ಬೆಂಗಳೂರು ಗ್ರಾಮಾಂತರ

ಕುಡಿವ ನೀರಿನ ಬವಣೆ ನೀಗಿಸಿ, ಸಮರೋಪಾದಿ ಕ್ರಮ ಕೈಗೊಳ್ಳಿ

Published On :

ಕ.ಪ್ರ.ವಾರ್ತೆ ರಾಮನಗರ  ಜೂ.13
ಜಿಲ್ಲೆಯಲ್ಲಿ ತಲೆದೋರಿರುವ ಕುಡಿಯುವ ನೀರಿನ ಬವಣೆ ನೀಗಿಸುವ ನಿಟ್ಟಿನಲ್ಲಿ ಸಮರೋಪಾದಿ ಕ್ರಮ ಕೈಗೊಳ್ಳುವಂತೆ ವಿಧಾನಸಭೆ ಪ್ರತಿಪಕ್ಷ ನಾಯಕ ಎಚ್.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಬರ ಪರಿಹಾರ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತುರ್ತು ಅಗತ್ಯವಿರುವೆಡೆ ಕೊಳವೆ ಬಾವಿಗಳನ್ನು ಕೊರೆಸಬೇಕೆಂದು ತಿಳಿಸಿದರು.
ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿರುವ ಕಡೆ ಈಗಲೂ ಟ್ಯಾಂಕರ್ ಮೂಲಕ ನೀರು ಸರಬರಾಜು ನಡೆಯುತ್ತಿದೆ. ಸಾಧ್ಯವಾದಷ್ಟು ಮಟ್ಟಿಗೆ ಹಳೆಯ ಕೊಳವೆ ಬಾವಿಗಳನ್ನು ಪುನಶ್ಚೇತನಗೊಳಿಸಬೇಕು. ತುರ್ತು ಅಗತ್ಯ ಇರುವೆಡೆ ಹೊಸದಾಗಿ ಕೊಳವೆ ಬಾವಿ ಕೊರೆಸುವುದು ಸೂಕ್ತ ಎಂದರು.   
ರಾಮನಗರ ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಪ್ರಸಕ್ತ ವರ್ಷ ರು.40 ಲಕ್ಷ ವೆಚ್ಚ ಮಾಡಲಾಗಿದೆ. ವಿವಿಧ ವಾರ್ಡ್‌ಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ವಿವರಣೆ ನೀಡಿದರು.
ಸಮಸ್ಯೆಗೆ ಸ್ಪಂದಿಸಿ: ಅಧಿಕಾರಿಗಳು ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಮಾನವೀಯ ನೆಲಗಟ್ಟಿನ ಮೇಲೆ ಕೆಲಸ ಮಾಡಬೇಕು. ಯಾವುದೇ ಕಾರಣಕ್ಕೂ ಜನರನ್ನು ಕಚೇರಿಗೆ ಅಲೆಸುವ ಪರಿಪಾಠ ಮುಂದುವರೆಯಕೂಡದು ಎಂದು ಕುಮಾರಸ್ವಾಮಿ ಎಚ್ಚರಿಸಿದರು.
ರೈತರಿಗೆ ಅರಣ್ಯ ಇಲಾಖೆಯಿಂದ ಉತ್ತಮ ಗಿಡಗಳನ್ನು ವಿತರಣೆ ಮಾಡಿ, ಕೃಷಿ ಅರಣ್ಯೀಕರಣಕ್ಕೆ ಒತ್ತು ನೀಡಬೇಕು. ಮರಳವಾಡಿ. ಹಾರೋಹಳ್ಳಿ ವ್ಯಾಪ್ತಿಯಲ್ಲಿ ಸಾಮಾಜಿಕ ಭದ್ರತಾ ಯೋಜನೆ ಸೌಲಭ್ಯ ದೊರಕದ ಬಗ್ಗೆ ದೂರುಗಳಿದ್ದು, ಆ ಬಗ್ಗೆ ಜರೂರಾಗಿ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದರು.  
ಕೌಂಟರ್ ತೆರೆಯಿರಿ:  ರಾಮನಗರ ತಾಲೂಕಿನಲ್ಲಿ ರೈತರು ಪಹಣಿಗಳನ್ನು ಪಡೆಯಲು ಸಾಕಷ್ಟು ಕಷ್ಟಪಡುತ್ತಿದ್ದಾರೆ. ಮಿನಿ ವಿಧಾನಸೌಧ ಕಚೇರಿ ಆವರಣದಲ್ಲೇ ಹೆಚ್ಚುವರಿ ಕೌಂಟರ್ ತೆರೆದು, ಪಹಣಿ ಮತ್ತು ದಾಖಲೆಗಳು ಸುಲಭವಾಗಿ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಭೂ ಮಾಪನ ವಿಚಾರವಾಗಿ ಸಾಕಷ್ಟು ದೂರುಗಳು ಕೇಳಿ ಬರುತ್ತಿರುವ ಬಗ್ಗೆ ಕಂದಾಯ ಅಧಿಕಾರಿಗಳು ಗಮನ ಹರಿಸಬೇಕು. ಮುಂಗಾರು ಹಂಗಾಮಿನ ಬೇಸಾಯ ಚಟುವಟಿಕೆಗೆ ಪೂರಕವಾಗಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸಮಸ್ಯೆ ಎದುರಾಗಕೂಡದು ಎಂದು ತಿಳಿಸಿದರು.
ಮೂಲ ಸೌಲಭ್ಯ ಕಲ್ಪಿಸಿ: ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆಗೆ ಅಧೀನದಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳಿಗೆ ಅಗತ್ಯ ಕಟ್ಟಡ, ಮೂಲ ಸೌಲಭ್ಯಗಳನ್ನು ಸಲ್ಲಿಸಬೇಕು. ಈ ನಿಟ್ಟಿನಲ್ಲಿ ಪ್ರಸ್ತಾವನೆಯನ್ನು ಸಿದ್ಧಪಡಿಸಬೇಕು ಎಂದರು.  
ಮೊರಾರ್ಜಿ ದೇಸಾಯಿ ವಸತಿ ನಿಲಯಗಳಲ್ಲಿ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ, ಸ್ವಚ್ಛತೆಗೆ ಒತ್ತು ನೀಡಬೇಕು.  ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಕೊಳಾಯಿಗಳಿಗೆ ಮೀಟರ್ ಅಳವಡಿಕೆಗೆ ಮುಂದಾಗಬೇಕು ಎಂದು ಕುಮಾರಸ್ವಾಮಿ ಹೇಳಿದರು.  
ಮುಂಬರುವ ದಿನಗಳಲ್ಲಿ ಶಾಲೆ, ಕಾಲೇಜುಗಳ ಸಮಸ್ಯೆಗಳನ್ನು ಖುದ್ದು ಪರಿಶೀಲಿಸುವುದಾಗಿ ಇದೇ ವೇಳೆ ತಿಳಿಸಿದರು. ಸಭೆಯಲ್ಲಿ  ಜಿಲ್ಲಾಧಿಕಾರಿ ಶ್ರೀರಾಮರೆಡ್ಡಿ, ವಿಧಾನ ಪರಿಷತ್ ಸದಸ್ಯ ಅಪ್ಸರ್ ಆಗಾ, ಜಿ.ಪಂ. ಡಾ.ಸಿದ್ದರಾಮಯ್ಯ, ಅಪರ ಜಿಲ್ಲಾಧಿಕಾರಿ ಅರ್ಚನಾ, ಡಿವೈಎಸ್‌ಪಿ ರಾಮಕೃಷ್ಣ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.