ಉಪನ್ಯಾಸಕರ ಹೆಚ್ಚುವರಿ ವೇತನ ತಡೆಗೆ ಚಿಂತನೆ
ರಾಮನಗರ: 2012-13ನೇ ಸಾಲಿನಲ್ಲಿ ಜಿಲ್ಲೆಯ ಪಿಯುಸಿ ತರಗತಿಯ ವಿಜ್ಞಾನ ವಿಭಾಗದಲ್ಲಿ ತೀರಾ ಕಡಿಮೆ ಫಲಿತಾಂಶ ಬಂದಿದೆ. ಈ ಹಿನ್ನೆಲೆಯಲ್ಲಿ ವಿಜ್ಞಾನ ಉಪನ್ಯಾಸಕರ ಮುಂಬಡ್ತಿ ಹಾಗೂ ಹೆಚ್ಚುವರಿ ವೇತನ ತಡೆಗೆ ಚಿಂತನೆ ನಡೆಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಲಿಂಗರಾಜು ತಿಳಿಸಿದರು.
ನಗರದ ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಶುಕ್ರವಾರ ನಡೆದ ಪ್ರಾಂಶುಪಾಲರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಬಾರಿಯ ಫಲಿತಾಂಶವನ್ನು ಗಮನಿಸಿದರೆ ವಿಜ್ಞಾನ ವಿಭಾಗದಲ್ಲಿ ಒಬ್ಬ ವಿದ್ಯಾರ್ಥಿ ತೇರ್ಗಡೆಯಾಗಲು ಉಪನ್ಯಾಸಕರು ರು.93 ಸಾವಿರ ವೇತನ ಪಡೆದಿದ್ದಾರೆ ಎಂದರು.
ಸಂಯುಕ್ತ ಪದವಿ ಪೂರ್ವ ಕಾಲೇಜುಗಳಲ್ಲಿ ಪಾಳಿಯಲ್ಲಿ ತರಗತಿಗಳು ನಡೆಯುತ್ತಿವೆ. ಇದರಿಂದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ನಡುವಿನ ಸಂಬಂಧ ಕ್ಷೀಣಿಸುತ್ತಿದೆ. ಪರಿಣಾಮ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ಕುಂಠಿತಗೊಂಡಿದೆ. ಫಲಿತಾಂಶ ಸುಧಾರಣೆಯಾಗಬೇಕಾದರೆ ಪಾಳಿಯಲ್ಲಿ ತರಗತಿ ನಡೆಸುತ್ತಿರುವ ಕಾಲೇಜುಗಳು ದಿನಪೂರ್ತಿ ತರಗತಿ ನಡೆಸಬೇಕು ಎಂದು ಸೂಚಿಸಿದರು.
ಶಿಕ್ಷಣ ಮೂಲಭೂತ ಹಕ್ಕುಗಳಲ್ಲಿ ಒಂದಾಗಿದ್ದು, ಯಾವುದೇ ವಿದ್ಯಾರ್ಥಿ ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಸದುದ್ದೇಶದಿಂದ ಸರ್ಕಾರವು ಹಲವಾರು ಸೌಲಭ್ಯಗಳನ್ನು ನೀಡಿದೆ. ಅದರಲ್ಲೂ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರಿಗೆ ರು.132 ಶುಲ್ಕ ನಿಗದಿಪಡಿಸಲಾಗಿದೆ. ಯಾವುದೇ ಕಾರಣಕ್ಕೂ ನಿಗದಿಗಿಂದ ಹೆಚ್ಚಿನ ಶುಲ್ಕ ಪಡೆಯಬಾರದು ಎಂದು ಲಿಂಗರಾಜು ತಾಕೀತು ಮಾಡಿದರು.
ಎಲ್ಲಾ ಕಾಲೇಜುಗಳಲ್ಲಿಯೂ ಪ್ರತ್ಯೇಕ ಶೌಚಾಲಯಗಳನ್ನು ಕಡ್ಡಾಯವಾಗಿ ನಿರ್ಮಿಸಬೇಕು. ಪ್ರಾಂಶುಪಾಲರು ಜಿಲ್ಲಾ ಅಥವಾ ತಾಲೂಕು ಪಂಚಾಯಿತಿ ಸದಸ್ಯರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸಹಯೋಗದೊಂದಿಗೆ ಶೌಚಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಪ್ರಾಂಶುಪಾಲರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

