ಅರಣ್ಯ ಹಕ್ಕು ಸಮಿತಿ ಅರ್ಜಿಗಳ ಪರಿಶೀಲನೆ
ಕ.ಪ್ರ. ವಾರ್ತೆ ರಾಮನಗರ ಜು.10
ತಾಲೂಕಿನ ಮಂಚನಾಯಕನಹಳ್ಳಿ ಗ್ರಾಮ ಪಂಚಾಯಿತಿಯ ವಿಶೇಷ ಗ್ರಾಮ ಸಭೆ ಮತ್ತು ಸಾಮಾಜಿಕ ಲೆಕ್ಕ ಪರಿಶೋಧನೆ ಕಾರ್ಯಕ್ರಮವು ಪಂಚಾಯಿತಿ ವ್ಯಾಪ್ತಿಯ ಭದ್ರಾಪುರ ಗ್ರಾಮದಲ್ಲಿ ಹನುಮಂತಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಪ್ರಮುಖವಾಗಿ 2013-14ನೇ ಸಾಲಿನ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹೆಚ್ಚುವರಿ ಕ್ರಿಯಾ ಯೋಜನೆ ಹಾಗೂ ಅರಣ್ಯ ಹಕ್ಕು ಸಮಿತಿಯ ಅರ್ಜಿಗಳ ಪರಿಶೀಲನೆ ಬಗ್ಗೆ ವ್ಯಾಪಕ ಚರ್ಚೆ ನಡೆಯಿತು.
ಗ್ರಾಮೀಣ ಜನರಿಗೆ ನರೇಗಾ ಯೋಜನೆಯಡಿ ಪ್ರತಿ ದಿನಕ್ಕೆ ರು.174ರಂತೆ ವರ್ಷಕ್ಕೆ 100 ದಿನಗಳ ಉದ್ಯೋಗ ನೀಡಲಾಗುತ್ತಿದೆ. ಹೀಗಿದ್ದರೂ ಶೇಕಡಾ 20ರಷ್ಟು ಜನರು ಮಾತ್ರ ಜಾಬ್ ಕಾರ್ಡ್ ಹೊಂದಿದ್ದಾರೆ. ಇದಕ್ಕೆ ಮಾಹಿತಿ ಕೊರತೆಯೇ ಕಾರಣ. ಅರ್ಹ ವ್ಯಕ್ತಿಗಳಿಗೆ ಜಾಬ್ ಕಾರ್ಡ್ ನೀಡುವ ಕೆಲಸ ಅತ್ಯಂತ ಜರೂರಾಗಿ ಆಗಬೇಕಿದೆ ಎಂದ ಸ್ವಯಂ ಸೇವಾ ಸಂಸ್ಥೆ ಮುಖ್ಯಸ್ಥ ಶ್ರೀನಿವಾಸ್ ಹೇಳಿದರು.
ಹೆಚ್ಚಿನ ಸಂಖ್ಯೆಯಲ್ಲಿ ಜಾಬ್ ಕಾರ್ಡ್: ಇದಕ್ಕೆ ಉತ್ತರಿಸಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಲೋಕೇಶ್, ಪಂಚಾಯಿತಿ ವ್ಯಾಪ್ತಿಯಲ್ಲಿ 2685 ಕುಟುಂಬಗಳಿವೆ. ಭದ್ರಾಪುರದಲ್ಲಿ 992 ಮಂದಿ ಜಾಬ್ ಕಾರ್ಡ್ ಹೊಂದಿದ್ದಾರೆ. ಮುಂದಿನ ದಿನಗಳಲ್ಲಿ ಜನರಿಗೆ ಅರಿವು ಮೂಡಿಸಿ, ನರೇಗಾ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಾಬ್ ಕಾರ್ಡ್ ಮಾಡಿಸಲಾಗುವುದು ಎಂದರು.
ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಮೂಲಭೂತ ಸೌಕರ್ಯಗಳ ಕೊರತೆ ಎದುರಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಕುಡಿಯುವ ನೀರು, ರಸ್ತೆ, ಚರಂಡಿ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಬುಡಕಟ್ಟು ಜನಾಂಗಕ್ಕೆ ಸರ್ಕಾರದಿಂದ ದೊರೆಯುವ ವಿಶೇಷ ಸೌಲಭ್ಯಗಳನ್ನು ತಲುಪಿಸುವುದು ನಮ್ಮ ಗುರಿಯಾಗಿದೆ ಎಂದರು.
ಜಿಲ್ಲೆಯಲ್ಲಿ ಅತೀ ಹೆಚ್ಚು ತೆರಿಗೆ ಸಂಗ್ರಹವಾಗುವ ಹೆಗ್ಗಳಿಕೆಗೆ ಮಂಚನಾಯಕನಹಳ್ಳಿ ಗ್ರಾ.ಪಂ. ಪಾತ್ರವಾಗಿದೆ. ಈ ಸಾಲಿನಲ್ಲಿ ರು.2.70 ಕೋಟಿ ಬಜೆಟ್ ಮಂಡಿಸಲಾಗಿದೆ. ರು.1.30 ಕೋಟಿ ಕಾಮಗಾರಿಗಳಿಗೆ ಕ್ರಿಯಾಯೋಜನೆ ರೂಪಿಸಲಾಗಿದ್ದು, ಶೀಘ್ರದಲ್ಲೇ ಶಂಕುಸ್ಥಾಪನೆ ನಡೆಯಲಿದೆ ಎಂದರು.
ಕಳೆದ ನಾಲ್ಕು ವರ್ಷದಿಂದ ರು.2 ಕೋಟಿ ನರೇಗಾ ಕಾಮಗಾರಿಗಳು ನಡೆದಿವೆ. ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಈ ಯೋಜನೆಯಡಿ ಈಗಾಗಲೇ 4 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದರು.
ಸಮುದಾಯ ಭವನ: ಟೊಯೊಟಾ ಹಾಗೂ ಬಾಸ್ಕೋ ಕಂಪನಿಗಳ ಸಹಯೋಗದೊಂದಿಗೆ ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮದಲ್ಲಿಯೂ ಸಮುದಾಯ ಭವನದ ನಿರ್ಮಾಣ, ಅಗತ್ಯ ಇರುವೆಡೆ ವಾಟರ್ ಟ್ಯಾಂಕ್ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.
ಉಪಾಧ್ಯಕ್ಷೆ ಮಂಗಳಮ್ಮ, ತಾ.ಪಂ. ಸದಸ್ಯೆ ಶೋಭಾ ಲಕ್ಷ್ಮಣಕುಮಾರ್, ಕಾರ್ಯದರ್ಶಿ ಶಿವಕುಮಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪುಟ್ಟಲಿಂಗೇಗೌಡ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

