ಬೆಂಗಳೂರು ಗ್ರಾಮಾಂತರ

ಸಾಮಾಜಿಕ ಅನಿಷ್ಟ ನಿಗ್ರಹದಲ್ಲಿ ವಿದ್ಯಾರ್ಥಿಗಳ ಪಾತ್ರ ಹಿರಿದು

Published On :

ದೊಡ್ಡಬಳ್ಳಾಪುರ: ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ 2013-14ನೇ ಶೈಕ್ಷಣಿಕ ಸಾಲಿನ ಕಾರ್ಯಯೋಜನೆಗಳ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು.
ಕಾರ್ಯಕ್ರಮವನ್ನು ನಿವೃತ್ತ ಉಪನ್ಯಾಸಕಿ ಕೆ.ಎಸ್.ಪ್ರಭಾ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಬದುಕಿನ ಮೌಲ್ಯಗಳ ಕುರಿತ ಮಂಥನಕ್ಕೆ ಎನ್‌ಎಸ್‌ಎಸ್ ಪ್ರಧಾನ ವೇದಿಕೆಯಾಗಿರುತ್ತದೆ. ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಮತ್ತು ಸಾಮಾಜಿಕ ಚಿಂತನೆಗಳನ್ನು ರೂಢಿಸಲು ಇದು ಸಹಕಾರಿ. ಉತ್ತಮ ಆಲೋಚನೆಗಳ ಅನುಷ್ಠಾನದ ನಿಟ್ಟಿನಲ್ಲಿ ಎಲ್ಲ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು ಎಂದರು.
ಇಂದಿನ ಪ್ರಸಕ್ತ ಸಂದರ್ಭದ ಸಾಮಾಜಿಕ ಅನಿಷ್ಟಗಳನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಎನ್‌ಎಸ್‌ಎಸ್ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು. ಚುನಾವಣೆ ಸಂದರ್ಭಗಳಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮತ್ತು ಮತದಾನದ ಮಹತ್ವ ಸಾರುವ ಕಾರ್ಯಕ್ರಮಗಳು, ಅತ್ಯಾಚಾರ-ಅನಾಚಾರಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಅವುಗಳ ವಿರುದ್ಧ ಸಾಮಾಜಿಕ ಜಾಗೃತಿಗೆ ಮುಂದಾಗುವ ಕಾರ್ಯಕ್ರಮಗಳು, ಪರಿಸರ ಮತ್ತು ವಾತಾವರಣವನ್ನು ಪರಿಶುದ್ಧವಾಗಿಟ್ಟುಕೊಳ್ಳುವ ಮೂಲಭೂತ ಚಿಂತನೆಗಳನ್ನು ರಾಷ್ಟ್ರೀಯ ಸೇವಾ ಯೋಜನೆ ಹೊಂದಿರುತ್ತದೆ. ಅವುಗಳ ಅನುಷ್ಠಾನಕ್ಕೆ ಹೆಚ್ಚಿನ ಪರಿಶ್ರಮ ಅಗತ್ಯ ಎಂದರು.
ಕೊಂಗಾಡಿಯಪ್ಪ ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ಪ್ರೊ.ಚಂದ್ರಪ್ಪ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್‌ಡಿಯುಇಟಿ ಟ್ರಸ್ಟಿ ಜೆ.ರಾಜೇಂದ್ರ ಮಾತನಾಡಿ, ಈ ಬಾರಿ ಕಾಲೇಜಿನ ಎನ್‌ಎಸ್‌ಎಸ್ ಸಹಯೋಗದಲ್ಲಿ ಪರಿಸರ ಸ್ನೇಹಿ ಬಳಗದ ಅಡಿಯಲ್ಲಿ ತಾಲೂಕಿನಾದ್ಯಂತ ಹಣ್ಣಿನ ಮರಗಳನ್ನು ಬೆಳೆಸುವ 10 ವರ್ಷಗಳ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ ಎಂದರು.
ಎನ್‌ಎಸ್‌ಎಸ್ ಸಹ ಅಧಿಕಾರಿ ರವಿಕಿರಣ್ ಕಾರ್ಯಯೋಜನೆ ಮಂಡಿಸಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಜೆ.ವಿ.ಚಂದ್ರಶೇಖರ್, ಶೈಕ್ಷಣಿಕ ಸಲಹೆಗಾರ ಕೆ.ಎನ್.ಶ್ರೀನಿವಾಸನ್, ಪ.ಪೂ.ಕಾಲೇಜು ಪ್ರಭಾರ ಪ್ರಾಂಶುಪಾಲ ಶ್ರೀನಿವಾಸ್, ಉಪಪ್ರಾಂಶುಪಾಲ ವೆಂಕಟರೆಡ್ಡಪ್ಪ ಚೆಟ್ಟಿ, ಎನ್‌ಎಸ್‌ಎಸ್ ಅಧಿಕಾರಿ ಎಂ.ಚಿಕ್ಕಣ್ಣ, ಪಿ.ಚೈತ್ರ, ಕೆ.ದಕ್ಷಿಣಾಮೂರ್ತಿ ಮತ್ತಿತರರು ಭಾಗವಹಿಸಿದ್ದರು. ಗಾಳಿಪಟ ಸ್ಪರ್ಧೆ ವಿಜೇತರಿಗೆ ಬಹುಮಾನ ನೀಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.