ತೆಂಗು ಖರೀದಿ ಕೇಂದ್ರ ತೆರೆಯಲು ಮಂಜೂರಾತಿ
ರಾಮನಗರ: ಜಿಲ್ಲೆಯ ತೆಂಗು ಬೆಳೆಗಾರರ ಬಹುದಿನದ ಬೇಡಿಕೆಯಂತೆ ರಾಮನಗರದಲ್ಲಿ ತೆಂಗು ಖರೀದಿ ಕೇಂದ್ರ ತೆರೆಯಲು ಸರ್ಕಾರ ಮಂಜೂರಾತಿ ನೀಡಿದೆ. ಹಾಗೂ ತೆಂಗು ಖರೀದಿಗೆ ಅಗತ್ಯವಿರುವ ರು.1 ಕೋಟಿ ಅನುದಾನ ಕೂಡಲೇ ಒದಗಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ಜಿಲ್ಲಾಧಿಕಾರಿ ವಿ.ಶ್ರೀರಾಮರೆಡ್ಡಿ ತಿಳಿಸಿದರು.
ಕಂದಾಯ ಭವನದ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಕೃಷಿ ಸಂಬಂಧಿಸಿದ ಟಾಸ್ಕ್ ಫೋರ್ಸ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವರ್ಷದ ನವಂಬರ್ನಲ್ಲಿ ರೈತರು ತೆಂಗು ಖರೀದಿ ಕೇಂದ್ರ ತೆರೆಯುವಂತೆ ಪ್ರತಿಭಟನೆ ನಡೆಸಿದ್ದರು. ಈ ಕುರಿತು ಜಿಲ್ಲಾಡಳಿತದಿಂದ ತೆಂಗು ಖರೀದಿ ಕೇಂದ್ರ ತೆರೆಯುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸರ್ಕಾರವು ಖರೀದಿ ಕೇಂದ್ರ ಸ್ಥಾಪನೆಗೆ ಹಸಿರು ನಿಶಾನೆ ತೋರಿಸಿದೆ ಎಂದರು.
ನಗರದ ಎಪಿಎಂಸಿ ಆವರಣದಲ್ಲಿ ಖರೀದಿ ಕೇಂದ್ರ ಪ್ರಾರಂಭಿಸಲಾಗುವುದು. ರೈತರಿಂದ ಖರೀದಿಸಿದ ತೆಂಗನ್ನು ಅಲ್ಲಿಯೇ ಶೇಖರಿಸಲಾಗುವುದು. ನಂತರ ಎನ್ಎಎಫ್ಎಡಿಗೆ ಕಳುಹಿಸಿ ಕೊಡಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಸುಮಾರು 88 ಸಾವಿರದಿಂದ 1 ಲಕ್ಷ ಕ್ವಿಂಟಾಲ್ ತೆಂಗು ಉತ್ಪಾದನೆ ಆಗುತ್ತಿದ್ದು, ಇದನ್ನು ಖರೀದಿಸಿ ರೈತರಿಗೆ ಬೆಂಬಲ ನೀಡಲು ಸರ್ಕಾರ ಉದ್ದೇಶಿಸಿದೆ. ಪ್ರತಿ ಕ್ವಿಂಟಾಲ್ಗೆ ರು.1400 ದರವನ್ನು ಸರ್ಕಾರ ನಿಗದಿಪಡಿಸಿದೆ ಎಂದು ಶ್ರೀರಾಮರೆಡ್ಡಿ ಮಾಹಿತಿ ನೀಡಿದರು.
ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಣ್ಣಯ್ಯ, ತೋಟಗಾರಿಕೆ ಉಪ ನಿರ್ದೇಶಕ ಡಾ.ಬಿ. ಕೃಷ್ಣ, ಆಹಾರ ಇಲಾಖೆ ಹಿರಿಯ ಉಪ ನಿರ್ದೇಶಕ ಅಜೀಜುದ್ದೀನ್ ಹಫೀಜ್, ಸಹಕಾರ ಸಂಘಗಳ ಉಪನಿಬಂಧಕ ಕೆ.ಎಲ್.ನರಸಿಂಹಮೂರ್ತಿ, ಎಪಿಎಂಸಿ ಸಹಾಯಕ ನಿರ್ದೇಶಕ ಮಹಮದ್ ಸತ್ತಾರ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

