂದು ಡಿಎಚ್‌ಒ ರಘುನಾಥ್ ಸಭೆಗೆ ತಿಳಿಸಿದರು. ಇದರಿಂದ ಕೋಪಗೊಂಡ ಉಸ್ತುವಾರಿ ಕಾರ್ಯದರ್ಶಿ ಅವರು ಡಿಎಚ್‌ಒ ಆಗಿರುವ ನೀವೇ ಹೀಗೆ ಹೇಳಿದರೆ ಹೇಗೆ, ಇದರಿಂದ ನೀವು ಯಾವ ರೀತಿ ಕಾರ್ಯ ನಿರ್ವಹಿಸುತ್ತೀದ್ದೀರಿ ಎನ್ನುವುದು ತಿಳಿಯುತ್ತದೆ ಎಂದು ಹೇಳಿದರು.
ಈ ವೇಳೆ ಜಿಲ್ಲಾಧಿಕಾರಿ ಶ್ರೀರಾಮರೆಡ್ಡಿ, ಡಿಎಚ್‌ಒ ಡೆಂಘೀ ತಡೆ ಕುರಿತ ಸಭೆಗಳಿಗೆ ಹಾಜರಾಗುವುದಿಲ್ಲ ಎಂದು ತಿಳಿಸಿದರು. ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಸಿಇಒ ಅವರ ಜತೆಗೆ ಉತ್ತಮ ಸಂಬಂಧ ಇಟ್ಟುಕೊಳ್ಳಬೇಕು. ತಪ್ಪಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಘುನಾಥ್ ಅವರಿಗೆ ಎಚ್ಚರಿಕೆ ನೀಡಿದರು.
ಶಾಲಾ ವಿದ್ಯಾರ್ಥಿಗಳಿಗೆ ಶೇಕಡಾ 100ರಷ್ಟು ಸಮವಸ್ತ್ರ ನೀಡಲಾಗಿದೆ. ಶೇಕಡಾ 90ರಷ್ಟು ಪಠ್ಯ ಪುಸ್ತಕಗಳನ್ನು ವಿತರಿಸಲಾಗಿದೆ. 1 ಮತ್ತು 4ನೇ ತರಗತಿಯ ಆಂಗ್ಲ ಭಾಷೆ ಪಠ್ಯ ಪುಸ್ತಕ ಇನ್ನೂ ಬಾರದ ಕಾರಣ
ವಿತರಿಸಲಾಗಿಲ್ಲ ಎಂದು ಡಿಡಿಪಿಐ ಪ್ರಹ್ಲಾದ ಗೌಡ ಸಭೆಗೆ ತಿಳಿಸಿದರು. ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವಂತೆ ಪೋಷಕರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ವಾಸ್ತವ್ಯ ಇರಬೇಕು: ಜಿಲ್ಲಾ ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದುಕೊಂಡು ಕೆಲಸ ನಿರ್ವಹಿಸಬೇಕು ಎನ್ನುವ ನಿಯಮವಿದ್ದರೂ ಹಲವಾರು ಅಧಿಕಾರಿಗಳು ಇದನ್ನು ಉಲ್ಲಂಘಿಸಿರುವುದು ನನ್ನ ಗಮನಕ್ಕೆ ಬಂದಿದೆ. ಮುಂಬರುವ ದಿನಗಳಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ವಾಸ್ತವ್ಯವಿರಬೇಕು. ತಪ್ಪಿದಲ್ಲಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಬಿಡದಿ ಆಸುಪಾಸಿನ ಕೈಗಾರಿಕೆಗಳು ರಾಸಾಯನಿಕಯುಕ್ತ ತ್ಯಾಜ್ಯವನ್ನು ವೃಷಭಾವತಿ ನದಿಗೆ ಹರಿ ಬಿಡುತ್ತಿದ್ದಾರೆ. ಅಲ್ಲದೆ ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದಲ್ಲಿಯೇ ಹಲವಾರು ಕೈಗಾರಿಕೆಗಳು ತ್ಯಾಜ್ಯವನ್ನು ಸುರಿಯುತ್ತಿದ್ದಾರೆ. ಇಂತಹ ಕಾರ್ಖಾನೆಗಳನ್ನು ಪತ್ತೆ ಹಚ್ಚಿ ಲೈಸೆನ್ಸ್ ರದ್ದುಪಡಿಸಬೇಕು. ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಜಿಲ್ಲಾಧಿಕಾರಿ ಶ್ರೀರಾಮರೆಡ್ಡಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿ.ಪಂ. ಸಿಇಒ ಡಾ.ಎಂ.ವಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ಜಿ.ಪಂ. ಉಪ ಕಾರ್ಯದರ್ಶಿ ಸಿದ್ದರಾಮಯ್ಯ, ಉಪ ವಿಭಾಗಾಧಿಕಾರಿ ಡಾ.ರಾಜೇಂದ್ರ ಪ್ರಸಾದ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ರಾಜೀವ್‌ಗಾಂಧಿ ಆರೋಗ್ಯ ವಿವಿ ಕಾಮಗಾರಿ ಪ್ರಾರಂಭಿಸಿ
ಜಿಲ್ಲೆಯ ಬಹು ನಿರೀಕ್ಷಿತ ಯೋಜನೆಯಾದ ರಾಜೀವ್‌ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸುವಂತೆ ಜಿಲ್ಲಾ ಉಸ್ತವಾರಿ ಕಾರ್ಯದರ್ಶಿ ಬಿ.ಬಸವರಾಜು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.
ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅನುಮೋದನೆ ನೀಡಲಾಗಿರುವ ಯೋಜನೆಗೆ ಅರ್ಚಕರಹಳ್ಳಿ ಬಳಿ ಸ್ಥಳ ಗುರುತಿಸಿ, 310 ಕೋಟಿ ಯೋಜನಾ ಹಣವನ್ನು ಮೀಸಲಿರಿಸಲಾಗಿತ್ತು. 274 ಎಕರೆ ಜಾಗದ ಪೈಕಿ 83 ಎಕರೆ ಜಮೀನಿಗೆ ಪರಿಹಾರವನ್ನು ರೈತರು ಪಡೆದುಕೊಂಡಿದ್ದಾರೆ. ಆದರೆ ಕೆಲ ರೈತರು ಇದನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ನಲ್ಲಿ ಧಾವೆ ಹೂಡಿದ್ದಾರೆ ಎಂದು ಪಿಡಬ್ಲ್ಯೂಡಿ ಅಧಿಕಾರಿಗಳು ತಿಳಿಸಿದರು. ಇದಕ್ಕೆ ಉತ್ತರಿಸಿದ ಕಾರ್ಯದರ್ಶಿಗಳು ಸುಪ್ರೀಂ ಕೋರ್ಟ್‌ನಲ್ಲಿ ಧಾವೆ ಹೂಡಿದ್ದಾರೆಯೇ ವಿನಃ, ತಡೆಯಾಜ್ಞೆ ತಂದಿಲ್ಲ. ಆದ್ದರಿಂದ ಜಿಲ್ಲಾಡಳಿತ ಮತ್ತು ಪೊಲೀಸರ ನೆರವಿನಿಂದ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

