ಬೆಂಗಳೂರು ಗ್ರಾಮಾಂತರ

ಸಮಸ್ಯೆ ನಡುವೆಯೂ ಉತ್ತಮ ಸಾಧನೆ..

Published On :

ಚನ್ನಪಟ್ಟಣ: ದಿನ ಪೂರಾ ಕರ್ತವ್ಯಕ್ಕೆ ಮೀಸಲಾದ ಪೊಲೀಸರು ತಮ್ಮ ಕುಟುಂಬದ ಬಗ್ಗೆ ಗಮನಹರಿಸುವುದು ಕಷ್ಟಸಾಧ್ಯವಾಗಿದ್ದು, ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ಗಮನಿಸುವುದು  ಸವಾಲಿನ ಕೆಲಸವಾಗಿರುತ್ತದೆ. ಸಾಕಷ್ಟು ಸಮಸ್ಯೆಗಳ ನಡುವೆಯೂ ಪೊಲೀಸರ ಮಕ್ಕಳು ಉತ್ತಮ ಸಾಧನೆ ಮಾಡಿರುವುದು ಪ್ರಶಂಸನಾರ್ಹ ಎಂದು ಡಿವೈಎಸ್ಪಿ ಧರಣೇಂದ್ರ ಅಭಿಪ್ರಾಯಪಟ್ಟರು.
ಇಲ್ಲಿನ ಪೊಲೀಸ್ ಪರೇಡ್ ಮೈದಾನದಲ್ಲಿ ಚನ್ನಪಟ್ಟಣ ಪೊಲೀಸ್ ಉಪವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಪೊಲೀಸರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
 ಉತ್ತಮ ಅಂಕಗಳಿಸುವ ಮೂಲಕ ಹೆಚ್ಚಿನ ವಿದ್ಯಾಭ್ಯಾಸ ಮಾಡಿ ಉನ್ನತ ಹುದ್ದೆಗೆ ತಲುಪುವ ಮೂಲಕ ಪೊಲೀಸ್ ಇಲಾಖೆಗೆ ಕೀರ್ತಿ ತರಬೇಕೆಂದು ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳಿಗೆ ತಿಳಿಸಿದರು.
ಇನ್ನಷ್ಟು ಕಾರ್ಯಕ್ರಮ: ಇತರ ಇಲಾಖೆಗಳಿಗೆ ಹೋಲಿಸಿದರೆ ಹೆಚ್ಚು ಒತ್ತಡವಿರುವ ಇಲಾಖೆ ನಮ್ಮದಾಗಿದ್ದು, ಪೊಲೀಸರು ದಿನದ 24 ಗಂಟೆಗಳು ಸಾರ್ವಜನಿಕರ ಆಸ್ತಿ ಪ್ರಾಣ- ರಕ್ಷಣೆಯಲ್ಲಿ ತೊಡಗುವ ಪೊಲೀಸರಿಗೆ ಆತ್ಮಸ್ಥೈರ್ಯ ತುಂಬಲು ಇಂತಹ ಕಾರ್ಯಕ್ರಮಗಳ ಅಗತ್ಯತೆ ಸಾಕಷ್ಟಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ಅವರು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ 26 ಮಂದಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗಿದ್ದು, ಇದರಿಂದಾಗಿ ಮತ್ತಷ್ಟು ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡಲು ಪ್ರೇರಣೆಯಾಗುತ್ತದೆ ಎಂದು ತಿಳಿಸಿದ ಅವರು ಕಾರ್ಯಕ್ರಮಕ್ಕೆ ಸಹಕರಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಇಲಾಖೆಯ ಎಲ್ಲಾ ಸಿಬ್ಬಂದಿಗೂ ಧನ್ಯವಾದ ಸಲ್ಲಿಸಿದರು.
 ಪ್ರತಿಭಾಪುರಸ್ಕಾರ ನೀಡಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ ಅಗ್ರವಾಲ್ ನಮ್ಮ ಇಲಾಖೆಯಿಂದ ಇಂತಹುದೊಂದು ಕಾರ್ಯಕ್ರಮ ಮಾಡಬಹುದೆಂಬುದನ್ನು ಡಿವೈಎಸ್ಪಿ ಧರಣೀಂದ್ರ ಮಾಡಿ ತೋರಿಸಿದ್ದು ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಇಂತಹ  ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ತಿಳಿಸಿದರು.
ನಮ್ಮ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳ ಮಕ್ಕಳು ಇಂತಹ ಸಾಧನೆ ಮಾಡಿರುವುದು ನಿಜಕ್ಕೂ ಪ್ರಶಂಸನಾರ್ಹ, ಇಂತಹ  ಕಾರ್ಯಕ್ರಮಗಳಿಂದಾಗಿ ಅವರು ಮತ್ತಷ್ಟು ಸಾಧನೆ ಮಾಡಲು ಸಹಕಾರಿಯಾಗುತ್ತದೆ  ಎಂದು ಅಭಿಪ್ರಾಯಪಟ್ಟರು.
 ರಾಮನಗರ ಡಿವೈಎಸ್ಪಿ ರಾಮಲಿಂಗಪ್ಪ, ನಗರ ಸಿ.ಪಿ.ಐ. ಸಿದ್ದಪ್ಪ, ನಗರ ಪಿ.ಎಸ್.ಐ. ವಿಜಯ ಕುಮಾರ್,ಪಿ.ಎಸ್.ಐ. ಶರತ್ಕುಮಾರ್ ಸೇರಿದಂತೆ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.