ಬೆಂಗಳೂರು ಗ್ರಾಮಾಂತರ

ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಿ

Published On :

ಕ.ಪ್ರ. ವಾರ್ತೆ  ರಾಮನಗರ  ಜೂ. 3
ಡೆಂಘೀ, ಮಲೇರಿಯಾ, ಚಿಕೂನ್ ಗುನ್ಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಎಂ. ವಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.  
ನಗರಸಭೆ ಸಭಾಂಗಣದಲ್ಲಿ ಸೋಮವಾರ ನಡೆದ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಮನಗರ ಜಿಲ್ಲೆಯಲ್ಲಿ ಡೆಂಘೀ ಜ್ವರದ ಪ್ರಕರಣಗಳು 29ಕ್ಕೇರಿವೆ. ಈ ಕುರಿತು ಎಚ್ಚರ ವಹಿಸಬೇಕು ಎಂದು ತಾಕೀತು ಮಾಡಿದರು.
ಡೆಂಘೀ 29 ಪ್ರಕರಣ : ಕಳೆದ ವಾರ ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ 21 ಇತ್ತು. ಈಗಾಗಲೇ 29ಕ್ಕೇರಿವೆ. ರಾಮನಗರ ತಾಲೂಕಿನಲ್ಲಿ 4, ಚನ್ನಪಟ್ಟಣದಲ್ಲಿ 13, ಕನಕಪುರದಲ್ಲಿ 7 ಹಾಗೂ ಮಾಗಡಿಯಲ್ಲಿ 5 ಡೆಂಘೀ ಪ್ರಕರಣಗಳು ವರದಿಯಾಗಿವೆ ಎಂದು ಅವರು ವಿವರಿಸಿದರು.  
ಡೆಂಘೀ ಹರಡುವ ಈಡೀಸ್ ಈಜಿಪ್ಟಿಯಾ ಸೊಳ್ಳೆಗಳು ಮೊಟ್ಟೆಗಳನ್ನಿಡುವ ಸ್ಥಳಗಳಲ್ಲಿ ಕಸದ ರಾಶಿಯೂ ಒಂದಾಗಿದೆ. ಅಂತಹ ಕಡೆ ಬ್ಲೀಚಿಂಗ್ ಪೌಡರ್ ಸಿಂಪಡಣೆ ಮಾಡಿ ತದ ನಂತರ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಅವರು ತಿಳಿಸಿದರು.
ಸಾಂಕ್ರಾಮಿಕ ರೋಗಗಳು ಮುಂಗಾರು ಪ್ರಾರಂಭದ ಮುಂಚೆ ಅಥವಾ ಮುಂಗಾರು ಸಂದರ್ಭದಲ್ಲಿ ಹರಡುತ್ತವೆ. ಸಾಂಕ್ರಾಮಿಕ ರೋಗ ತಡೆ ನಿಟ್ಟಿನ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕಾರ್ಯಕ್ರಮದಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಗ್ರಾಮ ಪಂಚಾಯಿತಿ ಸಿಬ್ಬಂದಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ವೆಂಕಟೇಶ್ ಹೇಳಿದರು.
ಸೊಳ್ಳೆ ಉತ್ಪತ್ತಿ ತಾಣ: ರಾಮನಗರ ತಾಲೂಕಿನಲ್ಲಿ ಬಿಡದಿ, ಭೈರಮಂಗಲ, ವೃಷಭಾವತಿ ಮತ್ತು ಅರ್ಕಾವತಿ ಹೊಳೆಯ ಪ್ರದೇಶವು ಸೊಳ್ಳೆಗಳ ಉತ್ಪತ್ತಿ ಸ್ಥಳಗಳಾಗಿವೆ. ಈ ಪ್ರದೇಶಗಳಲ್ಲಿ ಮನೆ ಮನೆಗೆ ತೆರಳಿ ಮುಂಜಾಗ್ರತಾ ಕ್ರಮದ ಬಗ್ಗೆ ಜಾಗೃತಿ ಮೂಡಿಸುವ ಕರಪತ್ರ ಹಂಚುವುದು, ಕಾಯಿಲೆ ಲಕ್ಷಣ, ನಿಯಂತ್ರಣದ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಅವರು ಸಲಹೆ ನೀಡಿದರು.  
ಸಾರ್ವಜನಿಕರು ತಮ್ಮ ಮನೆಯ ಜತೆಗೆ ಸುತ್ತಮುತ್ತಲ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳುವ ಮೂಲಕ ಸಾಂಕ್ರಾಮಿಕ ರೋಗ ಹರಡುವ ಸೊಳ್ಳೆಗಳನ್ನು ನಿಯಂತ್ರಿಸಬೇಕು. ಡೆಂಘೀ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣವೇ ಮೊ.8277518129 ಅಥವಾ 9743749830 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಒದಗಿಸಬೇಕು ಎಂದು ತಿಳಿಸಿದರು. ಡೆಂಘೀ ಪ್ರಕರಣವು ಪತ್ತೆಯಾದ ಪ್ರದೇಶ, ಅಲ್ಲಿರುವ ಅನೈರ್ಮಲ್ಯ ಸಮಸ್ಯೆ ಕುರಿತಾದ ವಿವರವನ್ನು ಸಾರ್ವಜನಿಕರು ಸ್ಥಳೀಯ ಆರೋಗ್ಯ ಕೇಂದ್ರ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸುವುದು ಅಗತ್ಯ. ಪರಿಸರ ನೈರ್ಮಲ್ಯ, ಸ್ವಚ್ಛತೆ ಹಾಗೂ ಡೆಂಘೀ ಜ್ವರದ ಬಗ್ಗೆ ಶಾಲಾ ಮಕ್ಕಳಿಂದ ಜಾಥಾ ಆಯೋಜನೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.  
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಘುನಾಥ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ನಾರಾಯಣಸ್ವಾಮಿ, ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ
ನಿಯಂತ್ರಣಾಧಿಕಾರಿ ಡಾ.ಶ್ರೀನಿವಾಸ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವಿಜಯ ನರಸಿಂಹ, ಕ್ಷೇತ್ರ ಶಿಕ್ಷಣಾಧಿಕಾರಿ ಮುನಿಕೆಂಪೆಗೌಡ, ನಗರಸಭೆ ಆಯುಕ್ತ ಯಶವಂತ್, ಆರೋಗ್ಯಾಧಿಕಾರಿ ಡಾ.ರಾಮಚಂದ್ರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.