ಬೆಂಗಳೂರು ಗ್ರಾಮಾಂತರ

ಟ್ರಾನ್ಸ್‌ಫಾರ್ಮರ್ ನಿರ್ವಹಣೆ ಇಲ್ಲದೆ ಅಪಾಯಕಾರಿ: ಶೀಘ್ರ ಕ್ರಮ ಕೈಗೊಳ್ಳಿ

Published On :

ರಾಮನಗರ: ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಟ್ರಾನ್ಸ್‌ಫಾರ್ಮರ್‌ಗಳ ನಿರ್ವಹಣೆ ಇಲ್ಲದೆ ಅಪಾಯಕಾರಿಯಾಗಿ ಪರಿಣಮಿಸಿವೆ ಎಂದು ರಾಜ್ಯ ರೈತ ಸಂಘದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನಕಪುರ ತಾಲೂಕಿನ ಕುರುಬರಹಳ್ಳಿಯಲ್ಲಿ ಅಕ್ಕಪಕ್ಕ ಸ್ಥಾಪಿಸಿರುವ ಎರಡು ಟ್ರಾನ್ಸ್‌ಫಾರ್ಮರ್‌ಗಳ ಸುತ್ತಲೂ ಗಿಡಗಂಟಿಗಳು ಬೆಳೆದಿವೆ. ಇದರಿಂದ ರು.40 ಸಾವಿರ ಮೌಲ್ಯದ ಸೀಮೆಹಸು ವಿದ್ಯುತ್‌ಶಾಕ್‌ಗೆ ಬಲಿಯಾಗಿದೆ. ಇಷ್ಟಾಗಿಯೂ ಬೆಸ್ಕಾಂ ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ತಂತಿಬೇಲಿ ಇಲ್ಲ: ಗ್ರಾಮಾಂತರ ಪ್ರದೇಶಗಳಲ್ಲಿ ಸ್ಥಾಪಿಸಲಾಗಿರುವ ಟ್ರಾನ್ಸ್‌ಫಾರ್ಮರ್‌ಗಳ ಸುತ್ತ ಮುನ್ನೆಚ್ಚರಿಕೆ ಕ್ರಮವಾಗಿ ತಂತಿಬೇಲಿ ಅಳವಡಿಸಬೇಕೆಂಬ ನಿಯಮ ಜಾರಿಯಲ್ಲಿದ್ದರೂ ಇದನ್ನು ಅಳವಡಿಸಿಕೊಂಡಿಲ್ಲ. ಶಿಥಿಲಗೊಂಡ ಟಿಸಿಗಳು ಜನತೆಗೆ ಸಮಸ್ಯಾತ್ಮಕವಾಗಿ ಪರಿಣಮಿಸಿವೆ. ಅಪಾಯಕಾರಿ ಟ್ರಾನ್ಸ್‌ಫಾರ್ಮರ್‌ಗಳನ್ನು ಸ್ಥಳಾಂತರಿಸಬೇಕೆಂಬ ಮನವಿಗೆ ಬೆಸ್ಕಾಂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎನ್ನುವುದು ಗ್ರಾಮಸ್ಥರ ಅಳಲಾಗಿದೆ.
ಕಳಪೆ ಕಾಮಗಾರಿ: ಟ್ರಾನ್ಸ್‌ಫಾರ್ಮರ್‌ಗಳನ್ನು ಎರಡು ಕಂಬಗಳ ಸಹಾಯದಿಂದ ನಿಲ್ಲಿಸಿರುವುದರಿಂದ ಗಾಳಿ ಮಳೆಗೆ ಅಲುಗಾಡುವುದು ಸಾಮಾನ್ಯವಾಗಿದೆ. ಹಲವೆಡೆ ವಾಲಿದ್ದರೂ ಅಧಿಕಾರಿಗಳು ಗಮನಹರಿಸಿಲ್ಲ. ಇದನ್ನೆ ದುರುಪಯೋಗಪಡಿಸಿಕೊಳ್ಳುತ್ತಿರುವ ಕಳ್ಳರು ಲೈನ್ ಆಫ್ ಮಾಡಿ ಟಿಸಿ ಹತ್ತಿ ಆಯಿಲ್ ಕದಿಯುವ ದಂಧೆಯನ್ನು ಆರಂಭಿಸಿದ್ದಾರೆಂಬ ಆರೋಪವೂ ಕೇಳಿ ಬರುತ್ತಿದೆ.
ರಿಪೇರಿ ವಿಳಂಬ: ಟ್ರಾನ್ಸ್‌ಫಾರ್ಮರ್ ರಿಪೇರಿಗೆ ರೈತರಿಂದ ಹಣ ಕೀಳುವ ಪ್ರವೃತ್ತಿಯನ್ನು ಖಂಡಿಸಿ ರೈತ ಸಂಘದ ಕಾರ್ಯಕರ್ತರು ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ, ಬದಲಿಗೆ ಟ್ರಾನ್ಸ್‌ಫಾರ್ಮರ್ ಸಾಗಣೆ ನೆಪದಲ್ಲಿ ಲಂಚ ಮುಂದುವರೆದಿದೆಯೆಂಬುದು ರೈತ ಸಂಘದ ಅಧ್ಯಕ್ಷ ಎಂ.ಪುಟ್ಟಸ್ವಾಮಿ, ಸಂಚಾಲಕ ಕೃಷ್ಣಪ್ಪ, ನಂಜಪ್ಪ  ಅವರ ಆರೋಪವಾಗಿದ್ದು ಈ ಬಗ್ಗೆ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.